ರೈತರಿಗೆ ಸಂಪೂರ್ಣ ನೆರವಿನ ಭರವಸೆ ಕೊಟ್ಟ ಉತ್ತರ ಕನ್ನಡ ಜಿಲ್ಲಾಡಳಿತ
ಕಾರವಾರ, ಜೂನ್ 23: ರೈತರು ಆತ್ಮಹತ್ಯೆ ಮಾಡಿಕೊಳ್ಳಬಾರದು ಜಿಲ್ಲಾಡಳಿತ ನಿಮ್ಮ ಸಂಪೂರ್ಣ ನೆರವಿಗಿದೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಹೇಳಿದರು. ಜಿಲ್ಲೆಯಲ್ಲಿ 2019 ರಿಂದ 2023-24ನೇ ಸಾಲಿನ ವರೆಗೆ 43 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಡಿಸಿ ಗಂಗೂಬಾಯಿ ಮಾನಕರ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಡೆದ ರೈತರ ಆತ್ಮಹತ್ಯೆ ಪ್ರಕರಣ ಕುರಿತ ವಿಡಿಯೋ ಕಾನ್ಫರೆನ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. "ಎಲ್ಲಾ ಸಮಸ್ಯೆಗಳಿಗೆ ಸಾವು ಒಂದೇ ಅಂತಿಮ ಪರಿಹಾರವಲ್ಲ. ದೇಶಕ್ಕೆ ಅನ್ನ ನೀಡುವ ರೈತರು ಯಾವುದೇ ಕಾರಣಕ್ಕೂ ಆತ್ಮಹತ್ಯೆಯಂತಹ ಕಠಿಣ ನಿರ್ಧಾರ ಕೈಗೊಳ್ಳಬಾರದು, ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಜಿಲ್ಲಾಡಳಿತ ಸಂಪೂರ್ಣ ನೆರವು ನೀಡಲಿದೆ" ಎಂದು ಜಿಲ್ಲಾಧಿಕಾರಿಗಳು ಭರವಸೆ ನೀಡಿದರು.

"ದೇಶದ ಬೆನ್ನೆಲುಬಾದ ರೈತರು ಯಾವುದೇ ಕಾರಣಗಳಿಗೂ ಆತ್ಮಹತ್ಯೆ ಮಾಡಿಕೊಳ್ಳಬಾರದು. ಜಿಲ್ಲೆಯಲ್ಲಿ ಮುಂಡಗೋಡ ತಾಲೂಕಿನಲ್ಲಿ ಹೆಚ್ಚಿನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರು ಆತ್ಮಹತ್ಯೆ ಮಾಡಿಕೊಂಡರೆ ಅವರ ಕುಟುಂಬ ಸಾಕಷ್ಟು ಸಂಕಷ್ಟ ಅನುಭವಿಸುವುದರಿಂದ ರೈತರು ಯಾವುದೇ ಕಾರಣಕ್ಕೂ ಆತ್ಮಹತ್ಯೆ ಹಾದಿ ತುಳಿಯಬಾರದು" ಎಂದು ಕರೆ ನೀಡಿದರು.
"ಸರ್ಕಾರ ಮತ್ತು ಜಿಲ್ಲಾಡಳಿತ ಸದಾ ರೈತರೊಂದಿಗಿದ್ದು, ರೈತರಿಗೆ ಯಾವುದೇ ಸಮಸ್ಯೆ ಎದುರಾದರೆ ಸ್ಥಳೀಯ ತಹಶೀಲ್ದಾರ್, ಜಿಲ್ಲಾಡಳಿತಕ್ಕೆ ಅಥವಾ ಜಿಲ್ಲಾ ಉಚಿತ ಸಹಾಯವಾಣಿ ದೂರವಾಣಿ ಸಂಖ್ಯೆ 1950ಗೆ ಕರೆ ಮಾಡಿ ಗಮನಕ್ಕೆ ತಂದಲ್ಲಿ ರೈತರ ಸಮಸ್ಯೆಗಳನ್ನು ಬಗೆಹರಿಸಲು ಜಿಲ್ಲಾಡಳಿತ ಸದಾ ಸಿದ್ದವಿದೆ" ಎಂದರು.
ಸಾಲ ವಸೂಲಾತಿ ಕಿರುಕುಳ: ಬ್ಯಾಂಕುಗಳು ರೈತರಿಗೆ ನೀಡಿರುವ ಸಾಲ ವಸೂಲಿಗೆ ಸಂಬಂಧಿಸಿದಂತೆ ರೈತರು ಆರ್ಥಿಕವಾಗಿ ಸಬಲವಾಗುವರೆಗೂ ಸಾಲ ಪಾವತಿಸಲು ಒತ್ತಡ ಹಾಗೂ ಕಿರುಕುಳ ನೀಡದಂತೆ ಬ್ಯಾಂಕುಗಳಿಗೆ ನಿರ್ದೇಶನ ನೀಡಲಾಗಿದ್ದು, ಜಿಲ್ಲೆಯ ರೈತರು ಯಾವುದೇ ಕಾರಣಕ್ಕೂ ಎದೆಗುಂದದೇ ಧೈರ್ಯವಾಗಿರುವಂತೆ ತಿಳಿಸಿದರು.
ಜಿಲ್ಲಾಧಿಕಾರಿ, ರೈತರ ಕುಟುಂಬದ ಜೊತೆ ಸರ್ಕಾರ ಮತ್ತು ಜಿಲ್ಲಾಡಳಿತವಿದ್ದು, ಯಾವುದೇ ರೀತಿಯ ಸಹಾಯ ಬೇಕಾದಲ್ಲಿ ರೈತರು ಮುಕ್ತವಾಗಿ ತಹಶೀಲ್ದಾರ್ ಮೂಲಕ ಅರ್ಜಿ ಸಲ್ಲಿಸಿದ್ದಲ್ಲಿ ಆದ್ಯತೆ ಮೇಲೆ ಅಗತ್ಯ ಸಹಕಾರ ನೀಡಲಾಗುತ್ತದೆ ಎಂದು ಭರವಸೆ ಕೊಟ್ಟರು.
ಈಗಾಗಲೇ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ರೈತರ ಕುಟುಂಬಗಳಿಗೆ ಸರ್ಕಾರದಿಂದ ಸಿಗಬೇಕಾದ ಸವಲತ್ತುಗಳನ್ನು ವಿತರಿಸಲಾಗಿದ್ದು, ರೈತರು ಮರಣ ಹೊಂದಿದ ನಂತರ ರೈತನ ಪತ್ನಿಗೆ ಪ್ರತಿ ತಿಂಗಳು ರೂ. 2 ಸಾವಿರ ಮಾಸಾಶನ ಹಾಗೂ ಸರ್ಕಾರದಿಂದ ಸಿಗಬೇಕಾದ ಸವಲತ್ತುಗಳು ಕುಟುಂಬಕ್ಕೆ ಸಂಬಂಧಪಟ್ಟ ಇಲಾಖೆಗಳಿಂದ ತಲುಪಿಸಲಾಗಿದೆಯೇ? ಎಂಬುದರ ಬಗ್ಗೆ ಆತ್ಮಹತ್ಯೆ ಮಾಡಿಕೊಂಡ ಕುಟುಂಬ ಸದಸ್ಯರಿಂದ ಖಾತರಿಪಡಿಸಿಕೊಂಡ ಜಿಲ್ಲಾಧಿಕಾರಿಗಳು, ಪ್ರತಿ ಮಾಸಿಕ ಮಾಸಾಶನ ರೈತರ ಪತ್ನಿಯ ಖಾತೆಗೆ ಜಮಾವಾಗಿರುವ ಬಗ್ಗೆ, ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಹಾಗೂ ಉಚಿತ ವಿದ್ಯಾಭ್ಯಾಸ ವ್ಯವಸ್ಥೆ ಕಲ್ಪಿಸಲು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ಎಲ್ಲಾ ರೈತರು ತಮ್ಮ ಜಮೀನಿನ ಪಹಣಿಗೆ ಆಧಾರ್ ಜೋಡಣೆ ಮಾಡಿಕೊಳ್ಳುವ ಮೂಲಕ ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳ ಲಾಭ ಪಡೆಯಬಹುದಾಗಿದೆ. ರೈತರು ಆತ್ಮಹತ್ಯೆಯ ಸಂದರ್ಭದಲ್ಲಿ ಪಂಚನಾಮೆ ವರದಿಯ ಜೊತೆ ರೈತರ ಕುಟುಂಬದ ಬೇಡಿಕೆ ವರದಿಯನ್ನು ಲಗತ್ತಿಸಿ ಸಲ್ಲಿಸುವಂತೆ ಕೃಷಿ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಕಂದಾಯ, ತೋಟಗಾರಿಕೆ ಹಾಗೂ ಕೃಷಿ ಇಲಾಖೆಗಳು ರೈತರ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸುವಂತೆ ತಿಳಿಸಿದರು.
ಇತ್ತೀಚಿಗೆ ಮಾನಸಿಕ ಖಿನತೆ, ಆರ್ಥಿಕ ಒತ್ತಡ, ಸಾಲಭಾದೆ ಮುಂತಾದ ಕಾರಣಗಳಿಂದ ಆತ್ಮಹತ್ಯೆಯ ಪ್ರಕರಣಗಳು ಹೆಚ್ಚಾಗುತ್ತಿದ್ದು, ರಾಷ್ಟಿಯ ಟೆಲಿ ಮಾನಸಿಕ ಆರೋಗ್ಯ ಕಾರ್ಯಕ್ರಮದ ಟೆಲಿ ಮನಸ್ ಉಚಿತ ಸಹಾಯವಾಣಿ ದೂರವಾಣಿ ಸಂಖ್ಯೆ 14416ಗೆ ಕರೆ ಮಾಡಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದ್ದು, ರೈತರು ಕೂಡ ಈ ದೂರವಾಣಿ ಸಂಖ್ಯೆಗೆ ಕರೆ ಮಾಡಿ ತಮ್ಮ ಮಾನಸಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದರು.












Click it and Unblock the Notifications