ಮೇರುನಟನಿಗೆ ಅರ್ಧ ಎಕರೆ ಜಾಗ ಇಲ್ವಾ? ವಿಷ್ಣುವರ್ಧನ್ ಸಮಾಧಿ ಕೆಡವಿದ್ದಕ್ಕೆ ಕೆರಳಿದ ಕಿಚ್ಚ... Kiccha Sudeep
ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿದ್ದ ನಟ ಸಾಹಸಿಂಹ ವಿಷ್ಣುವರ್ಧನ್ ಅವರ ಮೂಲ ಸಮಾಧಿಯನ್ನ ನೆಲಸಮ ಮಾಡಿರುವ ಬಗ್ಗೆ ವಿಷ್ಣುದಾದಾ ಫ್ಯಾನ್ಸ್ ಆಕ್ರೋಶ ಹೊರಹಾಕುತ್ತಿದ್ದಾರೆ. ನಮ್ಮ ದೇವರನ್ನ ನಿಜವಾಗಿ ಸಾಯಿಸಿಬಿಟ್ರಲ್ಲ ಎಂದು ಹಿಡಿಶಾಪ ಹಾಕಿ ಕಣ್ಣೀರಿಟ್ಟಿದ್ದಾರೆ. ಹೈಕೋರ್ಟ್ ಆದೇಶದ ಮೇರೆಗೆ ಈ ಸಮಾಧಿ ತೆರವು ಮಾಡಲಾಗಿದೆ ಎನ್ನಲಾಗಿದ್ದು, ಇದರ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ಮಾಡುವುದು ವಿಷ್ಣು ಅಭಿಮಾನಿಗಳು ಸಜ್ಜಾಗಿದ್ದಾರೆ. ಈ ವಿಚಾರವಾಗಿ ವಿಷ್ಣುದಾದಾ ಅಭಿಮಾನಿಯೂ ಆಗಿರುವ ನಟ ಕಿಚ್ಚ ಸುದೀಪ್ ಪ್ರತಿಕ್ರಿಯಿಸಿದ್ದಾರೆ. ಸಮಾಧಿ ಕೆಡವಿದ್ದಕ್ಕೆ ಕೆರಳಿ ಕೆಂಡವಾಗಿದ್ದಾರೆ. ಆ ಸಮಾಧಿ ಜಾಗ ಉಳಿಸಿಕೊಳ್ಳಬೇಕು ಎಂದು ಧ್ವನಿ ಎತ್ತಿದ್ದಾರೆ.
ಸಮಾಧಿ ಕೆಡವಿರುವ ಬಗ್ಗೆ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಸುದೀರ್ಘವಾಗಿ ಬರೆದುಕೊಂಡಿರುವ ಸುದೀಪ್, 'ಸಾಹಸ ಸಿಂಹ ವಿಷ್ಣುವರ್ಧನ್ ಅಂದ್ರೆ, ಅದು ಎಂದೂ ಮುಗಿಯದ ಒಂದು ಅಭಿಮಾನ, ಗೌರವ. ಮೊನ್ನೆ ರಾತ್ರಿ ಅವರ ಸ್ಮಾರಕವನ್ನ ಒಡೆದು ಹಾಕಿರುವುದು, ನಾವು ವರ್ಷಾನುಗಟ್ಟಲೆ ಇಂದ ನಂಬಿ, ಮೊರೆ ಹೋದಂತಹ ಒಂದು ದೇವರ ದೇವಸ್ಥಾನವನ್ನು ಒಡೆದು ಹಾಕಿದಾಗ ಎಷ್ಟು ನೋವು ಆಗುತ್ತದೋ, ಅಷ್ಟೇ ನೋವು ಮತ್ತು ಸಂಕಟ ನನಗಾಗಿದೆ' ಎಂದು ಭಾವುಕರಾಗಿದ್ದಾರೆ.

'ಇದು ಹೈ ಕೋರ್ಟ್ ಆದೇಶ, ನ್ಯಾಯಾಲಯದ ಆದೇಶ ಅಂತಾರೆ. ಆದರೆ ಸರ್ಕಾರಗಳ ಮುಖಾಂತರ, ಸರ್ಕಾರದಲ್ಲಿ ಇರುವ ಮಂತ್ರಿಗಳ ಮುಖಾಂತರ, ವಿಷ್ಣು ಸ್ಮಾರಕವನ್ನ ಉಳಿಸಿಕೊಳ್ಳುವುದಕ್ಕೆ ಏನೇನು ಕ್ರಮ ತೆಗೆದುಕೊಳ್ಳಬೇಕು ಅನ್ನುವುದನ್ನ ನಾವು ತುಂಬಾ ಹೋರಾಟ ಮಾಡಿದೆವು. ಸಂಬಂಧಪಟ್ಟ ಮಂತ್ರಿಗಳಿಗೂ ಹೇಳಿದೆವು. ಅದಕ್ಕೆ ಹಣಕಾಸು ಬೇಕಾ? ಮತ್ತೇನಾದರೂ ಬೇಕಾ? ಎಲ್ಲದಕ್ಕೂ ನಾವು ಸಿದ್ಧರಿದ್ದೀವಿ ಅಂತ ನಾನೇ ಸ್ವತಃ ಹೇಳಿದ್ದೆ' ಎಂದಿದ್ದಾರೆ.
'ಸಮಾಧಿ ಜಾಗ ಉಳಿಸಿಕೊಳ್ಳಲು ನಾನು ರೆಡಿ'
'ಆದರೂ ಸರ್ಕಾರ ಇದರ ಬಗ್ಗೆ ಗಮನ ತೆಗೆದುಕೊಳ್ಳಲಿಲ್ಲವೋ ಅಥವಾ ಸಮಾಧಿ ಮಾಡದೆ, ಭೂಮಿಯಲ್ಲಿ ಹೂಳದೆ, ಚಿತೆ ಇಟ್ಟ ಕಡೆ ಸ್ಮಾರಕ ಅಲ್ಲ, ಆಗಲೇ ಮೈಸೂರಿನಲ್ಲಿ ಒಂದು ಸ್ಮಾರಕ ಇದೆ. ಅದನ್ನೇ ಅಧಿಕೃತ ಸ್ಮಾರಕವಾಗಿ ಅವರನ್ನ ಗೌರವಿಸುವುದಕ್ಕೆ ಇಟ್ಟುಕೊಳ್ಳಿ ಅಂತ ಮಾಹಿತಿ ನೀಡಿ ಹೈಕೋರ್ಟ್ ಕೂಡ ಆದೇಶ ಮಾಡಿದೆ. ನಾವು ನ್ಯಾಯಾಲಯದ ವಿರುದ್ಧ ಮಾತನಾಡಲು ಆಗುವುದಿಲ್ಲ. ಮತ್ತೆ ನ್ಯಾಯಾಲಯಕ್ಕೆ ಹೋಗಿ, ಯಾವ ಸಂಸ್ಥೆ ಅಥವಾ ವ್ಯಕ್ತಿ ಅದನ್ನ ಖರೀದಿ ಮಾಡಿದ್ದಾರೋ ಅವರ ಮನವೊಲಿಸಿ ಅವರಿಗೆ ಸಾಹಸ ಸಿಂಹನ ಸ್ಮಾರಕ ಇದ್ದ ಅಷ್ಟು ಜಾಗವನ್ನಾದರೂ ನಮಗೆ ಉಳಿಸಿ ಕೊಡುವುದಕ್ಕೆ ಮನವಿ ಮಾಡಲು ನಾನು ತಯಾರಿದ್ದೇನೆ' ಎಂದು ಕಿಚ್ಚ ಭರವಸೆ ನೀಡಿದ್ದಾರೆ.

'ಸರ್ಕಾರ ಮಧ್ಯಪ್ರವೇಶಿಸುವುದರಿಂದ ಇದು ಬಗೆಹರಿಯುತ್ತದೆ ಎನ್ನುವುದಾದರೆ ಸರ್ಕಾರಕ್ಕೂ ಮನವಿ ಮಾಡಲು ತಯಾರಿದ್ದೇನೆ. ನಾನು ವಿಷ್ಣುವರ್ಧನ್ ಅವರ ಒಬ್ಬ ಅಭಿಮಾನಿಯಾಗಿ ಮಾತನಾಡುತ್ತಿದ್ದೀನಿ. ಕಿಚ್ಚನಾಗಿ ಅಲ್ಲ ಎಂದಿದ್ದಾರೆ. ಈ ವಿಚಾರವಾಗಿ ನನಗೆ ಅತಿಯಾದ ನೋವಿದೆ. ವಿಷ್ಣುವರ್ಧನ್ ಅವರಿಗೆ ಆಧ್ಯಾತ್ಮದಲ್ಲಿ ಒಲವಿತ್ತು. ನಾನು ರೂಪಕ ಆಗಬೇಕು, ಯಾವುದೋ ಕಟ್ಟಡಕ್ಕೆ ಹೋಗಿ ಸೇರಬಾರದು, ಸ್ಥಾವರಗಳಿಗೆ ಉಳಿಯಬಾರದು. ನಾನು ಪಂಚಭೂತಗಳಲ್ಲಿ ಇರಬೇಕು. ನಾವು ನೇಚರ್‌ಗೆ ಸಂಬಂಧಪಟ್ಟವರು ಅಂತ ಅವರು ಯಾವಾಗಲೂ ಹೇಳುತ್ತಿದ್ದರು. ಒಂದು ಲೆಕ್ಕದಲ್ಲಿ ಅವರ ಇನ್ನೊಂದು ಆಸೆ ಈಡೇರಿದಂತೆ ಅನಿಸುತ್ತಿದೆ' ಎಂದು ನೆನೆದಿದ್ದಾರೆ.
'ಅರ್ಧ ಎಕರೆ ಜಾಗ ಇಲ್ವಾ?'
'ಆದರೆ ಇದು ನಾವು ಎಲ್ಲ ಸಾಮಾನ್ಯ ಅಭಿಮಾನಿಗಳಿಗೆ, ಜನರಿಗೆ ಅರ್ಥ ಆಗುವುದಿಲ್ಲ. ಪೋಸ್ಟ್ ಹಾಕಲು ಹೇಗೆ ಒಂದು ಪೋಸ್ಟ್ ಬಾಕ್ಸ್ ಬೇಕೋ, ಹಾಗೆ ನಾವು ಗೌರವ ಸಲ್ಲಿಸಲು, ಪೂಜೆ ಮಾಡಲು ಒಂದು ದೇವಸ್ಥಾನ ಬೇಕು, ಸ್ಮಾರಕ ಬೇಕು. ವಿಷ್ಣುವರ್ಧನ್ ಅಂತಹ ಒಬ್ಬ ಮೇರುನಟರಿಗೆ, ಬೆಂಗಳೂರಿನಂತಹ ಒಂದು ರಾಜಧಾನಿಯಲ್ಲಿ, ಒಂದು ಅರ್ಧ ಎಕರೆ ಜಾಗ ಕೊಡಲಿಲ್ಲ, ಅವರ ಹೆಸರಿನಲ್ಲಿ ಒಂದು ಪ್ರಾರ್ಥನೆ ಮಾಡಲು, ಅವರನ್ನು ನೋಡಲು, ಅವರ ಜನ್ಮ ದಿನ ಆಚರಿಸಲು, ನಮ್ಮ ಬಳಿ ಒಂದು ಜಾಗ ಇಲ್ಲ ಅಂದರೆ, ಇದು ಅತ್ಯಂತ ಖಂಡನೀಯ ವಿಷಯ' ಎಂದು ಆಕ್ರೋಶ ಹೊರಹಾಕಿದ್ದಾರೆ.

'ನಾನು ಕೇಳ್ಪಟ್ಟೆ, ಬಾಲಕೃಷ್ಣ ಅಂತಹ ಹಿರಿಯ ನಟರ ಸಮಾಧಿಯನ್ನು ಕೂಡ ಒಡೆದು ಹಾಕಿದ್ದಾರೆ. ಅಲ್ಲಿದ್ದ ಒಂದು ಗಣಪತಿ ದೇವಸ್ಥಾನವೂ ಈಗ ಇಲ್ಲ. ವಿಷ್ಣು ಅವರ ಸ್ಮಾರಕ ಕೂಡ ಅಲ್ಲಿ ಇಲ್ಲ ಅಂದರೆ ಏನು ಅರ್ಥ? ಮನುಷ್ಯನ ಭಾವನೆಗಳಿಗಿಂತ, ಗೌರವಕ್ಕಿಂತ, ಅಭಿಮಾನಕ್ಕಿಂತ, ಈ ಒಂದು ಭೂಮಿ ವ್ಯವಹಾರ ಅಷ್ಟು ದೊಡ್ಡದಾಯಿತಾ? ಎಂದು ಕಿಚ್ಚ ಸುದೀಪ್ ಪ್ರಶ್ನೆ ಮುಂದಿಟ್ಟಿದ್ದಾರೆ. ಹಣ ನಮಗೆ ಅಷ್ಟು ಮುಖ್ಯ ಅಲ್ಲ, ಸರ್ಕಾರ ಮಧ್ಯ ಪ್ರವೇಶ ಮಾಡಬೇಕು. ಇದು ನನ್ನ ವಿನಂತಿ' ಎಂದಿದ್ದಾರೆ ಕಿಚ್ಚ.
'ನಾನೇ ಸ್ಮಾರಕ ಮರುಸ್ಥಾಪನೆ ಮಾಡ್ತೀನಿ'
'ನ್ಯಾಯಾಲಯಕ್ಕೆ ಹೋಗುವುದಾದರೆ, ನಾನೂ ಬರಲು ಸಿದ್ಧ. ಸರ್ಕಾರ, ನ್ಯಾಯಾಲಯ ಮತ್ತು ಆ ಭೂಮಿ ಖರೀದಿ ಮಾಡಿರುವವರಲ್ಲಿ ನನ್ನದೊಂದು ಮನವಿ, ನಿಮಗೆ ಏನು ಹಣಕಾಸು ಬೇಕೋ, ಅದನ್ನು ಕೊಡಲು ನಾನು ಮತ್ತು ನನ್ನಂತಹ ಲಕ್ಷಾಂತರ ಜನರು ಮುಂದೆ ಬರುತ್ತೇವೆ. ನಾನೇ ಮುಂದೆ ನಿಂತು ಅದನ್ನು ಮತ್ತೆ ಒಂದು ಸ್ಮಾರಕವಾಗಿ ಮರುಸ್ಥಾಪನೆ ಮಾಡುವುದಕ್ಕೆ ಮುಂದಾಗುತ್ತೇನೆ. ಅದಕ್ಕೆ ಒಂದು ಅವಕಾಶ ಮಾಡಿ ಕೊಡಿ. ಅವರು ನಮ್ಮ ಎದೆಯ ಒಳಗೆ ಸದಾ ಇರುತ್ತಾರೆ ನಿಜ. ಹಾಗಂತ ಪ್ರಾರ್ಥನೆ, ಗೌರವಕ್ಕೆ ಸಂಕೇತವಾಗಿ ಒಂದು ಸ್ಥಳ ಬೇಕು. ಆ ಪ್ರೀತಿಗೆ, ಪ್ರೇಮಕ್ಕೆ, ಅಭಿಮಾನಕ್ಕೆ ದ್ರೋಹ ಮಾಡಬೇಡಿ ಅಂತ ನಾನು ವಿನಂತಿ ಮಾಡುತ್ತೇನೆ' ಎಂದು ಸುದೀಪ್ ಬೇಡಿಕೊಂಡಿದ್ದಾರೆ.












Click it and Unblock the Notifications