ಮುಂಗಾರು ಹಂಗಾಮು: ರಸ ಗೊಬ್ಬರ, ಬಿತ್ತನೆ ಬೀಜ ಮಾರಾಟಗಾರರಿಗೆ ಎಚ್ಚರಿಕೆ
ಬೆಂಗಳೂರು, ಜೂನ್ 01: ಮುಂಗಾರು ಹಂಗಾಮು 2024ರ ಕೃಷಿ ಚಟುವಟಿಕೆಗಳು ಆರಂಭವಾಗಿವೆ. ಮಾರಟಗಾರರು ರಸಗೊಬ್ಬರ ಮತ್ತು ಬಿತ್ತನೆ ಬೀಜಗಳನ್ನು ರೈತರಿಗೆ ಹೆಚ್ಚಿನ ದರದಲ್ಲಿ ಮಾರಾಟ ಮಾಡುತ್ತಿರುವ ಪ್ರಕರಣಗಳು ಕಂಡು ಬಂದಿವೆ. ಈ ಹಿನ್ನಲೆಯಲ್ಲಿ ಜಿಲ್ಲಾಡಳಿತಗಳು ಮಾರಾಟಗಾರರಿಗೆ ಎಚ್ಚರಿಕೆ ನೀಡಿವೆ. ಪರವಾನಗೆ ರದ್ದು ಪಡಿಸಿ, ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಖಡಕ್ ಸೂಚನೆ ನೀಡಲಾಗಿದೆ.
ವಿವಿಧ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳು ಮುಂಗಾರು ಹಂಗಾಮು ಪೂರ್ವ ಸಿದ್ಧತಾ ಸಭೆಯನ್ನು ನಡೆಸುತ್ತಿದ್ದಾರೆ. ಉಪ ಕೃಷಿ ನಿರ್ದೇಶಕರು ಮತ್ತು ಸಹಾಯಕ ಕೃಷಿ ನಿರ್ದೇಶಕರಗಳು ಹಾಗೂ ಕೃಷಿ ಇಲಾಖೆ ಅಧಿಕಾರಿಗಳ ಸಭೆಯನ್ನು ನಡೆಸಿ, ಬಿತ್ತನೆ ಬೀಜ, ರಸಗೊಬ್ಬರದ ದಾಸ್ತಾನುಗಳ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ.

ಎಲ್ಲೆಲ್ಲಿ ಬಿತ್ತನೆ ಬೀಜಗಳು ಲಭ್ಯವಿರುತ್ತವೆಯೋ ಅಲ್ಲಿಂದ ಕೊರತೆ ಇರುವ ಕಡೆ ಪೂರೈಸಲು ಕ್ರಮ ಕೈಗೊಳ್ಳಬೇಕು. ಎಲ್ಲಾ ಕೃಷಿ ಪರಿಕರಗಳನ್ನು ಗರಿಷ್ಟ ಮಾರಾಟ ದರದೊಳಗೆ ಮಾರಾಟ ಮಾಡುತ್ತಿರುವ ಬಗ್ಗೆ ಹಾಗೂ ಯಾವುದೇ ರೀತಿಯ ಸಂಪರ್ಕಗಳನ್ನು ಮಾಡದ ರೀತಿಯಲ್ಲಿ ಸಮನ್ವಯ ಸಾಧಿಸಿ ಮಾರಾಟಗಾರರು ರೈತರಿಗೆ ರಸಗೊಬ್ಬರ ಮತ್ತು ಬಿತ್ತನೆ ಬೀಜಗಳನ್ನು ಹೆಚ್ಚಿನ ದರದಲ್ಲಿ ಮಾರಾಟ ಮಾಡಿದರೆ ಅಂತವರ ಪರವಾನಿಗೆಯನ್ನು ರದ್ದು ಪಡಿಸುವ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.
ಪೂರ್ವ ಮುಂಗಾರು ಮಳೆ: ವಿವಿಧ ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಮಳೆ ಉತ್ತಮವಾಗಿ ಸುರಿದಿದ್ದು, ಕೃಷಿ ಚಟುವಟಿಕೆ ಆರಂಭವಾಗಿದೆ. ವಿವಿಧ ಬೆಳೆಗಳ ಬಿತ್ತನೆ ಕಾರ್ಯ ಪ್ರಗತಿಯಲ್ಲಿದೆ. ಬಿತ್ತನೆ ಬೀಜಗಳು, ರಸಗೊಬ್ಬರಗಳ ಲಭ್ಯತೆ ಬಗ್ಗೆ ಕೃಷಿ ಇಲಾಖೆ ಅಧಿಕಾರಿಗಳು ನಿರಂತರ ಗಮನವನ್ನು ಹರಿಸಿದ್ದಾರೆ.
ಬಿತ್ತನೆ ಬೀಜ, ರಸಗೊಬ್ಬರ ಗುಣಮಟ್ಟವನ್ನು ಕಾಯ್ದುಕೊಂಡು ಸೂಕ್ತ ರೀತಿಯಲ್ಲಿ ವಿತರಿಸಲು ಮತ್ತು ಹಂಗಾಮಿಗೆ ಅನುಗುಣವಾಗಿ ಅಗತ್ಯ ಕೃಷಿ ಚಟುವಟಿಕೆಗಳನ್ನು ಸಕಾಲದಲ್ಲಿ ಕೈಗೊಂಡು ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯ ಕುರಿತು ರೈತರಿಗೆ ಮಾಹಿತಿ ನೀಡುವಂತೆಯೂ ತಿಳಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಈಗಾಗಲೇ ಬಿತ್ತನೆ ಬೀಜದ ಕುರಿತು ಪೋಸ್ಟ್ ಹಾಕಿದ್ದಾರೆ. '2023-24ನೇ ಸಾಲಿನ ಭೀಕರ ಬರಗಾಲದಿಂದಾಗಿ ರಾಜ್ಯದಲ್ಲಿ ಬೀಜೋತ್ಪಾದನೆ ಗಣನೀಯವಾಗಿ ಕುಂಠಿತವಾಗಿದ್ದು, ಬೀಜೋತ್ಪಾದಕರಿಂದ ಖರೀದಿಸುವ ಬಿತ್ತನೆ ಬೀಜದ ದರಗಳು ಸಹ ಗಣನೀಯವಾಗಿ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಬಿತ್ತನೆ ಬೀಜದ ಮಾರಾಟದ ದರ ಏರಿಕೆಯಾಗಿದೆ. ಈ ದರ ಏರಿಕೆ ಮುಂಗಾರು ಬೆಳೆ ಬೆಳೆಯುವ ಎಲ್ಲ ರಾಜ್ಯಗಳಲ್ಲಿಯೂ ಆಗಿದ್ದು ಉಳಿದ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಬೀಜಗಳ ದರ ಕಡಿಮೆ ಇದೆ' ಎಂದು ಹೇಳಿದ್ದಾರೆ.
'ಬಿತ್ತನೆ ಬೀಜಗಳ ಮಾರಾಟ ದರಗಳನ್ನು ನಿಗದಿಪಡಿಸುವ ಸಂದರ್ಭಗಳಲ್ಲಿ ಬಿತ್ತನೆ ಬೀಜ ಖರೀದಿ ದರಗಳು ಹಾಗೂ ಗರಿಷ್ಠ APMC ಮಾರಾಟ ದರಗಳನ್ನು ಆಧಾರವಾಗಿ ಪರಿಗಣಿಸಲಾಗುತ್ತದೆ. 2022-23ನೇ ಸಾಲಿಗೆ ಹೋಲಿಸಿದಾಗ 2023-24ನೇ ಸಾಲಿನಲ್ಲಿ ವಿವಿಧ ಬೆಳೆಗಳ ಖರೀದಿ ದರಗಳಲ್ಲಿ (Procurement Rates) ಗರಿಷ್ಠ ಶೇ.59.58ರಷ್ಟು ವ್ಯತ್ಯಾಸವಾಗಿರುತ್ತದೆ' ಎಂದು ತಿಳಿಸಿದ್ದಾರೆ.
'ರೈತರು ತಮ್ಮ ಜಮೀನಿನಲ್ಲಿಯೇ ಬೀಜಗಳನ್ನು ಉತ್ಪಾದನೆ ಮಾಡುತ್ತಾರೆ. ಇದನ್ನು ಕರ್ನಾಟಕ ರಾಜ್ಯ ಬೀಜ ನಿಗಮ ನಿ., ರಾಷ್ಟ್ರೀಯ ರಾಜ್ಯ ಬೀಜ ನಿ., ಕರ್ನಾಟಕ ಎಣ್ಣೆಬೀಜ ಬೆಳೆಗಾರರ ಮಹಾ ಮಂಡಳಿ ಹಾಗೂ ಖಾಸಗಿ ಸಂಸ್ಥೆಗಳು ಕೈಗೊಂಡು ಸರಬರಾಜು ಮಾಡುತ್ತವೆ. ಈ ಬಾರಿ ಹೆಸರು ಬೆಳೆಯ ಬಿತ್ತನೆ ಬೀಜಗಳ ಎಲ್-1 ದರವು ಶೇ.48.5, ಉದ್ದು ಬೆಳೆಯ ದರವು ಶೇ.37.72, ತೊಗರಿ ಬೆಳೆಯ ವಿವಿಧ ತಳಿಗಳ ಬಿತ್ತನೆ ಬೀಜಗಳ ದರದಲ್ಲಿ ಶೇ.28.29 ರಿಂದ 37.69ರಷ್ಟು ಮತ್ತು ಜೋಳದ ಬೆಳೆಯ ಎಲ್-1 ದರವು ಶೇ.7.66 ರಿಂದ ಶೇ.33.33ರಷ್ಟು ಹೆಚ್ಚಾಗಿರುತ್ತದೆ. ಬೀಜಗಳ ಖರೀದಿ ದರದಲ್ಲಿನ ಹೆಚ್ಚಳದ ಮೊತ್ತವು ಬೀಜೋತ್ಪಾದನೆಯಲ್ಲಿ ತೊಡಗಿರುವ ರೈತರಿಗೆ ವರ್ಗಾವಣೆಯಾಗಿರುತ್ತದೆ ಎನ್ನುವುದು ಗಮನಾರ್ಹ ಅಂಶವಾಗಿದೆ' ಎಂದು ವಿವರಿಸಿದ್ದಾರೆ.
"ಪ್ರಸಕ್ತ ಸಾಲಿನಲ್ಲಿ ವಿವಿಧ ಬೆಳೆಗಳ ಬಿತ್ತನೆ ಬೀಜಗಳ ದರಗಳು ಗಣನೀಯವಾಗಿ ಕಡಿಮೆ ಇರುವುದು ಕಂಡುಬರುತ್ತದೆ. ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯು ಉತ್ತಮವಾಗಿ ಆಗುತ್ತಿದ್ದು ಕೃಷಿ ಚಟುವಟಿಕೆಗಳು ಗರಿಗೆದರಿವೆ. ಇದೇ ವೇಳೆ, ಬಿತ್ತನೆ ಬೀಜಗಳ ದರಗಳು ಏರಿಕೆಯಾಗಿರುವ ಬಗ್ಗೆ ವಿವಿಧ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದು ಈ ಕುರಿತು ಕೃಷಿ ಇಲಾಖೆಯು ಸ್ಪಷ್ಟೀಕರಣ ನೀಡಿದ್ದು ವಾಸ್ತವ ಸ್ಥಿತಿಯನ್ನು ವಿವರಿಸಿದೆ' ಎಂದು ಹೇಳಿದ್ದಾರೆ.












Click it and Unblock the Notifications