Year Ender 2022 : ಜೆಡಿಎಸ್‌ಗೆ ಸಿ. ಎಂ. ಇಬ್ರಾಹಿಂ ಸಾರಥ್ಯ
2022ರಲ್ಲಿ ಕರ್ನಾಟಕ ಹಲವಾರು ರಾಜಕೀಯ ಬೆಳವಣಿಗೆಗೆ ಕಾರಣವಾಗಿದೆ. 2023ರಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುವುದರಿಂದ ಈಗ ನಡೆಯುತ್ತಿರುವ ಬೆಳವಣಿಗೆಗಳು ಕುತೂಹಲ ಮೂಡಿಸಿವೆ. ರಾಜ್ಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಎದುರಾಳಿಯಾಗಿರುವುದು ಜೆಡಿಎಸ್ ಪಕ್ಷ.
2023ರ ವಿಧಾನಸಭೆ ಚುನಾವಣೆಯಲ್ಲಿ 123 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹಲವಾರು ತಂತ್ರ ರೂಪಿಸಿದ್ದಾರೆ. ಪಂಚರತ್ನ ರಥಯಾತ್ರೆ ಮೂಲಕ ಜನರ ಬಳಿಗೆ ಹೋಗಿದ್ದಾರೆ.
ಈ ವರ್ಷ ಜೆಡಿಎಸ್ ಪಕ್ಷದಲ್ಲಿ ಮಹತ್ವದ ಬದಲಾಣೆ ನಡೆಯಿತು. ಪಕ್ಷದ ವಿಧಾನಸಭೆ ಚುನಾವಣೆಗೆ ಒಂದು ವರ್ಷ ಇರುವಾಗಲೇ ಪಕ್ಷದ ರಾಜ್ಯಾಧ್ಯಕ್ಷರನ್ನು ಬದಲಾವಣೆ ಮಾಡಲಾಯಿತು. ಕಾಂಗ್ರೆಸ್ ತೊರೆದು ಜೆಡಿಎಸ್‌ಗೆ ವಾಪಸ್ ಆದ ಸಿ. ಎಂ. ಇಬ್ರಾಹಿಂ ರಾಜ್ಯ ಜೆಡಿಎಸ್‌ನ ಸಾರಥಿಯಾದರು.
ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಸ್ಥಾನ ಸಿಗದ ಕಾರಣಕ್ಕೆ ಸಿ. ಎಂ. ಇಬ್ರಾಹಿಂ ಕಾಂಗ್ರೆಸ್ ನಾಯಕರ ವಿರುದ್ಧ ಅಸಮಾಧಾನಗೊಂಡಿದ್ದರು. ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ, ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಆಪ್ತರಾಗಿರುವ ಅವರು ಹಲವು ಬಾರಿ ಉಭಯ ನಾಯಕರನ್ನು ಭೇಟಿ ಮಾಡಿದರು.
"ಏನೋ ಸಿದ್ದ ಎಂದರೆ ಹೌದೋ ಬುದ್ಧ ಎಂಬ ಪರಿಸ್ಥಿತಿ ರಾಜ್ಯ ಕಾಂಗ್ರೆಸ್‌ನಲ್ಲಿದೆ. ಕಾಂಗ್ರೆಸ್ ಹಾಗೂ ನನ್ನದು ಮುಗಿದ ಅಧ್ಯಾಯ. ಸದ್ಯದಲ್ಲೇ ಪರಿಷತ್ ಸದಸ್ಯತ್ವಕ್ಕೂ ರಾಜೀನಾಮೆ ನೀಡುತ್ತೇನೆ" ಎಂದು ಸಿ. ಎಂ. ಇಬ್ರಾಹಿಂ ಹೇಳಿದ್ದರು.
2022ರ ಜನವರಿಯಲ್ಲಿ ಕಾಂಗ್ರೆಸ್ ತೊರೆದ ಸಿ. ಎಂ. ಇಬ್ರಾಹಿಂ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದರು. ಏಪ್ರಿಲ್‌ನಲ್ಲಿ ಅವರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಮುಸ್ಲಿಂ ಸಮುದಾಯದ ಪ್ರಭಾವಿ ನಾಯಕನಿಗೆ ಜೆಡಿಎಸ್ ಪಕ್ಷ ರಾಜ್ಯಾಧ್ಯಕ್ಷ ಹುದ್ದೆ ನೀಡುವುದಾಗಿ ಘೋಷಣೆ ಮಾಡಿತು.

ಎಚ್. ಕೆ. ಕುಮಾರಸ್ವಾಮಿ ಅಧ್ಯಕ್ಷರಾಗಿದ್ದರು; 2018ರ ವಿಧಾನಸಭೆ ಚುನಾವಣೆ ಬಳಿಕ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಆಸ್ತಿತ್ವಕ್ಕೆ ಬಂದಿತು. ಆಗ ಎಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾದರು. ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ, ಮುಖ್ಯಮಂತ್ರಿ ಹುದ್ದೆ ಎರಡನ್ನೂ ನಿಭಾಯಿಸುವುದು ಕಷ್ಟ ಎಂದು ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು.
ಆಗ ಮಾಜಿ ಸಚಿವ ಎಚ್. ವಿಶ್ವನಾಥ್‌ರನ್ನು ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಲಾಯಿತು. 2019ರ ಲೋಕಸಭಾ ಚುನಾವಣೆಯನ್ನು ಅವರ ನೇತೃತ್ವದಲ್ಲಿಯೇ ಎದುರಿಸಲಾಯಿತು. ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಜೆಡಿಎಸ್ ಲೋಕಸಭೆ ಚುನಾವಣೆ ಎದುರಿಸಿತು. ಆದರೆ 28 ಲೋಕಸಭಾ ಕ್ಷೇತ್ರಗಳ ಪೈಕಿ ಜೆಡಿಎಸ್ ಗೆದ್ದಿದ್ದು ಕೇವಲ ಒಂದು ಸ್ಥಾನ.
ಲೋಕಸಭೆ ಚುನಾವಣೆ ಸೋಲಿನ ನೈತಿಕ ಹೊಣೆ ಹೊತ್ತು ಎಚ್. ವಿಶ್ವನಾಥ್ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಅಲ್ಲದೇ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಿದರು, ಜೆಡಿಎಸ್ ಪಕ್ಷವನ್ನು ಬಿಟ್ಟು ಬಿಜೆಪಿ ಸೇರಿದರು. ಹುಣಸೂರು ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು ಸೋಲು ಕಂಡರು.
ಎಚ್. ವಿಶ್ವನಾಥ್ ರಾಜೀನಾಮೆ ಬಳಿಕ ಸಕಲೇಶಪುರ ಕ್ಷೇತ್ರದ ಜೆಡಿಎಸ್ ಶಾಸಕ ಎಚ್. ಕೆ. ಕುಮಾರಸ್ವಾಮಿಯನ್ನು ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಲಾಯಿತು. ಆದರೆ ಹೈಕಮಾಂಡ್ ನಾಯಕರ ಬಳಿ ಅವರು ರಾಜ್ಯಾಧ್ಯಕ್ಷರನ್ನು ಬದಲಾವಣೆ ಮಾಡುವಂತೆ ಮನವಿ ಮಾಡಿದ್ದರು.
ಕೇಂದ್ರದ ಮಾಜಿ ಸಚಿವ, ಎಚ್. ಡಿ. ದೇವೇಗೌಡರ ಪರಮಾಪ್ತ ಸಿ. ಎಂ. ಇಬ್ರಾಹಿಂ ಜೆಡಿಎಸ್ ಸೇರುವಾಗಲೇ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡುವುದಾಗಿ ಭರವಸೆ ನೀಡಲಾಯಿತು. ಎಚ್. ಕೆ. ಕುಮಾರಸ್ವಾಮಿಯನ್ನು ಸಂಸದೀಯ ಮಂಡಳಿ ಅಧ್ಯಕ್ಷರಾಗಿ ನೇಮಕ ಮಾಡುವುದಾಗಿ ತೀರ್ಮಾನವಾಯಿತು.

ಆಗಸ್ಟ್‌ನಲ್ಲಿ ಜೆಡಿಎಸ್ ಪಕ್ಷದ ರಾಜ್ಯ ಮಟ್ಟದ ಸಾಂಸ್ಥಿಕ ಚುನಾವಣೆ ನಡೆಯಿತು. ಸಿ. ಎಂ. ಇಬ್ರಾಹಿಂ ರಾಜ್ಯ ಘಟದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಗೊಂಡರು. ಎಚ್. ಸಿ. ನೀರಾವರಿ ಚುನಾವಣಾಧಿಕಾರಿಯಾಗಿದ್ದರು. ಸಿ. ಎಂ. ಇಬ್ರಾಹಿಂ ನೇಮಕಗೊಂಡಿರುವುದನ್ನು ಅವರು ಘೋಷಣೆ ಮಾಡಿದರು.
ಸಿ. ಎಂ. ಇಬ್ರಾಹಿಂ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮಾತನಾಡಿದ ಎಚ್. ಡಿ. ಕುಮಾರಸ್ವಾಮಿ, "ಪಕ್ಷದ ರಾಜ್ಯ ಘಟಕಕ್ಕೆ ಹೊಸ ಅಧ್ಯಕ್ಷರು ಬಂದಿದ್ದಾರೆ. ಅವರ ನೇತೃತ್ವದಲ್ಲಿ ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕು" ಎಂದು ಕರೆ ನೀಡಿದರು.
"ಈಗ ನಮ್ಮ ಪಕ್ಷ ಸ್ವತಂತ್ರವಾಗಿ ಅಧಿಕಾರ ಹಿಡಿಯಬೇಕು ಎಂಬುದು ತಂದೆಯವರ ಕನಸು. ಎಲ್ಲರೂ ಸೇರಿ ಅದನ್ನು ನನಸು ಮಾಡಬೇಕು" ಎಂದು ಎಚ್. ಡಿ. ಕುಮಾರಸ್ವಾಮಿ ಹೇಳಿದ್ದರು.
ಅಭ್ಯರ್ಥಿಗಳ ಘೋಷಣೆ; 2023ರ ಚುನಾವಣೆಗೆ ಜೆಡಿಎಸ್ ಪಕ್ಷ ತಯಾರಿ ಆರಂಭಿಸಿದೆ. ಡಿಸೆಂಬರ್ 19ರಂದು ವಿಧಾನಸಭೆ ಚುನಾವಣೆಗೆ 93 ಅಭ್ಯರ್ಥಿಗಳ ಪಟ್ಟಿಯನ್ನು ರಾಜ್ಯಾಧ್ಯಕ್ಷ ಸಿ. ಎಂ. ಇಬ್ರಾಹಿಂ ಸಮ್ಮುಖದಲ್ಲಿ ಬಿಡುಗಡೆ ಮಾಡಲಾಗಿದೆ.












Click it and Unblock the Notifications