Cauvery dispute: ಯಾವದೇ ಕಾರಣಕ್ಕೂ ಪ್ರಾಧಿಕಾರದ ಆದೇಶಕ್ಕೆ ಮಣಿದು ತಮಿಳುನಾಡಿಗೆ ನೀರು ಹರಿಸದಂತೆ ಒತ್ತಾಯಿಸಿ ಪ್ರತಿಭಟನೆ
ಮಂಡ್ಯ, ಸೆಪ್ಟೆಂಬರ್, 14: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿರುವ ಆದೇಶಕ್ಕೆ ಮಣಿದು ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಬಾರದು ಎಂದು ಒತ್ತಾಯಿಸಿ ಜಿಲ್ಲಾ ರೈತರ ಹಿತರಕ್ಷಣಾ ಸಮಿತಿ ಮಂಡ್ಯದಲ್ಲಿ ರಸ್ತೆ ತಡೆ ನಡೆಸಿತು.
ನಗರದ ಸರ್.ಎಂ.ವಿ.ಪ್ರತಿಮೆ ಎದುರು ಧರಣಿ ನಿರತರಾಗಿದ್ದ ರೈತರು, ಕನ್ನಡ, ಪ್ರಗತಿಪರ ಹಾಗೂ ವಿವಿಧ ಸಂಘಟನೆಯ ಕಾರ್ಯಕರ್ತರು ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕೆಲ ಕಾಲ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ, ಕೇಂದ್ರ ಸರ್ಕಾರ ಹಾಗೂ ಮಂಡ್ಯ ಜಿಲ್ಲೆಯ ಶಾಸಕರು, ಸಂಸದರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕಾವೇರಿ ನೀರು ನಿಯಂತ್ರಣ ಸಮಿತಿ ತಮಿಳುನಾಡಿಗೆ ಪ್ರತಿನಿತ್ಯ 5000 ಕ್ಯೂಸೆಕ್ ನೀರು ಬಿಡುಗಡೆ ಮಾಡಬೇಕೆಂದು ಸೂಚಿಸಿದೆ. ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ನೀರು ಬಿಡುವುದಿಲ್ಲ ಎಂದು ಹೋರಾಟಗಾರರಿಗೆ ಮಾತು ಕೊಟ್ಟಿದೆ. ಜೊತೆಗೆ ಸರ್ವ ಪಕ್ಷ ಸಭೆಯಲ್ಲಿ ನೀರು ಬಿಡುವುದಿಲ್ಲ ಎಂದು ದೃಢ ನಿರ್ಧಾರ ಮಾಡುವ ಬದಲು ಕಾನೂನು ತಜ್ಞರ ಜೊತೆ ಮಾತುಕತೆ ನಡೆಸಿ ನೀರು ಬಿಡುವ ಕುರಿತು ತೀರ್ಮಾನ ಕೈಗೊಳ್ಳಲಾಗುವುದೆಂದು ಹೇಳಿರುವುದು ಕಾವೇರಿ ಕೊಳ್ಳದ ರೈತರಿಗೆ ಮಾಡಿದ ದ್ರೋಹವಾಗಿದೆ ಎಂದು ಆರೋಪಿಸಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ಇಂತಹ ನಿಲುವು ಗೊಂದಲಕಾರಿಯಾಗಿದ್ದು, ಸ್ವಷ್ಟ ನಿರ್ಧಾರ ಮಾಡದೆ ಇರುವುದು ಅನುಮಾನ ಮೂಡಿಸಿದೆ. ನೆರೆ ರಾಜ್ಯಕ್ಕೆ ನೀರು ಬಿಡುವ ಹುನ್ನಾರ ಮಾಡಲಾಗಿದೆ ಎಂದು ದೂರಿದರು.
ಇನ್ನು ಕನ್ನಂಬಾಡಿ ಅಣೆಕಟ್ಟೆಯಲ್ಲಿ ನೀರಿನ ಮಟ್ಟ 97 ಅಡಿಗೆ ಕುಸಿದಿದೆ. ಕುಡಿಯಲು ಸಹ ನೀರು ಸಾಕಾಗುವುದಿಲ್ಲ, ಇಂತಹ ಸಮಯದಲ್ಲಿ ನೀರು ಬಿಟ್ಟರೆ ರಾಜ್ಯ ಸರ್ಕಾರವೇ ಸಂಪೂರ್ಣ ಹೊಣೆ ಎಂದ ಪ್ರತಿಭಟನಾಕಾರರು ಸುಪ್ರೀಂ ಕೋರ್ಟ್‌ನಲ್ಲಿ ಸೆಪ್ಟೆಂಬರ್ 21 ರಂದು ನಡೆಯುವ ವಿಚಾರಣೆ ವೇಳೆ ಕಾವೇರಿ ಕೊಳ್ಳದ ಪ್ರದೇಶದಲ್ಲಿರುವ ಜಲಾಶಯಗಳ ವಾಸ್ತವ ಪರಿಸ್ಥಿತಿ ಕುರಿತು ಸಮರ್ಥವಾದ ವಿಚಾರ ಮಂಡನೆ ಮಾಡುವ ಮೂಲಕ ರೈತರ ಹಿತ ಕಾಪಾಡಲು ಮುಂದಾಗಬೇಕಾಗಿದೆ ಎಂದು ಆಗ್ರಹಿಸಿದರು.
ಸಂಸದರು ಮತ್ತು ಶಾಸಕರು ಕಾವೇರಿ ವಿಚಾರದಲ್ಲಿ ರೈತಪರ ಹೋರಾಟಕ್ಕೆ ಇಳಿಯಬೇಕು. ರಾಜ್ಯ ಸರ್ಕಾರ ನೀರು ಬಿಡದಂತೆ ಒತ್ತಡ ಹಾಕಬೇಕು. ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ ಸಂಕಷ್ಟ ಕಾಲದಲ್ಲಿ ಕರ್ನಾಟಕ ರಾಜ್ಯದ ರೈತರ ಕಾಪಾಡಲು ಮುಂದಾಗಬೇಕು ಎಂದು ಒತ್ತಾಯಿಸಿದರು.
ಕುಡಿಯುವ ನೀರಿಗೆ ಕಾವೇರಿ ಕೊಳ್ಳದ ಜಲಾಶಯಗಳನ್ನು ಅವಲಂಬಿಸಿರುವ ಬೆಂಗಳೂರು ಮತ್ತು ಮೈಸೂರಿನ ಜನತೆ ಕಾವೇರಿ ಹೋರಾಟ ಬೆಂಬಲಿಸಿ ಪ್ರತಿಭಟನೆಗೆ ಮುಂದಾಗಬೇಕು. ಇಲ್ಲದಿದ್ದರೆ ಕುಡಿಯುವ ನೀರು ಅಭಾವ ಸೃಷ್ಟಿಯಾಗಿ ನೀರಿಲ್ಲದಂತಾಗುವುದರ ಜೊತೆಗೆ ಮುಂದಿನ ಪೀಳಿಗೆಗೆ ಕಾವೇರಿ ವಿಚಾರದಲ್ಲಿ ದೊಡ್ಡ ಅನ್ಯಾಯ ಮಾಡಿದಂತಾಗುತ್ತದೆ ಎಂದು ಎಚ್ಚರಿಸಿದರು.
ರಾಜ್ಯ ಸರ್ಕಾರದ ಗೊಂದಲಕಾರಿ ನಿಲುವಿನಿಂದಾಗಿ ರೈತರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಗಳಿದ್ದು, ನೀರು ಬಿಡುವುದಿಲ್ಲ ಎಂದು ತೀರ್ಮಾನಿಸುವವರೆಗೂ ಹೋರಾಟ ಮುಂದುವರಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ವೇಳೆ ರೈತ ಹಿತ ರಕ್ಷಣಾ ಸಮಿತಿಯ ಸುನಂದ ಜಯರಾಂ, ಕೆ.ಬೋರಯ್ಯ, ಮಾಜಿ ಶಾಸಕ ಕೆ.ಟಿ.ಶ್ರೀಕಂಠೇಗೌಡ, ರೈತ ಸಂಘದ ಇಂಡವಾಳು ಚಂದ್ರಶೇಖರ್, ಮುದ್ದೇಗೌಡ, ಕೀಲಾರ ಕೃಷ್ಣ, ಮೈಶುಗರ್ ಮಾಜಿ ಅಧ್ಯಕ್ಷ ಸಿದ್ದರಾಮೇಗೌಡ, ಕನ್ನಡಸೇನೆ ಮಂಜುನಾಥ್, ದಸಂಸ ಎಂ.ವಿ. ಕೃಷ್ಣ ಸೇರಿದಂತೆ ಇತರರು ಇದ್ದರು.












Click it and Unblock the Notifications