Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಹತ್ವದ ಅಪ್‌ಡೇಟ್ ಕೊಟ್ಟ ಪೊಲೀಸ್ ಆಯುಕ್ತ ಬಿ ದಯಾನಂದ
ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಅಂತಿಮ ಹಂತಕ್ಕೆ ತಲುಪಿದೆ ಎಂದು ಬೆಂಗಳೂರು ಪೊಲೀಸ್ ಕಮೀಷನರ್ ಬಿ ದಯಾನಂದ ಮಾಹಿತಿ ನೀಡಿದ್ದಾರೆ. ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಈಗಾಗಲೇ ಸಾಕ್ಷಿಗಳನ್ನು ಸಂಗ್ರಹಿಸಿ ಅದನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸಲಾಗಿದೆ, ಶೀಘ್ರದಲ್ಲೇ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಲಾಗುವುದು ಎಂದು ಹೇಳಿದರು.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಾಕ್ಷಿಗಳನ್ನು ಬೆಂಗಳೂರಿನ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸಲಾಗಿದೆ. ಅದರಲ್ಲಿ ಶೇಕಡಾ 70 ರಷ್ಟು ವರದಿಗಳು ನಮ್ಮ ಕೈಸೇರಿದೆ. ಮೊಬೈಲ್ ಸೇರಿದಂತೆ ಎಲೆಕ್ಟ್ರಾನಿಕ್ ಉಪಕರಣಗಳ ಸಾಕ್ಷಿಗಳನ್ನು ಹೈದರಾಬಾದ್ ಎಫ್‌ಎಸ್‌ಎಲ್‌ಗೆ ಕಳಿಸಿದ್ದು ಕೆಲವೇ ದಿನಗಳಲ್ಲಿ ಆ ವರದಿಗಳು ಕೈ ಸೇರಲಿವೆ ಎಂದು ಹೇಳಿದರು.

ಒಮ್ಮೆ ಎಲ್ಲಾ ವರದಿಗಳು ಕೈ ಸೇರಿದ ಬಳಿಕ ಮತ್ತೊಮ್ಮೆ ಸಾಕ್ಷಿಗಳಿಂದ ಸ್ಪಷ್ಟೀಕರಣ ಪಡೆಯಲಾಗುತ್ತದೆ. ಎಲ್ಲವೂ ಕೂಡ ಸರಿಯಾಗಿ ತಾಳೆಯಾಗುವ ಬಗ್ಗೆ ಮತ್ತೆ ಪರಿಶೀಲನೆ ಮಾಡಿದ ಬಳಿಕ ಚಾರ್ಜ್‌ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಪೊಲೀಸರು ಸಜ್ಜಾಗಿದ್ದಾರೆ.
17 ಜನರ ವಿರುದ್ಧ ಸಾಕ್ಷ್ಯ ಸಂಗ್ರಹ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಆರೋಪಿಗಳನ್ನು ಬಂಧಿಸಲಾಗಿದೆ. ಎಲ್ಲಾ ಆರೋಪಿಗಳ ವಿರುದ್ಧ ಪೊಲೀಸರು ಸರಿಯಾದ ಸಾಕ್ಷಿಗಳನ್ನು ಸಂಗ್ರಹಿಸುತ್ತಿರುವ ಕಾರಣ ಚಾರ್ಜ್‌ಶೀಟ್ ಸಲ್ಲಿಸಲು ತಡವಾಗುತ್ತಿದೆ ಎನ್ನಲಾಗುತ್ತಿದೆ. 90 ದಿನಗಳ ಒಳಗಾಗಿ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಬೇಕಿದ್ದು ಸೆಪ್ಟಂಬರ್ 2ನೇ ವಾರದಲ್ಲಿ ಸಲ್ಲಿಕೆ ಮಾಡುವ ಸಾಧ್ಯತೆ ಇದೆ.
ಚಿತ್ರದುರ್ಗದ ಫಾರ್ಮಸಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ರೇಣುಕಾಸ್ವಾಮಿ ಜೂನ್ 9ರಂದು ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ಹೆಣವಾಗಿ ಸಿಕ್ಕಿದ್ದರು. ಪವಿತ್ರಾ ಗೌಡ ಅವರಿಗೆ ಸೋಷಿಯಲ್ ಮೀಡಿಯಾದಲ್ಲಿ ಕೆಟ್ಟದಾಗಿ ಮೆಸೇಜ್ ಮಾಡಿದ್ದೇ ಕೊಲೆಗೆ ಕಾರಣವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.












Click it and Unblock the Notifications