Karnataka budget 2023: ಕೃಷಿ ಕ್ಷೇತ್ರಕ್ಕೆ ಸಿಕ್ಕ ಕೊಡುಗೆ ಏನು?, ಇಲ್ಲಿದೆ ವಿವರ
ಬೆಂಗಳೂರು, ಜುಲೈ, 07: ಸಿಎಂ ಮತ್ತು ಹಣಕಾಸು ಮಂತ್ರಿ ಸಿದ್ದರಾಮಯ್ಯ ಅವರು ಇಂದು (ಜುಲೈ 07) 2023ನೇ ಸಾಲಿನ ರಾಜ್ಯದ ಅಯವ್ಯಯವನ್ನು ಮಂಡಿಸಿದ್ದಾರೆ. ಹಾಗಾದರೆ ಈ ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕೆ ಏನೆಲ್ಲ ಕೊಡುಗೆ ನೀಡಿದ್ದಾರೆ ಎನ್ನುವ ವಿವರವನ್ನು ಇಲ್ಲಿ ತಿಳಿಯಿರಿ.
ರೈತರಿಗೆ ಶೂನ್ಯ ಬಡಿದರದ ಸಾಲದ ಮಿತಿಯನ್ನು 3-5 ಲಕ್ಷಕ್ಕೆ ಏರಿಕೆ ಮಾಡಲಾಗಿದೆ. ಜೊತೆಗೆ ಮಧ್ಯಮಾವಧಿ, ದೀರ್ಘಾವಧಿ ಸಾಲ ಮಿತಿಯನ್ನು 10-15 ಲಕ್ಷಕ್ಕೆ ಏರಿಸಲಾಗಿದ್ದು, ಗುಡ್ಡಗಾಡು ಪ್ರದೇಶದ ರೈತರಗೆ ಪಿಕ್ ವ್ಯಾನ್ ಖರೀದಿಗೆ 7 ಲಕ್ಷದವರೆಗೆ ಸಾಲ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ನಮ್ಮ ಸರ್ಕಾರ ಹಿಂದೆ ಜಾರಿಗೊಳಿಸಿದ್ದ ಕೃಷಿ ಭಾಗ್ಯ ಯೋಜನೆಯು ಅತ್ಯಂತ ಜನಪ್ರಿಯ ಹಾಗೂ ಉಪಯುಕ್ತವಾಗಿತ್ತು. ಈ ಯೋಜನೆಯನ್ನು ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆಯೊಂದಿಗೆ ಸಂಯೋಜಿಸಿ 100 ಕೋಟಿ ರೂಪಾಯಿ ವೆಚ್ಚದಲ್ಲಿ ಮರು ಜಾರಿಗೊಳಿಸಲಾಗುವುದು. ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ಕೃಷಿ ಮಾರುಕಟ್ಟೆಗೆ ಸಂಬಂಧಿಸಿದ ವಲಯಗಳಲ್ಲಿ ನಾವೀನ್ಯತೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೃಷಿ ಉದ್ಯಮಗಳಿಗೆ ಉತ್ತೇಜನ ನೀಡಲು ʻನವೋದ್ಯಮʼ ಎಂಬ ಹೊಸ ಯೋಜನೆಯಡಿ 10 ಕೋಟಿ ರೂಪಾಯಿ ಒದಗಿಸಲಾಗುವುದು.
ರೈತರು ಬೆಳೆದ ಉತ್ಪನ್ನಗಳನ್ನು ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಅನುಕೂಲವಾಗುವಂತೆ "ನಂದಿನಿ" ಮಾದರಿಯಲ್ಲಿ ರೈತ ಉತ್ಪನ್ನಗಳಿಗೆ ಏಕೀಕೃತ ಬ್ರಾಂಡಿಂಗ್ ವ್ಯವಸ್ಥೆ ರೂಪಿಸಲು 10 ಕೋಟಿ ರೂಪಾಯಿ ಒದಗಿಸಲಾಗುವುದು. ರೈತ ಉತ್ಪಾದಕ ಸಂಸ್ಥೆಗಳನ್ನು ಬಲಪಡಿಸಲು ಹಿಂದುಳಿದ ತಾಲೂಕುಗಳ 100 ರೈತ ಉತ್ಪಾದಕ ಸಂಸ್ಥೆಗಳಿಗೆ ಸಹಕಾರಿ ಮತ್ತು ವಾಣಿಜ್ಯ ಬ್ಯಾಂಕುಗಳು ನೀಡುವ ತಲಾ 20 ಲಕ್ಷ ರೂ.ವರೆಗಿನ ಸಾಲಕ್ಕೆ ಶೇಕಡಾ 4ರ ಬಡ್ಡಿ ಸಹಾಯಧನ ನೀಡಲಾಗುವುದು.
ರೈತ ಉತ್ಪಾದಕ ಸಂಸ್ಥೆಗಳ ಉತ್ಪನ್ನಗಳನ್ನು ರಫ್ತು ಮಾಡಲು ಅನುಕೂಲವಾಗುವಂತೆ ಗೋದಾಮು, ಶೀತಲಗೃಹ ನಿರ್ಮಾಣ ಮತ್ತು ಇತರ ಮೂಲಸೌಕರ್ಯ ಸೃಜನೆಗೆ ಯೋಜನಾ ವೆಚ್ಚದ ಗರಿಷ್ಠ ಶೇಕಡಾ 20ರಷ್ಟು, ಒಂದು ಕೋಟಿ ರೂಪಾಯಿ ಮೀರದಂತೆ Seed Capital ಒದಗಿಸಲಾಗುವುದು. ರಾಜ್ಯದಲ್ಲಿ ಬೆಳೆದ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ರಫ್ತನ್ನು ಉತ್ತೇಜಿಸಲು ಕೆಪೆಕ್ ಸಂಸ್ಥೆಯ ಮೂಲಕ ರೈತ ಉತ್ಪಾದಕ ಸಂಸ್ಥೆಗಳು, ನವೋದ್ಯಮಿಗಳು, ಕಿರು ಆಹಾರ ಸಂಸ್ಕರಣಾ ಉದ್ದಿಮೆದಾರರಿಗೆ ಬೆಂಬಲ ನೀಡಲು 5 ಕೋಟಿ ರೂಪಾಯಿ ಒದಗಿಸಲಾಗುವುದು.
ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಕೃಷಿ ಯಂತ್ರೋಪಕರಣಗಳನ್ನು ಬಾಡಿಗೆ ಆಧಾರದಲ್ಲಿ ಒದಗಿಸುವ ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು. ಈ ಕೇಂದ್ರಗಳನ್ನು ಇನ್ನಷ್ಟು ಬಲಪಡಿಸಿ, ಇವುಗಳಲ್ಲಿ 300 ಹೈಟೆಕ್ ಹಾರ್ವೆಸ್ಟರ್ ಹಬ್‌ಗಳನ್ನು ಹಂತ-ಹಂತವಾಗಿ ಸ್ಥಾಪಿಸಲು ಉದ್ದೇಶಿಸಲಾಗಿದೆ. 2023-24ನೇ ಸಾಲಿನಲ್ಲಿ 100 ಹಬ್‌ಗಳನ್ನು ಸ್ಥಾಪಿಸಲು 50 ಕೋಟಿ ರೂಪಾಯಿ ಒದಗಿಸಲಾಗುವುದು.
ಹಾಗೆಯೇ ರೈತರ ಆದಾಯವನ್ನು ಹೆಚ್ಚಿಸುವುದರಲ್ಲಿ ತೋಟಗಾರಿಕಾ ಬೆಳೆಗಳು ಪ್ರಮುಖ ಪಾತ್ರವಹಿಸುತ್ತವೆ. ಆದ್ದರಿಂದ ರಾಜ್ಯದ ತೋಟಗಾರಿಕಾ ವಲಯದ ಸಾಮರ್ಥ್ಯವನ್ನು ಹೆಚ್ಚಿಸಲು ತೆಂಗು, ಅಡಿಕೆ, ದ್ರಾಕ್ಷಿ, ದಾಳಿಂಬೆ, ಮಾವು ಮತ್ತಿತರ ಹಣ್ಣು, ತರಕಾರಿ, ಹೂವು ಬೆಳೆಗಳ ಉತ್ಪಾದನೆ, ಸಂಸ್ಕರಣೆ, ಬ್ರಾಂಡಿಂಗ್ ಮತ್ತು ರಫ್ತಿಗೆ ಹೆಚ್ಚಿನ ಒತ್ತು ನೀಡಲಾಗುವುದು. 2023-24ನೇ ಸಾಲಿನಲ್ಲಿ 5 ಕೋಟಿ ರೂಪಾಯಿ ವೆಚ್ಚದಲ್ಲಿ ರೋಗ ನಿಯಂತ್ರಣಕ್ಕೆ ಕ್ರಮಗಳನ್ನು ಕೈಗೊಳ್ಳಲಾಗುವುದು. ತೋಟಗಾರಿಕಾ ಉತ್ಪನ್ನಗಳ ಸಂಸ್ಕರಣೆಗಾಗಿ 8 ಶೀತಲ ಘಟಕಗಳನ್ನು ನಿರ್ಮಾಣ ಮಾಡಲಾಗುವುದು.
ಕಾಫಿಗೆ ಬ್ರಾಂಡಿಂಗ್ ಮಾಡಲು ಕ್ರಮ
ಅನನ್ಯವಾದ ರುಚಿ ಮತ್ತು ಕಂಪನ್ನು ಹೊಂದಿರುವ ಚಿಕ್ಕಮಗಳೂರು, ಕೊಡಗು ಮತ್ತು ಬಾಬಾ ಬುಡನ್‌ಗಿರಿಯ ಅರೇಬಿಕಾ ಕಾಫಿ ವೈವಿಧ್ಯಗಳು GI Tag ಹೊಂದಿವೆ. ರಾಜ್ಯದ ಕಾಫಿಯನ್ನು ಇನ್ನಷ್ಟು ಪ್ರಚುರಪಡಿಸಿ ಜನಪ್ರಿಯಗೊಳಿಸಲು ಮತ್ತು ಕಾಫಿ ಎಕೋ ಟೂರಿಸಂ ಅನ್ನು ಉತ್ತೇಜಿಸಲು ಕರ್ನಾಟಕದ ಕಾಫಿಗೆ ಬ್ರಾಂಡಿಂಗ್ ಮಾಡಲು ಕ್ರಮ ವಹಿಸಲಾಗುವುದು.
ವಿಶೇಷ ಕಂಪು, ರುಚಿ ಮತ್ತು ಸೊಗಡಿನಿಂದ ಜನಮನದಲ್ಲಿ ನೆಲೆಸಿರುವ ಮೈಸೂರು ಮಲ್ಲಿಗೆ, ನಂಜನಗೂಡು ರಸಬಾಳೆ ಹಾಗೂ ಮೈಸೂರು ವೀಳ್ಯದೆಲೆಗಳು GI Tagಗಳನ್ನು ಪಡೆದಿವೆ. ಇವುಗಳ ಉತ್ಪಾದನೆ, ಸಂಶೋಧನೆ, ಮಾರುಕಟ್ಟೆ ಮತ್ತು ಬ್ರಾಂಡಿಂಗ್ ಉತ್ತೇಜಿಸಲು ನೂತನ ಕಾರ್ಯಕ್ರಮವನ್ನು ರೂಪಿಸಲಾಗುವುದು.
ವಿದ್ಯಾರ್ಥಿಗಳಿಗಾಗಿ ತೋಟಗಾರಿಕೆ ಯೋಜನೆ
ವಾಣಿಜ್ಯ ಹೂವಿನ ರಫ್ತಿನಲ್ಲಿ ಕರ್ನಾಟಕ ಅಗ್ರಸ್ಥಾನ ಹೊಂದುವ ಸಾಮರ್ಥ್ಯ ಹೊಂದಿದ್ದು, ಇವುಗಳ ತಳಿಗಳ ಕೊರತೆ ನಿವಾರಿಸಲು ಅಂತಹ ತಳಿಗಳನ್ನು ಆಮದು ಮಾಡಿಕೊಂಡು ರೈತರಿಗೆ ಕೈಗೆಟಕುವ ದರದಲ್ಲಿ ಒದಗಿಸಲು ಕ್ರಮವಹಿಸಲಾಗುವುದು. ಅಲ್ಲದೆ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತೋಟಗಾರಿಕಾ ಕ್ಷೇತ್ರದ ಬಗ್ಗೆ ಪ್ರಾಯೋಗಿಕ ಅರಿವು ಮೂಡಿಸಲು "ವಿದ್ಯಾರ್ಥಿಗಳಿಗಾಗಿ ತೋಟಗಾರಿಕೆ" ಯೋಜನೆಯನ್ನು ಜಾರಿಗೊಳಿಸಲಾಗುವುದು.












Click it and Unblock the Notifications