Karnataka: ಸುಳ್ಳು ಸುದ್ದಿ ಹರಡಿಸುವವರ ಆಟಕ್ಕೆ ಬ್ರೇಕ್, ಫ್ಯಾಕ್ಟ್ ಚೆಕ್ ಘಟಕ ರಚನೆ ಶೀಘ್ರ
ಬೆಂಗಳೂರು, ಆಗಸ್ಟ್ 21: ಪ್ರಜಾಪ್ರಭುತ್ವಕ್ಕೆ ಬೆದರಿಕೆ ಹಾಗೂ ಸಮಾಜದ ದೃವೀಕರಣಕ್ಕೆ ಸುಳ್ಳು ಸುದ್ದಿಗಳು ಕಾರಣವಾಗಿವೆ. ಈ ಸಂಬಂಧ ಸುಳ್ಳು ಸುದ್ದಿ ಹಬ್ಬಿಸುವವರ ಹೆಡೆಮುರಿ ಕಟ್ಟಲು, ನಕಲಿ ಸಂದೇಶಗಳಿಗೆ ಬ್ರೇಕ್ ಹಾಕಲು ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆ ಸೇರಿದಂತೆ ಅಗತ್ಯ ಇರುವ ಎಲ್ಲಾ ನಿಯಮ ಮತ್ತು ಕಾನೂನು ರೂಪಿಸುವ ಯೋಜನೆಗೆ ಅನುಮೋದನೆ ನೀಡಿದೆ.
ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸೈಬರ್ ಸುರಕ್ಷತೆಗೆ ಸಂಬಂಧಿಸಿದಂತೆ ಸಭೆಯಲ್ಲಿ ಅವರು ಈ ತೀರ್ಮಾನ ಮಾಡಿದರು. ಸುಳ್ಳು ಸುದ್ದಿಗಳ ಮತ್ತು ಸುಳ್ಳು ಸುದ್ದಿ ಸೃಷ್ಟಿಸುವ ಸಿಂಡಿಕೇಟ್ ಗಳ ಪತ್ತೆ, ಸುಳ್ಳು ಸುದ್ದಿ ಪ್ರಸಾರಕ್ಕೆ ತಡೆ, ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವ ಮೂರು ಹಂತಗಳ ಕ್ರಮಕ್ಕೆ ಮುಂದಿನ ಕೆಲವೇ ದಿನಗಳಲ್ಲಿ ಬ್ರೇಕ್ ಹಾಕಲು ಸಭೆಯಲ್ಲಿ ನಿರ್ಧರಿಸಲಾಯಿತು.

ರಾಜ್ಯದಲ್ಲಿ ಪ್ಯಾಕ್ಟ್ ಚೆಕ್ ಘಟಕ ರಚನೆ
ಪ್ಯಾಕ್ಟ್ ಚೆಕ್ ಘಟಕವು ಮೇಲುಸ್ತುವಾರಿ ಸಮಿತಿ, SOPC ಪರಿಶೀಲನೆ, ನೋಡಲ್ ಅಧಿಕಾರಿಗಳ ನೇಮಕ ಸೇರಿದಂತೆ ಸತ್ಯ ತಪಾಸಣೆ ತಂಡ ವಿಶ್ಲೇಷಣೆ ತಂಡದ ಸದಸ್ಯರನ್ನು ಒಳಗೊಂಡಿರಲಿದೆ. ಸಾಮರ್ಥ್ಯ ವರ್ಧನೆ ತಂಡ ರಚನೆ ಮಾಡಿ ವ್ಯವಸ್ಥಿತವಾಗಿ ತಂತ್ರಜ್ಞಾನ ಬಳಕೆ ಮಾಡಬಹುದು.
ಬೆಂಗಳೂರು ಪೊಲೀಸ್ ಕೂಡ ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಿದ್ದರೂ, ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ಅಗತ್ಯವಿದೆ. AI ಬಳಕೆ ಮಾಡಿ ಡೀಪ್ ಫೇಕ್ ಕೂಡ ಉಪಯೋಗ ಮಾಡಲಾಗುತ್ತಿದೆ. ಇದು ಸುಳ್ಳು ಸುದ್ದಿ ಹರಡುವವರಿಗೆ ಅನುಕೂಲವಾಗುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸಭೆಗೆ ವಿವರಿಸಿದರು.

ಸುಳ್ಳು ಸುದ್ದಿ ಗುರುತಿಸುವುದು, ಕಾನೂನು ಸುವ್ಯವಸ್ಥೆ ಕಾಪಾಡಲು ಇದು ಅತ್ಯಗತ್ಯವಾಗಿದೆ. ಆರಂಭಿಕ ಹಂತದಲ್ಲಿ ಐ.ಟಿ ಬಿಟಿ ಇಲಾಖೆ ಸಹಕರಿಸುತ್ತದೆ. ಕಾನೂನಿನ ವ್ಯಾಪ್ತಿಯಲ್ಲಿ ತರಲು ಕ್ರಮ ವಹಿಸಬೇಕು ನಂತರ ಘಟಕವು ಗೃಹ ಇಲಾಖೆಯ ವ್ಯಾಪ್ತಿಯಲ್ಲಿಯೇ ಇರುವುದು ಸೂಕ್ತ ಎಂದರು.
ಫೇಕ್ ಸುದ್ದಿ ಜಾಲ ವಿಸ್ತರಣೆ ಸಾಧ್ಯತೆ
ಈ ವೇಳೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು, ಫೇಕ್ ಸುದ್ದಿ ಜಾಲ ಜಾಗತಿಕವಾಗಿ ಬಾಲ್ಯಾವಸ್ಥೆಯಲ್ಲಿದ್ದರೂ ಕಾಲಾಂತರದಲ್ಲಿ ವ್ಯಾಪಕವಾಗಿ ಬಳಕೆಯಾಗುವ ಸಾಧ್ಯತೆಯೂ ಇದೆ. ಸುಳ್ಳು ಸುದ್ದಿ ಬಳಕೆ ಮಾಡುವವರಿಗೆ ಶಿಕ್ಷೆ ಕೂಡ ಆಗಬೇಕು. ಈ ಸಮಿತಿ ಕೂಡಲೇ ರಚಿಸಿ ಸಾಮರ್ಥ್ಯ ಹೆಚ್ಚಿಸುವ ಕೆಲಸ ಆಗಬೇಕು ಎಂದು ಅಭಿಪ್ರಾಯಪಟ್ಟರು.
ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆಯಿಂದ ಸುಳ್ಳುಸುದ್ದಿ ಹರಡುವುದನ್ನು ನಿಯಂತ್ರಿಸಿ ಇದು ಶಿಕ್ಷಾರ್ಹ ಅಪರಾಧ ಎಂದು ಜನರಿಗೆ ಮನವರಿಕೆ ಮಾಡಬೇಕಿದೆ ಎಂದು ಸಚಿವರಾದ ಕೃಷ್ಣಬೈರೇಗೌಡ ತಿಳಿಸಿದರು.
ಸಭೆಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ: ರಜನೀಶ್ ಗೋಯಲ್ , ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ , ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕರ್ ಉಪಸ್ಥಿತರಿದ್ದರು.
Fact Check
ಕ್ಲೇಮು
ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಸುಳ್ಳು ಸುದ್ದಿ ಹಾವಳಿ ತಡೆಗೆ ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆಗೆ ಅನುಮೋದನೆ ನೀಡಿದ್ದು ಸತ್ಯ.
ಪರಿಸಮಾಪ್ತಿ
ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ ಸುಳ್ಳು ಸುದ್ದಿ ಹರಡದಂತೆ ತಡೆಯಲು ರಾಜ್ಯ ಕಾಂಗ್ರೆಸ್ ಸರ್ಕಾರ ಪೊಲೀಸರ ನೇತೃತ್ವದಲ್ಲಿ ಫ್ಯಾಕ್ಟ್ ಚೆಕ್ ಘಟಕ ಸ್ಥಾಪಿಸಲಿದೆ.












Click it and Unblock the Notifications