ಡಿಬೇಟ್ : ವರುಣಾದಿಂದ ಬಿಜೆಪಿ ಅಭ್ಯರ್ಥಿ ಯಾರಾಗಬೇಕು?
ಬೆಂಗಳೂರು, ಏಪ್ರಿಲ್ 24 : 2018ರ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲು ಇಂದು ಮಧ್ಯಾಹ್ನ 3 ಗಂಟೆ ತನಕ ಅವಕಾಶವಿದೆ. ಆದರೆ, ಮೈಸೂರಿನ ವರುಣಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಯಾರು? ಎಂಬುದು ಇನ್ನೂ ಅಂತಿಮಗೊಂಡಿಲ್ಲ.
ಬಿ.ವೈ.ವಿಜಯೇಂದ್ರ ಅವರು ವರುಣಾದಿಂದ ಸ್ಪರ್ಧಿಸುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಂಜನಗೂಡಿನಲ್ಲಿ ಸೋಮವಾರ ಘೋಷಣೆ ಮಾಡಿದ್ದರು. ನಂತರ ಹೈಡ್ರಾಮ ನಡೆಯುತ್ತಿದ್ದು, ಇನ್ನೂ ಅಂತಿಮ ನಿರ್ಧಾರ ಪ್ರಕಟಗೊಂಡಿಲ್ಲ.

ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಎರಡು ತಿಂಗಳಿನಿಂದ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದರು. ಸೋಮವಾರ ಅವರು ನಾಮಪತ್ರ ಸಲ್ಲಿಸಬೇಕಾಗಿತ್ತು. ಆದರೆ, ಕೊನೆ ಕ್ಷಣದಲ್ಲಿ ಅವರು ಸ್ಪರ್ಧೆ ಮಾಡುವುದಿಲ್ಲ ಎಂದು ಯಡಿಯೂರಪ್ಪ ಘೋಷಣೆ ಮಾಡಿದರು.
ಮೈಸೂರಿನಲ್ಲಿಯೇ ಬಿ.ಎಸ್.ಯಡಿಯೂರಪ್ಪ ವಾಸ್ತವ್ಯ ಹೂಡಿದ್ದು, ವರುಣಾ ಕ್ಷೇತ್ರದ ಟಿಕೆಟ್ ವಿಚಾರ ಹೈಕಮಾಂಡ್ ಮಟ್ಟಕ್ಕೆ ತಲುಪಿದೆ. ಕರ್ನಾಟಕ ಬಿಜೆಪಿ ಉಸ್ತುವಾರಿ ಮುರಳೀಧರರಾವ್, ಕರ್ನಾಟಕ ಬಿಜೆಪಿ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವಡೇಕರ್ ಅವರು ಮೈಸೂರಿಗೆ ಆಗಮಿಸಿ ಯಡಿಯೂರಪ್ಪ ಜೊತೆ ಸಭೆ ನಡೆಸುತ್ತಿದ್ದಾರೆ.
ಮೈಸೂರು, ಚಾಮರಾಜನಗರ ಜಿಲ್ಲೆಗಳ ಬಿಜೆಪಿ ಅಭ್ಯರ್ಥಿಗಳು, ನೂರಾರು ಕಾರ್ಯಕರ್ತರು ಬಿ.ವೈ.ವಿಜಯೇಂದ್ರ ಅವರಿಗೆ ಟಿಕೆಟ್ ನೀಡಬೇಕು ಎಂದು ಪಟ್ಟು ಹಿಡಿದು ಕುಳಿತಿದ್ದಾರೆ. ಅಭ್ಯರ್ಥಿ ಯಾರಾಗಬೇಕು? ಎಂಬ ಹಗ್ಗಜಗ್ಗಾಟ ಇನ್ನೂ ಮುಂದುವರೆದಿದೆ.
ವರುಣಾ ಕ್ಷೇತ್ರದ ಅಭ್ಯರ್ಥಿಯಾರಾಬೇಕು? ಏಕೆ? ಎಂದು ನೀವು ನಿಮ್ಮ ಅಭಿಪ್ರಾಯವನ್ನು ತಿಳಿಸಿ, ಈ ವಿಚಾರದ ಬಗ್ಗೆ ನೀವು ನಿಮ್ಮ ಅಭಿಪ್ರಾಯವನ್ನು ಕಮೆಂಟ್ ಬಾಕ್ಸ್‌ನಲ್ಲಿ ಹಾಕಿ...












Click it and Unblock the Notifications