ಜ. 5ರಿಂದ ಬೆಂಗಳೂರಲ್ಲಿ ಅಂತರರಾಷ್ಟ್ರೀಯ ಸಿರಿಧಾನ್ಯ ಮೇಳ, ವಿಶೇಷತೆಗಳು

ಬೆಂಗಳೂರು, ಜನವರಿ 03: ಬೆಂಗಳೂರು ನಗರದಲ್ಲಿ ಮೂರು ದಿನಗಳ ಕಾಲ ಅಂತರರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ವಾಣಿಜ್ಯ ಮೇಳ-2024 ಆಯೋಜನೆ ಮಾಡಲಾಗಿದೆ. ಇದಕ್ಕೆ ಪೂರ್ವಭಾವಿಯಾಗಿ ಸಿರಿಧಾನ್ಯ ಮತ್ತು ಅದರ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆ ಹಾಗೂ ರಫ್ತುದಾರರ ಸಮಾವೇಶಕ್ಕೆ ಚಾಲನೆ ಸಿಕ್ಕಿದೆ.

ನಗರದ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಅಂತರರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ವಾಣಿಜ್ಯ ಮೇಳ-2024 ನಡೆಯಲಿದೆ. ಜನವರಿ 5 ರಿಂದ 7ರ ತನಕ ಮೇಳ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

Millets And Organics International Trade Fair Bengaluru From Jan 5 Key Features

ಮುಖ್ಯ ಅತಿಥಿಗಳಾಗಿ ಕೇಂದ್ರ ಹಣಕಾಸು ಮತ್ತು ಕಾರ್ಪೋರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಆಗಮಿಸುವರು. ಕೇಂದ್ರ ಸಂಸದೀಯ ವ್ಯವಹಾರ, ಗಣಿ ಮತ್ತು ಕಲ್ಲಿದ್ದಲು ಖಾತೆ ಸಚಿವ ಪ್ರಹ್ಲಾದ್ ಜೋಶಿ ಅಂತರರಾಷ್ಟ್ರೀಯ ಕಾರ್ಯಾಗಾರ ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಸ್ತು ಪ್ರದರ್ಶನ ಉದ್ಘಾಟನೆ ಮಾಡಲಿದ್ದಾರೆ.

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಹಾಗೂ ಆಹಾರ ಸಂಸ್ಕರಣಾ ಕೈಗಾರಿಕೆಗಳ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ರೈತರ ಕಾರ್ಯಾಗಾರ ಉದ್ಘಾಟಿಸುವರು. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಸಹ ಆಗಮಿಸುವರು.

ಕರ್ನಾಟಕದ ಕೃಷಿ ಸಚಿವರು ಹಾಗೂ ಅಂತರರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ವಾಣಿಜ್ಯ ಮೇಳ-2024ರ ಉಸ್ತುವಾರಿ ಸಮಿತಿ ಅಧ್ಯಕ್ಷ ಎನ್. ಚಲುವರಾಯಸ್ವಾಮಿ, ಮಲ್ಲೇಶ್ವರ ಕ್ಷೇತ್ರದ ಶಾಸಕ ಡಾ. ಅಶ್ವತ್ಥ ನಾರಾಯಣ ಸಿ. ಎನ್. ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ರಫ್ತುದಾರರ ಸಮಾವೇಶ; ಅಂತರರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ವಾಣಿಜ್ಯ ಮೇಳ-2024ರ ಪೂರ್ವಭಾವಿಯಾಗಿ ಸಿರಿಧಾನ್ಯ ಮತ್ತು ಅದರ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆ ಹಾಗೂ ರಫ್ತುದಾರರ ಸಮಾವೇಶವನ್ನು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಉದ್ಘಾಟಿಸಿದ್ದಾರೆ.

ಸಮಾವೇಶ ಉದ್ದೇಶಿಸಿ ಮಾತನಾಡಿದ ಸಚಿವರು, "ರಾಜ್ಯವು ಸಿರಿಧಾನ್ಯ ಉತ್ಪಾದನೆಯಲ್ಲಿ 4ನೇ ಸ್ಥಾನದಲ್ಲಿದ್ದು, ಅದನ್ನು ಮೊದಲ ಸ್ಥಾನಕ್ಕೆ ಕೊಂಡಯ್ಯಲು ಸರ್ಕಾರ ಸಂಕಲ್ಪ ಮಾಡಿದೆ. ಸ್ಥಳೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಿರಿಧಾನ್ಯಗಳ ಬೇಡಿಕೆ ಹಾಗೂ ಬಳಕೆಯನ್ನು ಹೆಚ್ಚಿಸಿ ಬೆಳೆಗಾರರಿಗೆ ಹಾಗೂ ಗ್ರಾಹಕರಿಗೆ ಅನುಕೂಲ ಮಾಡುವುದೇ ಈ ಸಿರಿಧಾನ್ಯ ರಫ್ತಿನ ಮೂಲ ಉದ್ದೇಶವಾಗಿದೆ" ಎಂದರು.

"ರಾಜ್ಯದಲ್ಲಿ ವಿಶೇಷವಾಗಿ ಚಿತ್ರದುರ್ಗ, ಹಾವೇರಿ, ಬಳ್ಳಾರಿ, ಕೊಪ್ಪಳ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಂದ ಬೆಳೆದ ಸಿರಿಧಾನ್ಯಗಳನ್ನು ರಫ್ತು ಮಾಡಲಾಗುತ್ತಿದೆ. ಸಿರಿಧಾನ್ಯಗಳ ಉತ್ಪಾದನೆಯಲ್ಲಿ ದೇಶದಲ್ಲಿ 4ನೇ ಸ್ಥಾನದಲ್ಲಿರುವ ರಾಜ್ಯವನ್ನು ಪ್ರಥಮ ಸ್ಥಾನಕ್ಕೆ ತರಲು ಸರಕಾರ ಸಂಪೂರ್ಣವಾಗಿ ಸಹಕಾರ ನೀಡಲಿದೆ" ಎಂದು ಹೇಳಿದರು.

"ಬಹು ಬೇಡಿಕೆಯಲ್ಲಿರುವ ರಾಗಿ, ಸಾಮೆ, ಉದ್ದು, ನವಣೆ ಮುಂತಾದ ಸಿರಿಧಾನ್ಯಗಳನ್ನು ಮೊದಲು ಯಥೇಚ್ಛವಾಗಿ ಬೆಳೆಯಲಾಗುತ್ತಿತ್ತು. ಇಂದಿನ ಆಧುನಿಕ ಜೀವನದಲ್ಲಿ ಜನ ಸಾವಯವ ಹಾಗೂ ಸಿರಿಧಾನ್ಯಗಳ ಉತ್ಪನ್ನಗಳಿಗೆ ಹೆಚ್ಚು ಒತ್ತು ನೀಡುತ್ತಿದ್ದಾರೆ. ಸಾವಯವ ಹಾಗೂ ಸಿರಿಧಾನ್ಯಗಳ ಬಳಕೆಯು ಆರೋಗ್ಯಕ್ಕೆ ಹೆಚ್ಚು ಉಪಯುಕ್ತವಾಗಿದ್ದು, ಇವುಗಳ ಉತ್ಪಾದನೆಯನ್ನು ಹೆಚ್ಚಿಸಲು ಒತ್ತು ನೀಡಬೇಕಾಗಿದೆ" ಎಂದು ಸಚಿವರು ಕರೆ ನೀಡಿದರು.

"ಸಿರಿಧಾನ್ಯಗಳ ಬಳಕೆ ಹಾಗೂ ಉತ್ಪಾದನೆ ಕುರಿತಂತೆ ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಕಾರ್ಯವಾಗಬೇಕಾಗಿದೆ. ಸಾವಯವ ಕೃಷಿ ಪದ್ಧತಿಯಲ್ಲಿ ಬೆಳೆದ ಉತ್ಪನ್ನಗಳಿಗೆ ಜಗತ್ತಿನಾದ್ಯಂತ ಹೆಚ್ಚಿನ ಬೇಡಿಕೆಯಿದೆ. ಸಿರಿಧಾನ್ಯ ಹಾಗೂ ಸಾವಯವ ಕೃಷಿ ಪದ್ಧತಿ, ಮಾರುಕಟ್ಟೆ ವ್ಯವಸ್ಥೆ ಬಗ್ಗೆ ಮಾಹಿತಿ ಪಡೆಯಲು ಈ ಮೇಳ ಸಹಕಾರಿಯಾಗಲಿದೆ. ರೈತರು ತಮ್ಮ ಕೃಷಿ ಪದ್ಧತಿಯಲ್ಲಿ ಸಾವಯವ ಹಾಗೂ ಸಿರಿಧಾನ್ಯಗಳ ಉತ್ಪಾದನೆಗೆ ಹೆಚ್ಚು ಒತ್ತು ನೀಡಬೇಕು. ಈ ಕುರಿತು ಇಲಾಖೆಯಿಂದ ರೈತರಿಗೆ ಹೆಚ್ಚಿನ ಪ್ರೋತ್ಸಾಹ ಹಾಗೂ ತಿಳುವಳಿಕೆ ನೀಡಲಾಗುವುದು" ಎಂದು ಸಚಿವರು ಭರವಸೆ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+