ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ ಅಧಿಕ ಮಳೆ
ಮಡಿಕೇರಿ, ಜೂನ್ 08: ಕೊಡಗು ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಈವರೆಗೆ 351 ಮಿ. ಮೀ. ಮಳೆಯಾಗಿದ್ದು, ವಾಡಿಕೆಗಿಂತ ಶೇ.20 ರಷ್ಟು ಹೆಚ್ಚಾಗಿ ಮಳೆಯಾಗಿರುತ್ತದೆ. ರೈತರು ಮುಂಗಾರು ಹಂಗಾಮಿನ ಪೂರ್ವ ಸಿದ್ದತೆಯಲ್ಲಿದ್ದು, ಜಿಲ್ಲೆಯಲ್ಲಿ ಭತ್ತದ ಸಸಿ ಮಡಿ, ಮುಸುಕಿನ ಜೋಳ ಬಿತ್ತನೆ ಕಾರ್ಯವು ಜೂನ್, ಜುಲೈ ಮತ್ತು ಆಗಸ್ಟ್ ತಿಂಗಳಿನಲ್ಲಿ ಭತ್ತದ ನಾಟಿ ಕಾರ್ಯ ಕೈಗೊಳ್ಳಲಾಗುತ್ತದೆ.
ಜಿಲ್ಲೆಯಲ್ಲಿ ಮುಂಗಾರು ಮಳೆ ಉತ್ತಮವಾಗಿ ಸುರಿಯುವ ಮುನ್ಸೂಚನೆ ಇರುವ ಕಾರಣ ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ರೀತಿಯ ವ್ಯತ್ಯಯವಾಗದಂತೆ ಗಮನಹರಿಸುವಂತೆ ಸಗಟು ಹಾಗೂ ಚಿಲ್ಲರೆ ರಸಗೊಬ್ಬರ ಮಾರಾಟಗಾರರಿಗೆ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ ನೀಡಿದ್ದಾರೆ.

ರೈತರಿಗೆ ಅನುಕೂಲವಾಗುವಂತೆ ಅಗತ್ಯವಿರುವ ಬಿತ್ತನೆ ಬೀಜ, ರಸಗೊಬ್ಬರ ಮತ್ತು ಇತರೆ ಕೃಷಿ ಪರಿಕರಗಳನ್ನು ಇಲಾಖೆಯ ರೈತ ಸಂಪರ್ಕ ಕೇಂದ್ರಗಳು, ಸಹಕಾರ ಸಂಘಗಳು ಮತ್ತು ಖಾಸಗಿ ಮಾರಾಟಗಾರರಲ್ಲಿ ದಾಸ್ತಾನು ಮಾಡಲಾಗಿದೆ.
ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಒಟ್ಟು 1871 ಕ್ವಿಂಟಾಲ್ ಭತ್ತ ಮತ್ತು 41 ಕ್ವಿಂಟಾಲ್ ಮುಸುಕಿನ ಜೋಳದ ಬಿತ್ತನೆ ಬೀಜಗಳನ್ನು ಸರಬರಾಜು ಮಾಡುವ ಗುರಿ ಹೊಂದಲಾಗಿದ್ದು, ರೈತ ಸಂಪರ್ಕ ಕೇಂದ್ರಗಳಲ್ಲಿ 1067.5 ಕ್ವಿಂಟಾಲ್ ಭತ್ತ ಹಾಗೂ 2.4 ಕ್ವಿಂಟಾಲ್ ಮುಸುಕಿನ ಜೋಳದ ವಿವಿಧ ತಳಿಯ ಬಿತ್ತನೆ ಬೀಜಗಳು ಸರಬರಾಜಾಗಿದ್ದು, ಇಲ್ಲಿಯವರೆಗೆ 392.5 ಕ್ವಿಂಟಾಲ್ ಭತ್ತದ ಬಿತ್ತನೆ ಬೀಜ ವಿತರಣೆ ಮಾಡಲಾಗಿದೆ.
ವಾಡಿಕೆಗಿಂತ ಅಧಿಕ ಮಳೆ: ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಸೋಮಸುಂದರ ಮಾತನಾಡಿ, ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆ ಸುರಿದ ಮಳೆ 368.58 ಮಿ. ಮೀ ಆಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 180.12 ಮಿ. ಮೀ ಮಳೆಯಾಗಿತ್ತು. ರೈತರು ಕೃಷಿ ಚಟುವಟಿಕೆ ಆರಂಭಿಸಿದ್ದು, ಹಾಲಿ ರೈತ ಸಂಪರ್ಕ ಕೇಂದ್ರಗಳಲ್ಲಿ 677.4 ಕ್ವಿಂಟಾಲ್ ಬಿತ್ತನೆ ಬೀಜದ ದಾಸ್ತಾನು ಇರುತ್ತದೆ ಎಂದು ಹೇಳಿದರು.
ಈಗಾಗಕೇ ಜಿಲ್ಲಾಡಳಿತ ಮುಂಗಾರು ಸಂದರ್ಭದಲ್ಲಿ ಗುಣಮಟ್ಟದ ರಸಗೊಬ್ಬರ ಹಾಗೂ ಬಿತ್ತನೆ ಬೀಜ ಪೂರೈಕೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಕೃಷಿಕರಿಂದ ದೂರು ಕೇಳಿ ಬರದಂತೆ ಎಚ್ಚರವಹಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಸೂಚನೆ ನೀಡಿದೆ.
ಜಿಲ್ಲೆಯಲ್ಲಿ ಮೇ ತಿಂಗಳಲ್ಲಿ ಉತ್ತಮ ಮಳೆಯಾಗಿದ್ದು, ಜಿಲ್ಲೆಗೆ 80,946 ಮೆಟ್ರಿಕ್ ಟನ್ ರಸಗೊಬ್ಬರ ಬೇಡಿಕೆ ಇದೆ. ಯೂರಿಯಾ, ಡಿಎಪಿ, ಎಂಒಪಿ, ಕಾಂಪ್ಲೆಕ್ಸ್, ಎಸ್‍ಎಸ್‍ಪಿಗೆ ಬೇಡಿಕೆ ಇದ್ದು, ಈಗಾಗಲೇ 15,885 ಮೆಟ್ರಿಕ್ ಟನ್ ರಸಗೊಬ್ಬರ ಸರಬರಾಜು ಆಗಿದ್ದು, ಒಟ್ಟಾರೆ 35,062 ಮೆ.ಟನ್ ರಸಗೊಬ್ಬರ ದಾಸ್ತಾನು ಇದೆ.
ಮುಂಗಾರು ಸಂದರ್ಭದಲ್ಲಿ ಭತ್ತ ಹಾಗೂ ಮುಸುಕಿನ ಜೋಳ ಪ್ರಮುಖ ಬೆಳೆಯಾಗಿದ್ದು, ಭತ್ತವನ್ನು ನೀರಾವರಿ ಮತ್ತು ಮಳೆಯಾಶ್ರಿತ ಸೇರಿ 29 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯುವ ಗುರಿ ಹೊಂದಲಾಗಿದೆ. 3500 ಹೆಕ್ಟೇರ್ ಪ್ರದೇಶದಲ್ಲಿ ಮುಸುಕಿನ ಜೋಳ ಬೆಳೆಯುವ ಗುರಿ ಹೊಂದಲಾಗಿದೆ. ಹಾಗೆಯೇ 70 ಹೆಕ್ಟೇರ್ ಪ್ರದೇಶದಲ್ಲಿ ರಾಗಿ ಬೆಳೆಯುವ ಗುರಿ ಹೊಂದಲಾಗಿದೆ. ಒಟ್ಟು 32,570 ಹೆಕ್ಟೇರ್ ಪ್ರದೇಶದಲ್ಲಿ ಮುಂಗಾರು ಕೃಷಿ ಮಾಡುವ ಗುರಿ ಇದೆ.
ಪ್ರಸ್ತುತ ಜಿಲ್ಲೆಯ 16 ರೈತ ಸಂಪರ್ಕ ಕೇಂದ್ರಗಳಲ್ಲಿ ರೈತರಿಗೆ ಅವಶ್ಯವಿರುವ ವಿವಿಧ ತಳಿಗಳ ಬಿತ್ತನೆ ಬೀಜಗಳನ್ನು ಕೆಎಸ್‍ಎಸ್‍ಸಿ ಮತ್ತು ಎನ್‍ಎಸ್‍ಸಿ ಸಂಸ್ಥೆಗಳಿಂದ ಪಡೆದು, ದಾಸ್ತಾನು ಮಾಡಲಾಗಿದ್ದು, ವಿತರಣೆಗೆ ಕ್ರಮವಹಿಸಲಾಗಿರುತ್ತದೆ. ವಿವಿಧ ಇಲಾಖೆ ಅಧಿಕಾರಿಗಳು, ಸಗಟು ಹಾಗೂ ಚಿಲ್ಲರೆ ರಸಗೊಬ್ಬರ ಮಾರಾಟಗಾರರ ಜೊತೆ ಜಿಲ್ಲಾಡಳಿತ ಸಭೆಯನ್ನು ನಡೆಸಿ ಅವರಿಗೆ ಸಲಹೆಗಳನ್ನು ನೀಡಿದೆ.
ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಭತ್ತ ಮತ್ತು ಮುಸುಕಿನ ಜೋಳ ಪ್ರಮುಖ ಬೆಳೆಯಾಗಿದ್ದು, ಕೃಷಿ ಚಟುವಟಿಕೆಗೆ ಭೂಮಿ ಹದ ಮಾಡುವ ಕಾರ್ಯ ನಡೆದಿದೆ. ಜೂನ್ 15ರ ನಂತರ ಭತ್ತ ಸಸಿಮಡಿ ಕಾರ್ಯ ಆರಂಭವಾಗಲಿದೆ. ಹಾಗೆಯೇ ಮುಂಗಾರು ಆರಂಭದಲ್ಲಿ ಮುಸುಕಿನ ಜೋಳ ಬಿತ್ತನೆ ಕಾರ್ಯ ಪ್ರಾರಂಭವಾಗಲಿದೆ. ಜಿಲ್ಲೆಯಲ್ಲಿ ಜನವರಿಯಿಂದ ಮೇ ತಿಂಗಳ ಅಂತ್ಯಕ್ಕೆ ವಾಡಿಕೆ ಮಳೆ 252 ಮಿ. ಮೀ. ಆಗಿದ್ದು, ಈಗಾಗಲೇ ಈ ಬಾರಿ ಸರಾಸರಿ 248 ಮಿ.ಮೀ. ಮಳೆಯಾಗಿರುವುದು ವಿಶೇಷವಾಗಿದೆ. ಅದರಲ್ಲೂ ಮೇ ತಿಂಗಳಲ್ಲಿ ಹೆಚ್ಚಿನ ಮಳೆಯಾಗಿದ್ದು, ರೈತರು ಸಂತಸಗೊಂಡಿದ್ದಾರೆ.












Click it and Unblock the Notifications