ಕ್ಷೇತ್ರ ಪರಿಚಯ : ಶಿಕಾರಿಪುರದಲ್ಲಿ ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿ ಯಾರು?
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ತವರು ಕ್ಷೇತ್ರ ಶಿಕಾರಿಪುರ. ಅಭಿವೃದ್ಧಿಯ ಪಥದಲ್ಲಿ ಶಿಕಾರಿಪುರ ಬಹಳ ಮುಂದೆ ಸಾಗಿದೆ. ಇನ್ನೂ ಹಲವು ಯೋಜನೆಗಳನ್ನು ಜಾರಿಗೆ ತರುವ ಪ್ರಯತ್ನವೂ ನಡೆದಿದೆ.
2018ರ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ರಾಜಕೀಯ ಭವಿಷ್ಯ ನಿರ್ಧರಿಸುವ ಕ್ಷೇತ್ರವಿದು. ಬಿಜೆಪಿ ರಾಜ್ಯಾಧ್ಯಕ್ಷ, ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್.ಯಡಿಯೂರಪ್ಪ ಶಿಕಾರಿಪುರ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ.
ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಯಡಿಯೂರಪ್ಪ ಮುಂದೆ ಯಾವ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂಬ ಲೆಕ್ಕಾಚಾರದಲ್ಲಿ ತೊಡಗಿವೆ. ಬಿಜೆಪಿಯವರು ಯಡಿಯೂರಪ್ಪ ಎಷ್ಟು ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ? ಎಂಬ ಚರ್ಚೆಯಲ್ಲಿ ತೊಡಗಿದ್ದಾರೆ.

ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ಕ್ಷೇತ್ರದ ಶಾಸಕರು. ಯಡಿಯೂರಪ್ಪ ಅವರು ಶಿಕಾರಿಪುರದಿಂದ ಸ್ಪರ್ಧಿಸಿದರೆ ಬಿ.ವೈ.ರಾಘವೇಂದ್ರ ಅವರು ಎಲ್ಲಿಂದ ಸ್ಪರ್ಧಿಸಲಿದ್ದಾರೆ? ಎಂಬುದು ಸದ್ಯದ ಪ್ರಶ್ನೆ.
ಬಿ.ಎಸ್.ಯಡಿಯೂರಪ್ಪ ಅವರು ಕಳೆದ ಚುನಾವಣೆಯಲ್ಲಿ ಕೆಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ 69,126 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು. ನಂತರ ಲೋಕಸಭೆ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಿ ಜಯಗಳಿಸಿ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಸದ್ಯ, ಅವರ ಪುತ್ರ ಬಿ.ವೈ.ರಾಘವೇಂದ್ರ ಕ್ಷೇತ್ರದ ಶಾಸಕರು.
ಒಂದು ತಾಲೂಕಿಗೆ ಅಗತ್ಯವಿರುವ ಎಲ್ಲಾ ಸೌಕರ್ಯಗಳನ್ನು ಯಡಿಯೂರಪ್ಪ ಶಿಕಾರಿಪುರಕ್ಕೆ ಮಾಡಿಕೊಟ್ಟಿದ್ದಾರೆ. ಈ ಬಾರಿ ಅವರೇ ಮುಖ್ಯಮಂತ್ರಿ ಅಭ್ಯರ್ಥಿ ಆದ್ದರಿಂದ ಎಷ್ಟು ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸಬಹುದು? ಎಂಬುದನ್ನು ಲೆಕ್ಕ ಹಾಕಬೇಕಿದೆ.
2013ರ ಚುನಾವಣೆಯಲ್ಲಿ ಬಿ.ಎಸ್.ಯಡಿಯೂರಪ್ಪ 69,126 ಮತ, ಕಾಂಗ್ರೆಸ್‌ನ ಎಚ್.ಎಸ್.ಶಾಂತವೀರಪ್ಪ ಗೌಡ 44,701 ಮತ ಮತ್ತು ಜೆಡಿಎಸ್‌ನ ಎಚ್.ಬಳಿಗಾರ್ 15,007 ಮತಗಳನ್ನು ಪಡೆದಿದ್ದರು.
2014ರಲ್ಲಿ ನಡೆದ ಉಪ ಚುನಾವಣೆಯಲ್ಲಿ ಬಿ.ವೈ.ರಾಘವೇಂದ್ರ ಅವರು 71,547, ಕಾಂಗ್ರೆಸ್‌ನ ಶಾಂತವೀರಪ್ಪ ಗೌಡ 65,117 ಮತಗಳನ್ನು ಪಡೆದಿದ್ದಾರೆ. ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಕಾಂಗ್ರೆಸ್‌ಗೆ ಬೆಂಬಲ ನೀಡಿತ್ತು.












Click it and Unblock the Notifications