Shiva Rajkumar: ಹೆಣ್ಮಕ್ಕಳಿಗೆ ಅಶ್ಲೀಲ ಮೆಸೇಜ್ ವಿರುದ್ಧ ಶಿವಣ್ಣ ಆಕ್ರೋಶ; ರಮ್ಯಾ ಪರ ನಿಂತು ಹ್ಯಾಟ್ರಿಕ್ ಹೀರೋ ಏನಂದ್ರು ?
ಬೆಂಗಳೂರು, ಜುಲೈ 29: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಅವರ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡಿರುವ ಕೋರ್ಟ್, ವಾದ ಪ್ರತಿವಾದವನ್ನು ಪೂರ್ಣಗೊಳಿಸಿದ್ದು, ತೀರ್ಪನ್ನು ಕಾಯ್ದಿರಿಸಿದೆ. ವಿಚಾರಣೆ ನ್ಯಾಯಾಲಯವು ಪ್ರಕರಣಕ್ಕೆ ಸಂಬಂಧಿಸಿ ಕೆಲವು ವಿಚಾರಗಳನ್ನು ಪ್ರಸ್ತಾಪ ಮಾಡಿತ್ತು. ಸುಪ್ರೀಂ ಕೋರ್ಟ್ನ ಅಭಿಪ್ರಾಯ ಪ್ರಸ್ತಾಪಿಸಿ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ಒಂದು ಪೋಸ್ಟ್ ಶೇರ್ ಮಾಡಿದ್ದರು.
ಭಾರತದ ಸಾಮಾನ್ಯ ಪ್ರಜೆಗೂ ಸುಪ್ರೀಂ ಕೋರ್ಟ್ ಆಶಾಕಿರಣ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬಹುದು ಎಂದು ನಾನು ನಂಬಿದ್ದೇನೆ ಅಂತ ನಟಿ ಹಾಗೂ ಮಾಜಿ ಸಂಸದೆಯಾದ ರಮ್ಯಾ ಅವರು ಬರೆದುಕೊಂಡಿದ್ದರು. ಆ ಬೆನ್ನಲ್ಲೇ ನಟ ದರ್ಶನ್ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ನಟಿ ರಮ್ಯಾ ಅವರಿಗೆ ಕೆಟ್ಟದಾಗಿ ಕಾಮೆಂಟ್ಸ್ ಮಾಡಿದ್ದರು. ಅಶ್ಲೀಲ ಮೆಸೇಜ್ ನಿಂದ ಕೆರಳಿರುವ ರಮ್ಯಾ, ಸೋಶಿಯಲ್ ಮೀಡಿಯಾದಲ್ಲಿ ದರ್ಶನ್ ಅಭಿಮಾನಿಗಳಿಗೆ ಎಚ್ಚರಿಕೆ ನೀಡಿದ್ದರು. ಅಷ್ಟಕ್ಕೂ ಸುಮ್ಮನಾಗದ ಅವರು, ನಿನ್ನೆ (ಸೋಮವಾರ)ಬೆಂಗಳೂರು ಸೈಬರ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದಾರೆ. ಈ ಸಂಬಂಧ ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ನಡೆಸ್ತಿದ್ದಾರೆ.

ಇತ್ತ ನಟಿ ರಮ್ಯಾ ಬೆಂಬಲಕ್ಕೆ ಹಲವು ನಟರು ಸಾಥ್ ಕೊಟ್ಟಿದ್ದು, ಇದೀಗ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ನಟಿ ರಮ್ಯಾ ಅವರ ಬೆಂಬಲಕ್ಕೆ ನಿಂತಿದ್ದಾರೆ. ರಮ್ಯಾ ಪರ ಶಿವಣ್ಣ ಮತ್ತು ಗೀತಾ ದಂಪತಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದು, ಅದನ್ನು ರಮ್ಯಾ ಅವರು ಶೇರ್ ಮಾಡಿದ್ದಾರೆ. ನಿನ್ನೆಯಷ್ಟೇ ಡಾ.ರಾಜ್ ಕುಟುಂಬದ ನಟ ವಿನಯ್ ರಾಜ್ಕುಮಾರ್ ರಮ್ಯಾಗೆ ಬೆಂಬಲ ವ್ಯಕ್ತಪಡಿಸಿದ್ದರು. ಇದೀಗ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ದಂಪತಿ ಕೂಡ ರಮ್ಯಾ ಪರ ಬ್ಯಾಟ್ ಬೀಸಿದ್ದಾರೆ.
ರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ. ಯಾವ ಮಹಿಳೆಯ ವಿರುದ್ಧವೂ ಆ ರೀತಿ ಮಾತನಾಡುವುದು ಸರಿಯಲ್ಲ; ಅದನ್ನು ನಾವು ಸಹಿಸಬಾರದು. ಮಹಿಳೆಯರನ್ನು ತಾಯಿಯಾಗಿ, ಅಕ್ಕನಾಗಿ, ಮಗಳಾಗಿ, ಮಡದಿಯಾಗಿ ಮತ್ತು ಮೊಟ್ಟ ಮೊದಲು ಒಬ್ಬ ವ್ಯಕ್ತಿಯಾಗಿ ಗೌರವಿಸುವುದು ತುಂಬಾ ಮುಖ್ಯ. ಸೋಶಿಯಲ್ ಮೀಡಿಯಾ ತುಂಬಾ ಬಲಿಷ್ಠವಾದ ಅಸ್ತ್ರ, ಅದನ್ನು ತಮ್ಮ ಏಳಿಗೆಗಾಗಿ ಬಳಸಬೇಕೇ ಹೊರತು, ಅವಾಚ್ಯ ಶಬ್ದಗಳಿಂದ ನಿಂದಿಸಿ, ದ್ವೇಷ- ಅಸೂಯೆಯನ್ನು ಬಿತ್ತಲು ಬಳಸಬಾರದು. ನಿಮ್ಮ ನಿಲುವು ಸರಿಯಿದೆ, ರಮ್ಯಾ. ನಿಮ್ಮ ಜೊತೆಗೆ ನಾವು ಸದಾ ನಿಲ್ಲುತ್ತೇವೆ ಎಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಫೋಸ್ಟ್ ಮಾಡುವ ಮೂಲಕ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರ ಬೆಂಬಲಕ್ಕೆ ನಿಂತಿದ್ದಾರೆ. ಶಿವಣ್ಣ ಅವರ ಪೋಸ್ಟ್ ಶೇರ್ ಮಾಡಿಕೊಂಡಿರುವ ನಟಿ ರಮ್ಯಾ ಥ್ಯಾಂಕ್ಯೂ ಶಿವಣ್ಣ ಎಂದು ಧನ್ಯವಾದವನ್ನ ತಿಳಿಸಿದ್ದಾರೆ.












Click it and Unblock the Notifications