ಕೊಪ್ಪಳ; ದ್ರಾಕ್ಷಿ, ದಾಳಿಂಬೆ, ಕಲ್ಲಂಗಡಿ, ಜೇನು ಮೇಳ
ದ್ರಾಕ್ಷಿ, ದಾಳಿಂಬೆ, ಪೇರಲ, ಅಂಜೂರ, ಕಲ್ಲಂಗಡಿ, ಕರಬೂಜ, ಬಾಳೆ, ಪಪ್ಪಾಯ, ಅಣಬೆ ಹಾಗೂ ಜೇನು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಕೊಪ್ಪಳದಲ್ಲಿ ಆಯೋಜನೆ ಮಾಡಲಾಗಿದೆ.
ಕೊಪ್ಪಳ, ಫೆಬ್ರವರಿ 13; ಕೊಪ್ಪಳದ ತೋಟಗಾರಿಕೆ ಇಲಾಖೆ ವತಿಯಿಂದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಮತ್ತು ಮಹಾ ಶಿವರಾತ್ರಿ ಪ್ರಯುಕ್ತ ವಿವಿಧ ಬಗೆಯ ಹಣ್ಣು ಮತ್ತು ಜೇನು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜನೆ ಮಾಡಲಾಗಿದೆ.
ರೈತರಿಂದ ನೇರವಾಗಿ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಹಣ್ಣುಗಳನ್ನು ಒದಗಿಸಲು ರೈತರಿಂದ ಖರೀದಿಸಿ ರೈತರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ದ್ರಾಕ್ಷಿ, ದಾಳಿಂಬೆ, ಪೇರಲ, ಅಂಜೂರ, ಕಲ್ಲಂಗಡಿ, ಕರಬೂಜ, ಬಾಳೆ, ಪಪ್ಪಾಯ, ಅಣಬೆ ಹಾಗೂ ಜೇನು ಪ್ರದರ್ಶನ ಮತ್ತು ಮಾರಾಟ ಮೇಳ-2023 ಫೆಬ್ರವರಿ 16 ರಿಂದ 19ರ ತನಕ ನಡೆಯಲಿದೆ.
ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಕೊಪ್ಪಳ ತೋಟಗಾರಿಕೆ ಉಪನಿರ್ದೇಶಕರ ಕಚೇರಿ ಆವರಣದಲ್ಲಿ ನಡೆಯಲಿರುವ ಮೇಳವನ್ನು ಫೆಬ್ರವರಿ 16ರ ಬೆಳಗ್ಗೆ 10.30ಕ್ಕೆ ಉದ್ಘಾಟಿಸಲಿದ್ದಾರೆ. ಆಸಕ್ತ ರೈತರು, ಜನರು ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ಭಾಗವಹಿಸಬಹುದು.

ಈ ಕಾರ್ಯಕ್ರಮದಲ್ಲಿ ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವ ಹಾಲಪ್ಪ ಬಸಪ್ಪ ಆಚಾರ್, ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಪಾಲ್ಗೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ಕರಡಿ ಸಂಗಣ್ಣ, ಶಾಸಕರಾದ ಅಮರೇಗೌಡ ಎಲ್. ಪಾಟೀಲ್ ಬಯ್ಯಾಪೂರ, ಪರಣ್ಣ ಈಶ್ವರಪ್ಪ ಮುನವಳ್ಳಿ ಮುಂತಾದವರು ಆಗಮಿಸಲಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಟಿ. ಕೆ. ಅನಿಲಕುಮಾರ್, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರಕುಮಾರ ಕಠಾರಿಯಾ, ಜಿಲ್ಲಾಧಿಕಾರಿಗಳಾದ ಎಂ. ಸುಂದರೇಶ ಬಾಬು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆ ವಿಶೇಷ ಆಹ್ವಾನಿತರಾಗಿದ್ದಾರೆ.
ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ. ಎಂ. ಹನುಮಂತಪ್ಪ, ಕಲಬುರಗಿ ವಿಭಾಗದ ತೋಟಗಾರಿಕೆ ಜಂಟಿ ನಿರ್ದೇಶಕರಾದ ಮಂಜುನಾಥ ನಾರಾಯಣಪುರ, ಮುನಿರಾಬಾದ್ ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಡಾ ಪಿ. ಎಂ. ಗಂಗಾಧರಪ್ಪ ಮುಂತಾದವರು ಪಾಲ್ಗೊಳ್ಳಲಿದ್ದಾರೆ.
ಬೆಂಗಳೂರು ಲಾಲ್‌ಬಾಗ್ ತೋಟಕಾರಿಕೆ ನಿರ್ದೇಶಕರಾದ ಡಾ. ನಾಗೇಂದ್ರ ಪ್ರಸಾದ್, ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ, ಕೊಪ್ಪಳ ಕೃಷಿ ವಿಸ್ತರಣಾ ಕ್ಷೇದ್ರದ ವಿಸ್ತರಣಾ ಮುಂದಾಳು ಡಾ. ಎಂ. ವಿ. ರವಿ, ಕೊಪ್ಪಳ ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ಕೃಷ್ಣ ಸಿ ಉಕ್ಕುಂದ ಹಾಗೂ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ಪೂರ್ಣಿಮಾ ಅಂದಾನಿ ಭಾಗವಹಿಸಲಿದ್ದಾರೆ.

ಆಸಕ್ತ ರೈತರು ಹೆಸರು ನೋಂದಾಯಿಸಿ; ಹಣ್ಣು ಮತ್ತು ಜೇನು ಪ್ರದರ್ಶನ ಹಾಗೂ ಮಾರಾಟ ಮೇಳದಲ್ಲಿ ಭಾಗವಹಿಸಲು ಆಸಕ್ತಿ ಹೊಂದಿರುವ ಬೆಳೆಗಾರರು ತಮ್ಮ ಹೆಸರು ನೋದಾಯಿಸುವಂತೆ ಕೊಪ್ಪಳ ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ಕೃಷ್ಣ ಉಕ್ಕುಂದ್ ತಿಳಿಸಿದ್ದಾರೆ.
ಈ ಮೇಳದಲ್ಲಿ ಭಾಗವಹಿಸುವ ಆಸಕ್ತ ಜಿಲ್ಲೆಯ ದ್ರಾಕ್ಷಿ, ದಾಳಿಂಬೆ, ಕಲ್ಲಂಗಡಿ, ಅಂಜೂರ, ಪೇರಲ ಮತ್ತು ಕರಬೂಜ ಬೆಳೆಗಾರರು ಮುಂಗಡವಾಗಿ ಮಾರಾಟ ಮಳಿಗೆಗಳನ್ನು ಕಾಯ್ದಿರಿಸಲು ತಮ್ಮ ಹೆಸರನ್ನು ನೋಂದಾಯಿಸಬೇಕು.
ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು, ಆಸಕ್ತ ರೈತರು ತಮ್ಮ ಪಹಣಿ ಪ್ರತಿಯೊಂದಿಗೆ, ತಮ್ಮ ಹೆಸರು, ವಿಳಾಸ, ಸರ್ವೆ ನಂಬರ್, ಬೆಳೆ, ತಳಿಗಳು ಹಾಗೂ ವಿಸ್ತೀರ್ಣ ಮುಂತಾದ ವಿವರಗಳೊಂದಿಗೆ ನೋಂದಣಿ ಮಾಡಿಸಿ, ತಮ್ಮ ಉತ್ಪನ್ನಗಳಿಗೆ ಯೋಗ್ಯ ಬೆಲೆ ದೊರೆಯಲು ಹಾಗೂ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲು ಕರೆ ನೀಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ 9741057047, 9844874822, ಗಂಗಾವತಿ 9481305830, ಕುಷ್ಟಗಿ 8861697989, ಯಲಬುರ್ಗಾ 9611888607 ಸಂಖ್ಯೆಗೆ ಕರೆ ಮಾಡಬಹುದಾಗಿದೆ.












Click it and Unblock the Notifications