ಜನವರಿ 3ರಂದು ಕರ್ನಾಟಕಕ್ಕೆ ನರೇಂದ್ರ ಮೋದಿ ಭೇಟಿ
ಬೆಂಗಳೂರು, ಡಿಸೆಂಬರ್ 19 : ಜನವರಿ ಮೊದಲ ವಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಬೆಂಗಳೂರು ಅಥವ ತುಮಕೂರಿನಲ್ಲಿ ನರೇಂದ್ರ ಮೋದಿ ರೈತ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.
ಜನವರಿ 3ರಂದು ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪಗೆ ಅಮಿತ್ ಶಾ ಕರೆ ಮಾಡಿ ರೈತರ ಸಮಾವೇಶ ಆಯೋಜನೆ ಮಾಡುವಂತೆ ಸೂಚನೆ ನೀಡಿದ್ದಾರೆ.
ಯಡಿಯೂರಪ್ಪ ಬುಧವಾರ ಧಾರವಾಡದಲ್ಲಿದ್ದರು. ಅಲ್ಲಿನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾಗಲೇ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಕರೆ ಮಾಡಿದ್ದರು. ಜನವರಿ 3ರಂದು ಮೋದಿ ರಾಜ್ಯಕ್ಕೆ ಭೇಟಿ ನೀಡಲಿರುವ ವಿಚಾರವನ್ನು ಖಚಿತಪಡಿಸಿದರು.

ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಪ್ರಧಾನಿ ಮೋದಿ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಅದರಲ್ಲೂ 15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ 12 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಸರ್ಕಾರ ಸ್ಪಷ್ಟ ಬಹುಮತ ಪಡೆದಿದೆ.
ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾದಾಗ ಕೇಂದ್ರ ಸರ್ಕಾರ ತಕ್ಷಣ ಸ್ಪಂದಿಸಲಿಲ್ಲ ಎಂದು ಆಕ್ರೋಶ ವ್ಯಕ್ತವಾಗಿತ್ತು. ಪ್ರವಾಹ ಪರಿಸ್ಥಿತಿ ವೀಕ್ಷಣೆಗೆ ಪ್ರಧಾನಿ ಆಗಮಿಸಬೇಕು ಎಂದು ಪ್ರತಿಪಕ್ಷಗಳು ಪಟ್ಟು ಹಿಡಿದಿದ್ದವು.
ಹೊಸ ವರ್ಷದಲ್ಲಿ ಪ್ರಧಾನಿ ರಾಜ್ಯಕ್ಕೆ ಆಗಮಿಸುತ್ತಿದ್ದು, ರೈತ ಸಮಾವೇಶ ಉದ್ದೇಶಿಸಿ ಮಾತನಾಡಿದ್ದರು. ಹಿಂದೆಯೂ ಬಿಜೆಪಿ ದಾವಣಗೆರೆಯಲ್ಲಿ ರೈತ ಸಮಾವೇಶ ಆಯೋಜನೆ ಮಾಡಿತ್ತು. ಆಗ ನರೇಂದ್ರ ಮೋದಿ ಆಗಮಿಸಿ ಅದರಲ್ಲಿ ಪಾಲ್ಗೊಂಡಿದ್ದರು.
ಕೇಂದ್ರ ಸರ್ಕಾರ ರೈತರ ಅನುಕೂಲಕ್ಕಾಗಿ ಜಾರಿಗೊಳಿಸಿರುವ ಯೋಜನೆಗಳ ಬಗ್ಗೆ ಪ್ರಧಾನಿ ರೈತರಿಗೆ ಮಾಹಿತಿ ನೀಡಲಿದ್ದಾರೆ. ಕರ್ನಾಟಕ ಸರ್ಕಾರ ಪ್ರಧಾನಮಂತ್ರಿ ಕಿಸಾನ್ ಸಮ್ಮನ್ ಯೋಜನೆಯಡಿ 4 ಸಾವಿರ ರೂ.ಗಳನ್ನು ರೈತರಿಗೆ ನೀಡುತ್ತಿದೆ.












Click it and Unblock the Notifications