ದಾವಣಗೆರೆಯಲ್ಲಿ ನೂರಾರು ಪ್ರತಿಭಟನಾಕಾರರಿಂದ ಹೆದ್ದಾರಿ ತಡೆ
ದಾವಣಗೆರೆ, ಸೆಪ್ಟೆಂಬರ್ 25: ಭೂ ಸುಧಾರಣಾ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ವಿರೋಧಿಸಿ ದಾವಣಗೆರೆಯಲ್ಲಿ ಇಂದು ಬೆಳ್ಳಂಬೆಳಿಗ್ಗೆ ರೈತ ಸಂಘಟನೆಗಳು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದವು.
ನಗರದ ಜಿಲ್ಲಾ ಪಂಚಾಯತ್ ಮುಂಭಾಗ ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ ಹುಚ್ಚವ್ವನಹಳ್ಳಿ ಮಂಜುನಾಥ್ ಬಣದಿಂದ ರಾಷ್ಟ್ರೀಯ ಹೆದ್ದಾರಿ 4 ತಡೆದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. ಅಲ್ಲದೆ ಲಾರಿಗಳು ಸೇರಿದಂತೆ ವಾಹನಗಳನ್ನು ತಡೆದು ಟಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
11.30ಕ್ಕೆ ನಗರದ ಬಾಡಾ ಕ್ರಾಸ್ ಬಳಿ ಸಿಪಿಎಂ, ರಾಜ್ಯ ಕಿಸಾನ್ ಕಾಂಗ್ರೆಸ್, ರೈತ ಸಂಘ ಹಾಗೂ ಹಸಿರು ಸೇನೆ ಸೇರಿದಂತೆ ಹತ್ತಕ್ಕೂ ಹೆಚ್ಚು ಸಂಘಟನೆಯ ಕಾರ್ಯಕರ್ತರು ಹೆದ್ದಾರಿ ತಡೆ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಇಡೀ ದೇಶವನ್ನೇ ಮಾರಾಟಕ್ಕಿಟ್ಟಿದೆ. ಈಗಾಗಲೇ ಬಿಎಸ್ಎನ್ ಎಲ್ ಸೇರಿದಂತೆ ಹಲವು ಇಲಾಖೆಗಳನ್ನು ಖಾಸಗೀಕರಣ ಮಾಡಲು ಹೊರಟಿದ್ದು, ಈಗ ದೇಶಕ್ಕೆ ಅನ್ನ ನೀಡುವ ರೈತನ ಮೇಲೆ ಮರಣಮೃದಂಗ ಬಾರಿಸಲು ಹೊರಟಿದೆ ಎಂದು ಕಿಡಿಕಾರಿದರು.

ರೈತರಿಗೆ ಮಾರಕವಾದ ಈ ಕಾಯ್ದೆಗಳನ್ನು ಕೂಡಲೇ ಹಿಂಪಡೆಯಬೇಕು. ಇಲ್ಲವಾದರೆ ನಿರಂತರವಾಗಿ ಹೋರಾಟ ಮಾಡುವುದಾಗಿ ರೈತರು ಎಚ್ಚರಿಕೆ ನೀಡಿದರು. ನೂರಕ್ಕೂ ಹೆಚ್ಚು ವಿವಿಧ ಸಂಘಟನೆಗಳ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿದ್ದು, ಕಿಲೋ ಮೀಟರ್ ಗಟ್ಟಲೆ ವಾಹನಗಳು ನಿಂತಿದ್ದವು. ಯಾವುದೇ ಅಹಿತಕರ ಘಟನೆ ನಡೆಯದಂತೆ ನೂರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿತ್ತು.

ಹೆದ್ದಾರಿ ತಡೆ ನಡೆಸಿದ ರೈತರು ಹಾಗೂ ವಿವಿಧ ಸಂಘಟನೆಗಳು, ಸೋಮವಾರ ನಡೆಯಲಿರುವ ಕರ್ನಾಟಕ ಬಂದ್ ಗೆ ಇದೊಂದು ಮಾದರಿಯಷ್ಟೆ. ಕರ್ನಾಟಕ ಬಂದ್ ನಲ್ಲಿ ಮತ್ತಷ್ಟು ರೈತರು ಸೇರಲಿದ್ದೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.












Click it and Unblock the Notifications