Pavithra Gowda: ಜಾಮೀನಿಗೆ ಮಗಳ ಪರೀಕ್ಷೆ ಕಾರಣ ಕೊಟ್ಟಿದ್ದ ಪವಿತ್ರಾ ಗೌಡ: ಆಗಲ್ಲ ಎಂದ ಕೋರ್ಟ್
Pavithra Gowda: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ನಟ ದರ್ಶನ್ ಅವರ ಆಪ್ತೆ ಪವಿತ್ರಾ ಗೌಡಗೆ ಬಿಗ್ ಶಾಕ್ ಎದುರಾಗಿದೆ. ಮಗಳ ಪರೀಕ್ಷೆಗಳ ಹಿನ್ನೆಲೆ ಮಧ್ಯಂತರ ಜಾಮೀನು ನೀಡುವಂತೆ ಪವಿತ್ರಾ ಗೌಡ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.
ಮಗಳ ಪರೀಕ್ಷೆ ನಡೆಯುತ್ತಿರುವ ಕಾರಣ ಮಧ್ಯಂತರ ಜಾಮೀನು ನೀಡಬೇಕು ಎಂದು ಪವಿತ್ರ ಗೌಡ ಪರ ವಕೀಲರು ಮನವಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ನಡೆಸಲಾಗಿದ್ದು, ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ ನ್ಯಾಯಾಧೀಶರು ಮಧ್ಯಂತರ ಜಾಮೀನಿಗೆ ಅವಕಾಶ ನೀಡಲು ನಿರಾಕರಿಸಿದ್ದಾರೆ.

ಪವಿತ್ರಾ ಗೌಡಗೆ ಮಧ್ಯಂತರ ಜಾಮೀನು ನಿರಾಕರಣೆ
ಮಗಳಿಗೆ ಪರೀಕ್ಷೆಗಳು ಇರುವ ಹಿನ್ನೆಲೆ ಸುಮಾರು 20 ದಿನಗಳ ಕಾಲ ಮಧ್ಯಂತರ ಜಾಮೀನು ನೀಡಬೇಕೆಂದು ಪವಿತ್ರಾ ಗೌಡ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಐ.ಪಿ.ನಾಯಕ್, ವಾದ-ಪ್ರತಿ ವಾದಗಳನ್ನು ಆಲಿಸಿ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಆದೇಶ ಹೊರಡಿಸಿದ್ದಾರೆ.
ಪ್ರಕರಣದ ವಿಚಾರಣೆ ಪ್ರಸ್ತುತ ನ್ಯಾಯಾಲಯದಲ್ಲಿ ಮುಂದುವರೆದಿದ್ದು, ಈ ಹಂತದಲ್ಲಿ ಆರೋಪಿಗೆ ಮಧ್ಯಂತರ ಜಾಮೀನು ನೀಡಿದರೆ ಸಾಕ್ಷಿಗಳಿಗೆ ಅಡ್ಡಿಯಾಗುವ ಅಥವಾ ತನಿಖೆಗೆ ಅಡಚಣೆ ಉಂಟಾಗುವ ಸಾಧ್ಯತೆ ಇದೆ ಎಂದು ಸರ್ಕಾರಿ ವಿಶೇಷ ವಕೀಲರು ವಾದ ಮಂಡಿಸಿದ್ದರು. ಈ ವಾದವನ್ನು ಪರಿಗಣಿಸಿದ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿದೆ.
ಈ ಪ್ರಕರಣದಲ್ಲಿ ಪವಿತ್ರಾ ಗೌಡ ಅವರನ್ನು ಎ1 ಆರೋಪಿ ಎಂದು ಗುರುತಿಸಲಾಗಿದ್ದು, ಅವರೊಂದಿಗೆ ನಟ ದರ್ಶನ್, ನಾಗರಾಜ್, ಪ್ರದೂಷ್ ಸೇರಿದಂತೆ ಇತರ ಆರೋಪಿಗಳು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಇದಕ್ಕೂ ಮುನ್ನ, ಪವಿತ್ರಾ ಗೌಡ, ನಾಗರಾಜ್ ಮತ್ತು ಲಕ್ಷ್ಮಣ್ ಅವರಿಗೆ ವಾರಕ್ಕೊಮ್ಮೆ ಮನೆಯಿಂದ ಆಹಾರ ತರಿಸಿಕೊಳ್ಳಲು ಸೆಷನ್ಸ್ ನ್ಯಾಯಾಲಯ ಅನುಮತಿ ನೀಡಿದ್ದರೂ, ರಾಜ್ಯ ಸರ್ಕಾರದ ಮನವಿಯ ಮೇರೆಗೆ ಹೈಕೋರ್ಟ್ ಆ ಆದೇಶಕ್ಕೆ ತಡೆ ನೀಡಿತ್ತು. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಸಂಬಂಧಪಟ್ಟವರಿಗೆ ನೋಟಿಸ್ ಜಾರಿ ಮಾಡಿ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿತ್ತು
ಪ್ರಕರಣದ ಹಿನ್ನೆಲೆ
ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ ಆರೋಪದ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿ ಅವರನ್ನು ಅಪಹರಿಸಿ ನಂತರ ಕೊಲೆ ಮಾಡಲಾಗಿದೆ ಎಂಬ ಆರೋಪದಡಿ ದರ್ಶನ್ ಮತ್ತು ಅವರ ಸಹಚರರು ಬಂಧನಕ್ಕೊಳಗಾಗಿದ್ದಾರೆ. ಪ್ರಕರಣದ ವಿಚಾರಣೆ ಮುಂದುವರಿದಿದೆ.












Click it and Unblock the Notifications