ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆ ಉದ್ಭವಿಸಿರುವ ಭೀಕರ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಕೃಷಿ ವಲಯ ಹಾಗೂ ಕುಡಿಯುವ ನೀರಿನ ಭದ್ರತೆಯ ಮೇಲಾಗಿರುವ ಗಂಭೀರ ಪರಿಣಾಮಗಳನ್ನು ನಿಯಂತ್ರಿಸಲು ತಕ್ಷಣವೇ ಕೇಂದ್ರದ ಅಧ್ಯಯನ ತಂಡವನ್ನು ಕರ್ನಾಟಕಕ್ಕೆ ಕಳುಹಿಸಿಕೊಡಬೇಕು ಮತ್ತು ತುರ್ತು ಆರ್ಥಿಕ ನೆರವು ಬಿಡುಗಡೆ ಮಾಡಬೇಕು ಎಂದು ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿನಂತಿಸಿದ್ದಾರೆ.
ವಾಡಿಕೆಗಿಂತ ಕಡಿಮೆ ಮಳೆ
ಮುಖ್ಯಮಂತ್ರಿಗಳು ಬರೆದಿರುವ ಪತ್ರದಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಈ ಬಾರಿ ಮುಂಗಾರು ಮಳೆ ವಾಡಿಕೆಗಿಂತ ಅತ್ಯಂತ ಕಡಿಮೆ ಪ್ರಮಾಣದಲ್ಲಿ ದಾಖಲಾಗಿದೆ. ಮಳೆಯ ಅಭಾವದಿಂದಾಗಿ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಕುಸಿದಿದ್ದು, ಆತಂಕ ಸೃಷ್ಟಿಸಿದೆ. ಮಳೆಯ ನಂಬಿ ಕೂತಿದ್ದ ರೈತರಿಗೆ ಸಕಾಲದಲ್ಲಿ ಮಳೆಯಾಗದ ಕಾರಣ ಮುಂಗಾರು ಹಂಗಾಮಿನ ಬಿತ್ತನೆ ಕಾರ್ಯ ಸಂಪೂರ್ಣ ವಿಳಂಬವಾಗಿದೆ ಎಂದು ಉಲ್ಲೇಖಿಸಿದ್ದಾರೆ.
ಕೃಷಿ ಚಟುವಟಿಕೆಗಳಿಗೆ ಮಾತ್ರವಲ್ಲದೆ, ಮುಂಬರುವ ದಿನಗಳಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಪೂರೈಕೆಗೂ ಭಾರಿ ಸಂಕಷ್ಟ ಎದುರಾಗುವ ಮುನ್ಸೂಚನೆ ಸಿಕ್ಕಿದೆ. ಹೀಗಾಗಿ ರಾಜ್ಯದಲ್ಲಿ ಎದುರಾಗಿರುವ ಈ ಪರಿಸ್ಥಿತಿಯನ್ನ ಖುದ್ದಾಗಿ ವೀಕ್ಷಿಸಲು ಹಾಗೂ ಹಾನಿಯ ಪ್ರಮಾಣವನ್ನು ಅಳೆಯಲು ಕೇಂದ್ರದ ಉನ್ನತ ಮಟ್ಟದ ಅಧ್ಯಯನ ತಂಡವನ್ನು ತಕ್ಷಣವೇ ಕರ್ನಾಟಕಕ್ಕೆ ನಿಯೋಜಿಸಬೇಕು ಎಂದು ಸಿಎಂ ಮನವಿ ಮಾಡಿದ್ದಾರೆ. ಕೇಂದ್ರ ತಂಡದ ವರದಿ ಆಧಾರದ ಮೇಲೆ ರಾಜ್ಯಕ್ಕೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ತುರ್ತು ಬರ ಪರಿಹಾರ ಧನವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಕೇಂದ್ರ ಸರ್ಕಾರದ ಸಹಾಯವನ್ನು ಕೋರುವುದರ ಜೊತೆಗೆ, ರಾಜ್ಯ ಸರ್ಕಾರವು ತನ್ನದೇ ಆದ ಸಂಪನ್ಮೂಲಗಳನ್ನು ಬಳಸಿಕೊಂಡು ಪರಿಸ್ಥಿತಿಯನ್ನು ಹತೋಟಿಗೆ ತರಲು ಸಜ್ಜಾಗಿದೆ. ಬರಗಾಲದ ಬಿಸಿಯಿಂದ ಅನ್ನದಾತರನ್ನು ರಕ್ಷಿಸಲು, ಲಭ್ಯವಿರುವ ಜಲಮೂಲಗಳನ್ನು ಸಂರಕ್ಷಿಸಲು ಹಾಗೂ ಸಾರ್ವಜನಿಕರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಲು ಈಗಾಗಲೇ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭರವಸೆ ನೀಡಿದ್ದಾರೆ.