Karnataka Assembly Election 2023: ಚಿತ್ರದುರ್ಗ ಜಿಲ್ಲೆಯಲ್ಲಿನ ಟಿಕೆಟ್ ಆಕಾಂಕ್ಷಿಗಳು
ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವು ದಿನಗಳು ಬಾಕಿ ಉಳಿದಿದ್ದು, ಕೋಟೆನಾಡು ಚಿತ್ರದುರ್ಗದಲ್ಲಿ ಈಗಾಗಲೇ 3 ಪಕ್ಷಗಳಿಂದಲೂ ಭರ್ಜರಿ ಪ್ರಚಾರ ಆರಂಭಿಸಿದ್ದಾರೆ. ಜಿಲ್ಲೆಯಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಸ್ ಪಕ್ಷಗಳು ಇನ್ನಿಲ್ಲದ ಕಸರತ್ತುಗಳನ್ನು ನಡೆಸುತ್ತಿವೆ. ಜೊತೆಗೆ ಎಎಪಿ ಹಾಗೂ ಜನಾರ್ಧನ ರೆಡ್ಡಿ ಅವರ ಹೊಸ ಪಕ್ಷ ಕೆಆರ್‌ಪಿಪಿ ಕೂಡ ಅಖಾಡಕ್ಕೆ ಇಳಿಯಲಿದೆ.
ಇನ್ನು ಕಾಂಗ್ರೆಸ್ ಪಕ್ಷದಲ್ಲಿ ಯುವಕರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಮತ್ತೊಂದೆಡೆ ಬಿಜೆಪಿಯಲ್ಲಿ ವಯಸ್ಸು ಮೀರಿದವರಿಗೆ ಟಿಕೆಟ್ ನೀಡುವುದಿಲ್ಲ, ಬದಲಿಗೆ ಬೇರೆಯವರಿಗೆ ಟಿಕೆಟ್ ಕೊಡುತ್ತಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ
ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿಗಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇವರಿಬ್ಬರ ನಡುವಿನ ಮುಸುಕಿನ ಗುದ್ದಾಟ ನಡೆಯುತ್ತಲೇ ಇದೆ ಎನ್ನುವ ಮಾತುಗಳು ಕೂಡ ಕೇಳಿ ಬಂದಿದ್ದವು. ಇದರ ನಡೆವೆಯೂ ಇದೀಗ ಇಬ್ಬರು ಒಂದಾಗಿ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಈಗಾಗಲೇ ರಾಜ್ಯದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಡ್ಯ, ಬೆಂಗಳೂರು ಕಾರ್ಯಕ್ರಮದಲ್ಲಿ ಚುನಾವಣೆ ಪ್ರಚಾರದ ರಣಕಹಳೆಯನ್ನೇ ಮೊಳಗಿಸಿದ್ದರು.
ಇನ್ನು ಇತ್ತೀಚೆಗಷ್ಟೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳ ಬಿಜೆಪಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕರ್ತರಿಗೆ ಕೆಲವು ಸೂಚನೆಗಳನ್ನು ಕೂಡ ನೀಡಿದ್ದಾರೆ ಎನ್ನಲಾಗಿದೆ.
ಇತ್ತ ಜೆಡಿಎಸ್ ಕೂಡ ರಾಜ್ಯಾದ್ಯಂತ ಪಂಚರತ್ನ ಯಾತ್ರೆ ಕೈಗೊಂಡಿದ್ದು, ಮೊದಲ ಹಂತದ ಪಂಚರತ್ನ ಮುಗಿಸಿ ಎರಡನೇ ಹಂತದ ಪ್ರಚಾರದಲ್ಲಿ ತೊಡಗಿದ್ದಾರೆ. ಹಾಗಾದರೆ ಕೋಟೆ ನಾಡು ಚಿತ್ರದುರ್ಗದ ಆರು ವಿಧಾನಸಭಾ ಕ್ಷೇತ್ರಗಳಲ್ಲಿನ ಟಿಕೆಟ್ ಆಕಾಂಕ್ಷಿಗಳ ವಿವರವನ್ನು ಇಲ್ಲಿ ನೀಡಲಾಗಿದೆ.

ಹಿರಿಯೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳು
ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ಹಿರಿಯೂರು ವಿಧಾನಸಭಾ ಕ್ಷೇತ್ರ ಭಾರಿ ಕುತೂಹಲ ಕೆರಳಿಸಿರುವ ಕ್ಷೇತ್ರವಾಗಿದೆ. ಏಕೆಂದರೆ ಈ ಕ್ಷೇತ್ರ ಹೊರಗಿನವರಿಗೆ ಆದ್ಯತೆ ನೀಡುವ ಕ್ಷೇತ್ರವಾಗಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಭದ್ರ ಕೋಟೆಯಾಗಿರುವ ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿತ್ತು. ಈ ಬಾರಿ ಹೊರಗಿನವರಿಗೆ ಆದ್ಯತೆ ನೀಡುತ್ತಾರಾ ಅಥವಾ ಸ್ಥಳೀಯರಿಗೆ ಮಣೆ ಹಾಕುತ್ತಾರಾ ಎಂಬುದನ್ನು ಕಾದುನೋಡಬೇಕಿದೆ.
ತ್ರಿಕೋಣ ಸ್ಪರ್ಧೆಯಿಂದ ಏರ್ಪಟ್ಟಿದ್ದು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಮೂರು ಪಕ್ಷದಲ್ಲಿ ಟಿಕೆಟ್ ಪೈಪೋಟಿ ಶುರುವಾಗಿದೆ. ಮಾಜಿ ಸಚಿವ ಡಿ. ಸುಧಾಕರ್, ಕಾಂಗ್ರೆಸ್ ಮುಖಂಡ ಹಾಗೂ ಕೆಎಂಎಫ್ ನಿರ್ದೇಶಕ ಸಿ. ವೀರಭದ್ರ ಬಾಬು, ಎಂಎಲ್‌ಸಿ ಪರಜಿತ ಅಭ್ಯರ್ಥಿ ಬಿ. ಸೋಮಶೇಖರ್, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಸಿ.ಬಿ. ಪಾಪಣ್ಣ, ಕಾಡುಗೊಲ್ಲ ಮುಖಂಡ ಜಿ. ಜಯರಾಮಯ್ಯ ಸೇರಿದಂತೆ ಮತ್ತಿತರರು ಕಾಂಗ್ರೆಸ್ ಟಿಕೆಟ್‌ಗೆ ಅರ್ಜಿ ಹಾಕಿದ್ದಾರೆ.
ಇನ್ನು ಬಿಜೆಪಿಯಲ್ಲಿ ಹಾಲಿ ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್, ಬಿಜೆಪಿ ಮುಖಂಡ ಸಿದ್ದೇಶ್ ಯಾದವ್ ಸೇರಿದಂತೆ ಇತರರ ಹೆಸರು ಕೇಳಿ ಬರುತ್ತಿವೆ. ಉಳಿದಂತೆ ಜೆಡಿಎಸ್ ಪಕ್ಷದಲ್ಲಿ ನಿವೃತ್ತ ಮುಖ್ಯ ಇಂಜಿನಿಯರ್ ರವೀಂದ್ರಪ್ಪ, ಮಾಜಿ ಜಿಲ್ಲಾ ಪಂಚಾಯತಿ ಅಧ್ಯಕ್ಷ ಜಯಣ್ಣ, ಮಾಜಿ ಜೆಡಿಎಸ್ ತಾಲೂಕು ಅಧ್ಯಕ್ಷ ಶಿವಪ್ರಸಾದ್ ಗೌಡ, ನಿರ್ಮಿತಿ ಕೇಂದ್ರದ ಮೂಡ್ಲಗಿರಿಯಪ್ಪ ಸೇರಿದಂತೆ ಮತ್ತಿತರರು ಟಿಕೆಟ್‌ಗಾಗಿ ಪೈಪೋಟಿ ನಡೆಸುತ್ತಿದ್ದಾರೆ.
ಇನ್ನು ಎಎಪಿ ಪಕ್ಷದಿಂದ ಕೆ.ಟಿ. ತಿಪ್ಪೇಸ್ವಾಮಿ, ಪಕ್ಷೇತರ ಅಭ್ಯರ್ಥಿಯಾಗಿ ಗನ್ನಾಯಕನಹಳ್ಳಿ ಎಚ್. ಮಹೇಶ್ ಕ್ಷೇತ್ರದಲ್ಲಿ ಪ್ರಚಾರ ಕೈಗೊಂಡಿದ್ದಾರೆ.

ಚಿತ್ರದುರ್ಗದಲ್ಲಿ "ಕೈ", ಕಮಲ ಸದ್ದು
ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ನಡುವೆ ನೇರ ನೇರ ಸ್ಪರ್ಧೆ ಏರ್ಪಟ್ಟಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ದೊಡ್ಡದಿದೆ. ಬಿಜೆಪಿಯಲ್ಲಿ ಹಾಲಿ ಶಾಸಕ ಜಿ. ಎಚ್. ತಿಪ್ಪಾರೆಡ್ಡಿ ಅವರಿಗೆ ವಯಸ್ಸಾಗಿದೆ ಎಂಬ ಕಾರಣದಿಂದ ಟಿಕೆಟ್ ಸಿಗುವುದು ಬಹುತೇಕ ಅನುಮಾನವಾಗಿದೆ.
ಒಂದು ವೇಳೆ ಇವರಿಗೆ ಟಿಕೆಟ್ ತಪ್ಪಿದರೆ ಮಗನಿಗೆ ಟಿಕೆಟ್ ಕೊಡುತ್ತಾರೆ ಎನ್ನುವ ನಂಬಿಕೆ ಶಾಸಕ ತಿಪ್ಪಾರೆಡ್ಡಿ ಅಭಿಮಾನಿಗಳಲ್ಲಿ ಇದೆ. ಮತ್ತೊಂದು ಕಡೆ ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ ಅವರ ಪುತ್ರನಿಗೆ ಟಿಕೆಟ್ ಸಿಗಲಿದೆ ಎಂಬ ಮಾತುಗಳು ಕ್ಷೇತ್ರಗಳಲ್ಲಿ ಹರಿದಾಡುತ್ತಿದೆ. ಹಾಲಿ ಶಾಸಕ ಜಿ. ಎಚ್. ತಿಪ್ಪಾರೆಡ್ಡಿಗೆ ಟಿಕೆಟ್ ತಪ್ಪಿದರೆ ಇವರು ಕಾಂಗ್ರೆಸ್ ಅಥವಾ ಜೆಡಿಎಸ್ ಪಕ್ಷಕ್ಕೆ ಜಿಗಿದರೂ ಅಚ್ಚರಿ ಪಡಬೇಕಾಗಿಲ್ಲ ಎನ್ನುವ ಮಾತುಗಳು ಕೇಳಿಬರುತ್ತಿವೆ.
ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್‌ಗಾಗಿ ಸುಮಾರು ಹತ್ತಕ್ಕೂ ಹೆಚ್ಚು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಮಾಜಿ ಶಾಸಕ ಎಸ್. ಕೆ. ಬಸವರಾಜನ್, ಮಾಜಿ ಎಂಎಲ್‌ಸಿ ರಘು ಆಚಾರ್, ಮಾಜಿ ಶಾಸಕ ಎ.ವಿ. ಉಮಾಪತಿ, ಜಿ. ಜಯರಾಮಯ್ಯ, ಹನುಮನುಲಿ ಷಣ್ಮುಖಪ್ಪ, ಉದ್ಯಮಿ ವೀರೇಂದ್ರ ಪಪ್ಪಿ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಇನ್ನು ಜೆಡಿಎಸ್ ಪಕ್ಷದಲ್ಲಿ ಇದುವರೆಗೂ ಯಾವುದೇ ಹೆಸರುಗಳು ಕೇಳಿ ಬಂದಿಲ್ಲ.

ಹೊಸದುರ್ಗದಲ್ಲಿ "ಟಿಕೆಟ್" ಪೈಪೋಟಿ
ಹೊಸದುರ್ಗದಲ್ಲಿ ಟಿಕೆಟ್‌ಗೆ ಗೂಳಿಹಟ್ಟಿ ಶೇಖರ್ ಮತ್ತು ಲಿಂಗಮೂರ್ತಿ ಪೈಪೋಟಿ ನಡೆಸುತ್ತಿದ್ದಾರೆ. 2008ರಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿ ಯಡಿಯೂರಪ್ಪ ಸರ್ಕಾರದಲ್ಲಿ ಸಚಿವರಾಗಿದ್ದ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಗೂಳಿಹಟ್ಟಿ ಶೇಖರ್ ಮತ್ತೆ ನಾನೇ ಬಿಜೆಪಿ ಅಭ್ಯರ್ಥಿ ಎಂದು ಹೇಳಿಕೊಂಡಿದ್ದಾರೆ. ಒಂದು ವೇಳೆ ಟಿಕೆಟ್ ಸಿಗದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ವರಿಷ್ಠರಿಗೆ ಎಚ್ಚರಿಕೆ ನೀಡಿದ್ದಾರೆ.
ಇತ್ತ ಖನಿಜ ನಿಗಮದ ಮಾಜಿ ಅಧ್ಯಕ್ಷ ಲಿಂಗಮೂರ್ತಿ ಸಹ ಟಿಕೆಟ್ ಆಕಾಂಕ್ಷಿಯಾಗಿದ್ದು, ಕಳೆದ ಬಾರಿ ಚುನಾವಣೆಯಲ್ಲಿ ಟಿಕೆಟ್ ಬಿಟ್ಟುಕೊಟ್ಟಿದ್ದೆ. ಹಾಗಾಗಿ ನನಗೆ ಟಿಕೆಟ್ ಸಿಗಲಿದೆ ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ. ಇವರಿಬ್ಬರ ನಡುವೆ ಬಿಜೆಪಿಯಲ್ಲಿ ಟಿಕೆಟ್ ಪೈಪೋಟಿ ನಡೆಯುತ್ತಿದೆ. ಇನ್ನು ಜೆಡಿಎಸ್ ಪಕ್ಷದಿಂದ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದು, ತಿಪ್ಪೇಸ್ವಾಮಿ ಅವರು ಕಣಕ್ಕಿಳಿದಿದ್ದಾರೆ.
ಕಾಂಗ್ರೆಸ್‌ನಿಂದ ಮಾಜಿ ಶಾಸಕ ಬಿ.ಜಿ. ಗೋವಿಂದಪ್ಪ ಟಿಕೆಟ್ ಆಕಾಂಕ್ಷಿಯಾಗಿದ್ದು, ಕ್ಷೇತ್ರವನ್ನು ಹಿಡಿತಕ್ಕೆ ತೆಗೆದುಕೊಳ್ಳಲು ಪ್ರಯತ್ನ ಮಾಡುತ್ತಿದ್ದಾರೆ. ಮಾಜಿ ಶಾಸಕರು ತಮ್ಮ ಆಡಳಿತದಲ್ಲಿ ನಡೆಸಿದ ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊಂಡು, ನನಗೆ ವಯಸ್ಸಾಗಿದೆ ಇದೊಂದು ಬಾರಿ ಮತ್ತೊಮ್ಮೆ ಅವಕಾಶ ನೀಡಿ ಎಂದು ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಅಲ್ಲದೆ ಮಂಜುನಾಥ್, ನವೀನ್ ಯಾದವ್, ಹೆಬ್ಬಳ್ಳಿ ಓಂಕಾರಪ್ಪ ಸಹ ಆಕಾಂಕ್ಷಿಗಳಾಗಿದ್ದು, ತನ್ನದೇ ಆದ ಬಳಗವನ್ನು ಇಟ್ಟುಕೊಂಡು ಕ್ಷೇತ್ರ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ.

ಹೊಳಲ್ಕೆರೆ ಕ್ಷೇತ್ರದಲ್ಲಿ "ಟಿಕೆಟ್" ಜಟಾಪಟಿ
ಅರೆ ಮಲೆನಾಡು ಎಂದು ಕರೆಸಿಕೊಳ್ಳುವ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರ ಪರಿಶಿಷ್ಟ ಜಾತಿಗೆ ಮೀಸಲು ಕ್ಷೇತ್ರವಾಗಿದೆ. ಒಮ್ಮೆ ಕಾಂಗ್ರೆಸ್ ಗೆದ್ದರೆ, ಮತ್ತೊಮ್ಮೆ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸುತ್ತಾರೆ. ಬಿಜೆಪಿಯ ಹಾಲಿ ಶಾಸಕ ಎಂ. ಚಂದ್ರಪ್ಪ ಅವರು ಶಾಸಕರಾಗಿದ್ದಾರೆ. ಚಂದ್ರಪ್ಪ ಅವರು ಮರು ಆಯ್ಕೆ ಬಯಸಿ ಬಿಜೆಪಿಯಿಂದ ಸ್ಪರ್ಧಿಸಲಿದ್ದಾರೆ.
ಇನ್ನು ಕಾಂಗ್ರೆಸ್ ಪಕ್ಷದಲ್ಲಿ ಮಾಜಿ ಸಚಿವ ಎಚ್. ಆಂಜನೇಯ, ಮಾಜಿ ಸಚಿವ ಕೆ.ಎಚ್. ರಂಗನಾಥ್ ಅಳಿಯ ವಿಜಯ್ ಕುಮಾರ್, ಸವಿತಾ ರಘು ಸೇರಿದಂತೆ ಮತ್ತಿತರು ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಇತ್ತ ಜೆಡಿಎಸ್ ಪಕ್ಷದ ಅಭ್ಯರ್ಥಿಗಳ ಹೆಸರು ಸುಳಿವು ಸಿಗುತ್ತಿಲ್ಲ. ಸಿದ್ದರಾಮಯ್ಯ ಅವರ ಆಪ್ತರಾಗಿರುವ ಮಾಜಿ ಸಚಿವ ಎಚ್. ಆಂಜನೇಯ ಅವರಿಗೆ ಈ ಬಾರಿಯೂ ಟಿಕೆಟ್ ಬಹುತೇಕ ಖಚಿತವಾಗಲಿದೆ. ಅವರು ಕ್ಷೇತ್ರವನ್ನು ಹಿಡಿತಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಪ್ರಚಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

ಚಳ್ಳಕೆರೆ ಕ್ಷೇತ್ರದಲ್ಲಿ "ಕೈ" ದರ್ಬಾರ್
ಆಯಿಲ್ ಸಿಟಿ ಎಂದು ಕರೆಸಿಕೊಳ್ಳುವ ಚಳ್ಳಕೆರೆ ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರವಾಗಿದ್ದು, ಎರಡು ಬಾರಿ ಕಾಂಗ್ರೆಸ್ ಪಕ್ಷದಿಂದ ಟಿ. ರಘುಮೂರ್ತಿ ಅವರು ಶಾಸಕರಾಗಿದ್ದಾರೆ. ಮತ್ತೊಮ್ಮೆ ಗೆಲುವಿನ ನಿರೀಕ್ಷೆಯಲ್ಲಿ ರಘುಮೂರ್ತಿ ಇದ್ದಾರೆ. ವಿವಿಧ ಕಾರ್ಯಕ್ರಮಗಳ ಜೊತೆಗೆ ಭರ್ಜರಿ ಪ್ರಚಾರವನ್ನು ಕೈಗೊಂಡಿದ್ದಾರೆ. ಮೂಲಭೂತ ಸೌಕರ್ಯಗಳನ್ನು ಒದಗಿಸುವುದು, ರೈತರಿಗೆ ಚೆಕ್ ಡ್ಯಾಂ ನಿರ್ಮಾಣ ಹೀಗೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡುತ್ತಾ ಬಂದಿರುವ ಹಾಲಿ ಶಾಸಕರು ಮತ್ತೊಮ್ಮೆ ಜಯದ ಕನಸು ಕಾಣುತ್ತಿದ್ದಾರೆ.
ಇನ್ನು ಬಿಜೆಪಿಯಿಂದ ಮಾಜಿ ಸಂಸದ ಹಾಗೂ ನಟ ಶಶಿಕುಮಾರ್ ಮತ್ತು ಬಾಳೆಕಾಯಿ ರಾಮದಾಸ್ ನಡುವೆ ಪೈಪೋಟಿ ಶುರುವಾಗಿದೆ. ಈಗಾಗಲೇ ಜೆಡಿಎಸ್ ಅಭ್ಯರ್ಥಿಯಾಗಿ ರವೀಶ್‌ಗೆ ಟಿಕೆಟ್ ಘೋಷಣೆಯಾಗಿದೆ. ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಚಾರದಲ್ಲಿ ತೊಡಗಿದ್ದಾರೆ.
ಇನ್ನು ಮಾಜಿ ಸಚಿವ ಜನಾರ್ಧನ್ ರೆಡ್ಡಿ ಅವರ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಉದಯವಾಗಿದ್ದು, ಚಳ್ಳಕೆರೆ ವಿಧಾನಸಭಾ ಕ್ಷೇತ್ರದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಲು ರೆಡ್ಡಿ ಚಿಂತನೆಯಲ್ಲಿದ್ದಾರೆ ಎನ್ನಬಹುದು. ಈ ಬಾರಿ ರೆಡ್ಡಿಯ ಹೊಸ ಪಕ್ಷದಿಂದ ಇತರೇ ಅಭ್ಯರ್ಥಿಗಳ ಗೆಲುವು ಅಷ್ಟು ಸುಲಭವಾಗಿಲ್ಲ ಎಂದು ವಿಶ್ಲೇಷಿಸಬಹುದು.

ಮೊಳಕಾಲ್ಮೂರಿನಲ್ಲಿ ಭಾರಿ ಪೈಪೋಟಿ
ಕೈಮಗ್ಗ ನೇಯ್ಗೆಗೆ ಹೆಸರಾಗಿರುವ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರ ಪರಿಶಿಷ್ಟ ಪಂಗಡದ ಮೀಸಲು ಕ್ಷೇತ್ರವಾಗಿದ್ದು. ಕ್ಷೇತ್ರದಲ್ಲಿ ಬಿಜೆಪಿಯ ಹಾಲಿ ಸಚಿವ ಶ್ರೀರಾಮುಲು ಠಿಕಾಣಿ ಹೂಡಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮೊಳಕಾಲ್ಮೂರು ಕ್ಷೇತ್ರದಿಂದ ಶ್ರೀರಾಮುಲು ಸ್ಪರ್ಧಿಸಿ ಕಾಂಗ್ರೆಸ್ ವಿರುದ್ಧ ಗೆಲುವು ಸಾಧಿಸಿದ್ದರು. ಈ ಬಾರಿ ಕ್ಷೇತ್ರದಲ್ಲಿ ವಿರೋಧಿ ಅಲೆ ಹೆಚ್ಚಾಗಿದೆ. ಹಾಗಾಗಿ ಶ್ರೀರಾಮುಲು ಕ್ಷೇತ್ರ ತೊರೆದು ಬಳ್ಳಾರಿಯಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಮಾತುಗಳು ಕೂಡ ಕೇಳಿ ಬರುತ್ತಿವೆ.
ಇನ್ನು ಕಾಂಗ್ರೆಸ್ ಟಿಕೆಟ್‌ಗಾಗಿ ಮಾಜಿ ಶಾಸಕ ನೇರ್ಲಗುಂಟೆ ತಿಪ್ಪೇಸ್ವಾಮಿ, ಮಾಜಿ ಸಂಸದ ವಿ.ಎಸ್. ಉಗ್ರಪ್ಪ, ಯೋಗೇಶ್ ಬಾಬು ನಡುವೆ ಪೈಪೋಟಿ ಆರಂಭವಾಗಿದೆ. ಕಾಂಗ್ರೆಸ್ ತಿಪ್ಪೇಸ್ವಾಮಿಗೆ ಟಿಕೆಟ್ ನೀಡಿದರೆ, ಸಚಿವರ ದುರಾಡಳಿ ನೀತಿಯಿಂದ ತಿಪ್ಪೇಸ್ವಾಮಿ ಗೆಲ್ಲುವುದು ಬಹುತೇಕ ಖಚಿತವಾಗಿದೆ ಎನ್ನುತ್ತಾರೆ ಅಭಿಮಾನಿಗಳು. ಇನ್ನು ಜೆಡಿಎಸ್ ಪಕ್ಷದಿಂದ ಅಭ್ಯರ್ಥಿಗಳು ಯಾರು ಎಂದು ತಿಳಿದಿಲ್ಲ. ಈ ಕ್ಷೇತ್ರದಲ್ಲೂ ರೆಡ್ಡಿ ಪಕ್ಷದಿಂದ ಅಭ್ಯರ್ಥಿ ಅಖಾಡದಲ್ಲಿ ಇರಲಿದ್ದಾರೆ ಎನ್ನಲಾಗುತ್ತಿದೆ.
ಒಟ್ಟಾರೆಯಾಗಿ ದಿನ ಕಳೆದಂತೆ ಚುನಾವಣೆಯ ಕಾವು ರಂಗೇರುತ್ತಿದ್ದು, ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ತ್ರಿಕೋನ ಸ್ಪರ್ಧೆಯಿಂದ ಏರ್ಪಟ್ಟರೆ. ಉಳಿದ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಏರ್ಪಡಲಿದೆ.
ಒಂದೊಂದು ಕ್ಷೇತ್ರವು, ಒಂದೊಂದು ರೀತಿಯ ತಿರುವು ಪಡೆದುಕೊಳ್ಳಲಿದೆ. ಮತದಾರರ ಒಲವು ಯಾರ ಕಡೆ ಇದೆ, ಹಾಲಿ ಶಾಸಕರ ಕಡೆಯೋ ಅಥವಾ ಹೊಸ ಅಭ್ಯರ್ಥಿಗಳ ಕಡೆಯೋ ಅಥವಾ ಸೋತ ಅಭ್ಯರ್ಥಿಗಳ ಕಡೆಯೋ ಎಂಬುದನ್ನು ಕಾದು ನೋಡಬೇಕಿದೆ.











Click it and Unblock the Notifications