ಇಂಧನ ಸಚಿವ ಡಿ.ಕೆ.ಶಿವಕುಮಾರ್ ಪರಿಚಯ
'ನಾನು ಹಳ್ಳಿಯಿಂದ ಬಂದವನು. ಕಿವಿ ಮೇಲೆ ಹೂ ಇಟ್ಟುಕೊಂಡು ಬಂದಿಲ್ಲ. ರಾಜಕಾರಣ ಮಾಡಲು ಬೆಂಗಳೂರಿಗೆ ಬಂದಿದ್ದೇನೆ' ಐಟಿ ದಾಳಿ ನಡೆದಾಗ ದೊಡ್ಡಾಲಹಳ್ಳಿ ಕೆಂಪೇಗೌಡ ಶಿವಕುಮಾರ್ ನೀಡಿದ ಮೊದಲ ಪ್ರತಿಕ್ರಿಯೆ ಇದು.
ಅವರು ಒಕ್ಕಲಿಗ ಸಮುದಾಯದ ಪ್ರಭಾವಿ ಮುಖಂಡ ಮತ್ತು ಇಂಧನ ಸಚಿವ ಡಿ.ಕೆ.ಶಿವಕುಮಾರ್. ಅವರು ಮಾತನಾಡುವುದು ಹಾಗೆಯೇ ರಾಜಕೀಯ ಭಾಷೆಯಲ್ಲಿ 'ಟಫ್' ರಾಜಕಾರಣಿ ಎಂದು ಹೇಳಬಹುದು.
2013ರ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆಯಿತು. ಆಗ ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಆಕಾಂಕ್ಷಿ ಎಂದು ಹೇಳಿದ್ದರು. ಸರ್ಕಾರ ಬಂದು ಒಂದು ವರ್ಷದ ಬಳಿಕ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ಸೇರಿದರು. ಇಂಧನ ಇಲಾಖೆಯ ಜವಾಬ್ದಾರಿ ಸಿಕ್ಕಿತು.
ಕೇವಲ 21 ವರ್ಷವಾಗಿದ್ದಾಗಲೇ ರಾಜಕೀಯ ಪ್ರವೇಶ ಮಾಡಿದ ಡಿ.ಕೆ.ಶಿವಕುಮಾರ್ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಸದ್ಯ, ಕರ್ನಾಟಕದ ಪ್ರಭಾವಿ ರಾಜಕಾರಣಿಗಳ ಪೈಕಿ ಇವರೂ ಒಬ್ಬರು.
ಕನಕಪುರದ ಉಯ್ಯಂಬಳ್ಳಿ ಹೋಬಳಿಯ ದೊಡ್ಡ ಆಲಹಳ್ಳಿ ಗ್ರಾಮ ಡಿ.ಕೆ.ಶಿವಕುಮಾರ್ ಅವರ ಹುಟ್ಟೂರು. 1961, ಮೇ 15ರಂದು ಜನನ. ತಂದೆ ಕೆಂಪೇಗೌಡ, ತಾಯಿ ಗೌರಮ್ಮ. ಸಹೋದರ ಡಿ.ಕೆ.ಸುರೇಶ್ ಸಂಸದರು.
ಕನಕಪುರದ ಎಸ್ ಕರಿಯಪ್ಪನವರ ವಿದ್ಯಾಸಂಸ್ಥೆಯಲ್ಲಿ ಶಾಲಾ ಶಿಕ್ಷಣ ಪೂರೈಸಿದರು. ಬೆಂಗಳೂರಿನ ಸರ್ಕಾರಿ ಕಲಾ ಕಾಲೇಜಿನಲ್ಲಿ ಬಿ.ಎ ಪದವಿ ಪಡೆದರು. ರಾಜ್ಯ ಮುಕ್ತ ವಿಶ್ವವಿದ್ಯಾಲಯದಿಂದ ರಾಜ್ಯಶಾಸ್ತ್ರದಲ್ಲಿ ಎಂ.ಎ.ಪದವಿ ಪಡೆದಿದ್ದಾರೆ.
ಮೊದಲ ಬಾರಿಗೆ ತಾಲೂಕು ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘದ ನಿರ್ದೇಶಕರಾಗುವ ಮೂಲಕ ರಾಜಕೀಯಕ್ಕೆ ಪ್ರವೇಶ ಮಾಡಿದರು. ನಂತರ ಜಿಲ್ಲಾ ಪಂಚಾಯಿತಿ ಸದಸ್ಯ, ಶಾಸಕ, ಸಚಿವರಾಗಿ ಬೆಳೆದಿದ್ದು ಡಿ.ಕೆ.ಶಿವಕುಮಾರ್ ಅವರ ರಾಜಕೀಯ ಸಾಧನೆ.
ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧೆ : 1985ರಲ್ಲಿ ಮೊದಲ ಬಾರಿಗೆ ಡಿ.ಕೆ.ಶಿವಕುಮಾರ್ ಚುನಾವಣೆ ಎದುರಿಸಿದರು. ಜನತಾ ಪಕ್ಷದ ಎಚ್.ಡಿ.ದೇವೇಗೌಡ ವಿರುದ್ಧ ಸಾತನೂರು ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಕಂಡರು.
1987ರಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಸದಸ್ಯರಾದರು. 1989ರಲ್ಲಿ ಸಾತನೂರು ಕ್ಷೇತ್ರದಿಂದ ಪುನಃ ಚುನಾವಣೆಗೆ ಸ್ಪರ್ಧಿಸಿದರು. 10 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದು, ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದರು.
1994ರಲ್ಲಿ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿತು. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದರು. ಸುಮಾರು 400 ಮತಗಳ ಅಂತರದಿಂದ ಗೆಲುವು ಪಡೆದು ಪುನರಾಯ್ಕೆಯಾದರು. 1999ರಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಸ್ಪರ್ಧಿಸಿ 13 ಸಾವಿರ ಮತಗಳ ಅಂತರದಿಂದ ಜಯಗಳಿಸಿದರು.
2004ರಲ್ಲಿಯೂ ಸಾತನೂರು ಕ್ಷೇತ್ರದಲ್ಲಿ ಗೆಲುವು ದಾಖಲಿಸಿದರು. ಕ್ಷೇತ್ರ ಪುನರ್ ವಿಂಗಡನೆ ಬಳಿಕ ಸಾತನೂರು ಕನಕಪುರ ಕ್ಷೇತ್ರದಲ್ಲಿ ವಿಲೀನಗೊಂಡಿತು. 2008ರಲ್ಲಿ ಕನಕಪುರದಿಂದ 7,600, 2013ರ ಚುನಾವಣೆಯಲ್ಲಿ ಜೆಡಿಎಸ್ ನಾಯಕ ಪಿ.ಜಿ.ಆರ್.ಸಿಂಧ್ಯಾ ವಿರುದ್ಧ 31,487 ಮತಗಳ ಅಂತರದಿಂದ ಗೆದ್ದಿದ್ದಾರೆ.
ಎಸ್.ಬಂಗಾರಪ್ಪ, ಎಸ್.ಎಂ.ಕೃಷ್ಣ ಅವರ ಸರ್ಕಾರದಲ್ಲಿ ಡಿ.ಕೆ.ಶಿವಕುಮಾರ್ ಸಚಿವರಾಗಿ ಕೆಲಸ ನಿರ್ವಹಿಸಿದ್ದಾರೆ. ಪ್ರಸ್ತುತ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಇಂಧನ ಸಚಿವರು.
ಬಂಧಿಖಾನೆ, ಸಹಕಾರ, ನಗರಾಭಿವೃದ್ಧಿ ಸಚಿವರಾಗಿ ಕೆಲಸ ಮಾಡಿದ್ದಾರೆ. ಸಚಿವ ಸ್ಥಾನ ಹೊರತು ಪಡಿಸಿ 2001ರಲ್ಲಿ ಎಐಸಿಸಿಯ ಸದಸ್ಯರಾಗಿದ್ದರು. 1985 ರಿಂದ 2001ರ ತನಕ ಕೆಪಿಸಿಸಿ ಕಾರ್ಯದರ್ಶಿಯಾಗಿದ್ದರು.
2013ರ ಚುನಾವಣೆಯಲ್ಲಿ ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿಯ ಸಹ ಅಧ್ಯಕ್ಷರಾಗಿದ್ದರು. 2018ರ ವಿಧಾನಸಭೆ ಚುನಾವಣೆಗೆ ಪ್ರಚಾರ ಸಮಿತಿಯ ಅಧ್ಯಕ್ಷರಾಗಿದ್ದಾರೆ.
ತಮ್ಮ ಸಹೋದರ ಡಿ.ಕೆ.ಸುರೇಶ್ ಅವರನ್ನು ರಾಜಕೀಯಕ್ಕೆ ಕರೆತಂದಿದ್ದಾರೆ. 2014ರ ಲೋಕಸಭೆ ಚುನಾವಣೆಯಲ್ಲಿ ಅವರು ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿದ್ದಾರೆ. ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆಯಲ್ಲಿ ಡಿಕೆಶಿ ಬ್ರದರ್ಸ್ ಎಂದೇ ಪ್ರಸಿದ್ಧಿ ಪಡೆದಿದ್ದಾರೆ.
2017ರಲ್ಲಿ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ನಡೆದ ಆದಾಯ ತೆರಿಗೆ ದಾಳಿ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿತ್ತು. ಸತತ ಮೂರು ದಿನಗಳ ಕಾಲ ಅಧಿಕಾರಿಗಳು ಡಿ.ಕೆ.ಶಿವಕುಮಾರ್ ಅವರ ಬೆಂಗಳೂರು, ಕನಕಪುರ ನಿವಾಸ, ಸಂಬಂಧಿಕರ ಮನೆ, ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದರು.
ಒಕ್ಕಲಿಗ ಸಮುದಾಯದ ಪ್ರಭಾವಿ ಮುಖಂಡರಾದ ಡಿ.ಕೆ.ಶಿವಕುಮಾರ್ ಮತ್ತು ಎಚ್.ಡಿ.ದೇವೇಗೌಡ ಅವರ ಕುಟುಂಬದ ನಡುವೆ ರಾಜಕೀಯ ವೈರತ್ವವಿದೆ. ಇತ್ತೀಚೆಗೆ ನಡೆದ ಸಮಾರಂಭವೊಂದರಲ್ಲಿ ದೇವೇಗೌಡರ ಕಾಲಿಗೆ ಬಿದ್ದು ಆಶೀರ್ವಾದ ಪಡೆದು ಡಿ.ಕೆ.ಶಿವಕುಮಾರ್ ದೊಡ್ಡ ಸುದ್ದಿ ಮಾಡಿದ್ದರು.