ಅವ್ವ
ಪಿ. ಲಂಕೇಶ್‌ನನ್ನವ್ವ ಫಲವತ್ತಾದ ಕಪ್ಪು ನೆಲಅಲ್ಲಿ ಹಸಿರು ಪತ್ರದ ಹರವು, ಬಿಳಿಯ ಹೂ ಹಬ್ಬ ; ಸುಟ್ಟಷ್ಟು ಕಸುವು, ನೊಂದಷ್ಟು ಹೂ ಹಣ್ಣುಮಕ್ಕೊಳೊದ್ದರೆ ಅವಳ ಅಂಗಾಂಗ ಪುಲಕ ;ಹೊತ್ತ ಬುಟ್ಟಿಯ ಇಟ್ಟು ನರಳಿ ಎವೆ ಮುಚ್ಚಿದಳು ತೆರೆಯದಂತೆ.ಪಲ್ಲ ಜೋಳವ ಎತ್ತಿ ಅಪ್ಪನ್ನ ಮೆಚ್ಚಿಸಿ ತೋಳಬಂದಿಯ ಗೆದ್ದು ,ಹೆಂಟೆಗೊಂದು ಮೊಗೆ ನೀರು ಹಿಗ್ಗಿ ;ಮೆಣಸು, ಅವರೆ, ಜೋಳ, ತೊಗರಿಯ ಹೊಲವ ಕೈಯಲ್ಲಿ ಉತ್ತು ,ಹೂವಲ್ಲಿ ಗದ್ದೆಯ ನೋಡಿಕೊಂಡು,ಯೌವನವ ಕಳೆದವಳು ಚಿಂದಿಯ ಸೀರೆ ಉಟ್ಟುಕೊಂಡು.ಸತ್ತಳು ಈಕೆ : ಬಾಗು ಬೆನ್ನಿನ ಮುದುಕಿಗೆಷ್ಟು ಪ್ರಾಯ ?ಎಷ್ಟು ಗಾದಿಯ ಚಂದ್ರ, ಒಲೆಯೆದುರು ಹೋಳಿಗೆಯ ಸಂಭ್ರಮ ?ಎಷ್ಟು ಸಲ ಈ ಮುದುಕಿ ಅತ್ತಳು ಕಾಸಿಗೆ, ಕೆಟ್ಟ ಪೈರಿಗೆ, ಸತ್ತ ಕರುವಿಗೆ;ಎಷ್ಟು ಸಲ ಹುಡುಕುತ್ತ ಊರೂರು ಅಲೆದಳುತಪ್ಪಿಸಿಕೊಂಡ ಮುದಿಯ ಎಮ್ಮೆಗೆ ?ಸತಿ ಸಾವಿತ್ರಿ, ಜಾನಕಿ, ಊರ್ಮಿಳೆಯಲ್ಲ ;ಚರಿತ್ರೆ ಪುಸ್ತಕದ ಶಾಂತ, ಶ್ವೇತ, ಗಂಭೀರೆಯಲ್ಲ ;ಗಾಂಧೀಜಿ , ರಾಮಕೃಷ್ಣರ ಸತಿಯರಂತಲ್ಲ ;ಮುತ್ತೆೈದೆಯಾಗಿ ಕುಂಕುಮ ಕೂಡ ಇಡಲಿಲ್ಲ . ಬನದ ಕರಡಿಯ ಹಾಗೆಚಿಕ್ಕ ಮಕ್ಕಳ ಹೊತ್ತುಗಂಡನ್ನ ಸಾಕಿದಳು ಕಾಸು ಗಂಟಿಕ್ಕಿದಳುನೊಂದ ನಾಯಿಯ ಹಾಗೆ ಬೈದು, ಗೊಣಗಿ, ಗುದ್ದಾಡಿದಳು ;ಸಣ್ಣತನ, ಕೊಂಕು, ಕೆರೆದಾಟ ಕೋತಿಯ ಹಾಗೆ :ಎಲ್ಲಕ್ಕೆ ಮನೆತನದ ಉದ್ಧಾರ ಸೂತ್ರ.ಈಕೆ ಉರೆದೆದ್ದಾಳು ಮಗ ಕೆಟ್ಟರೆ, ಗಂಡ ಬೇರೆ ಕಡೆ ಹೋದಾಗ ಮಾತ್ರ.ಬನದ ಕರಡಿಗೆ ನಿಮ್ಮ ಭಗವದ್ಗೀತೆ ಬೇಡ ;ನನ್ನವ್ವ ಬದುಕಿದ್ದು ಕಾಳುಕಡ್ಡಿಗೆ, ದುಡಿತಕ್ಕೆ, ಮಕ್ಕಳಿಗೆ ;ಮೇಲೊಂದು ಸೂರು, ಅನ್ನ , ರೊಟ್ಟಿ , ಹಚಡಕ್ಕೆ ;ಸರೀಕರ ಎದುರು ತಲೆಯೆತ್ತಿ ನಡೆಯಲಿಕ್ಕೆ.ಇವಳಿಗೆ ಮೆಚ್ಚುಗೆ, ಕೃತಜ್ಞತೆಯ ಕಣ್ಣೀರು :ಹೆತ್ತದ್ದಕ್ಕೆ ಸಾಕಿದ್ದಕ್ಕೆ ; ಮಣ್ಣಲ್ಲಿ ಬದುಕಿ,ಮನೆಯಿಂದ ಹೊಲಕ್ಕೆ ಹೋದಂತೆತಣ್ಣಗೆ ಮಾತಾಡುತ್ತಲೇ ಹೊರಟು ಹೋದದ್ದಕ್ಕೆ.
ನನ್ನವ್ವ ಫಲವತ್ತಾದ ಕಪ್ಪು ನೆಲ
ಅಲ್ಲಿ ಹಸಿರು ಪತ್ರದ ಹರವು, ಬಿಳಿಯ ಹೂ ಹಬ್ಬ ;
ಸುಟ್ಟಷ್ಟು ಕಸುವು, ನೊಂದಷ್ಟು ಹೂ ಹಣ್ಣು
ಮಕ್ಕೊಳೊದ್ದರೆ ಅವಳ ಅಂಗಾಂಗ ಪುಲಕ ;
ಹೊತ್ತ ಬುಟ್ಟಿಯ ಇಟ್ಟು ನರಳಿ ಎವೆ ಮುಚ್ಚಿದಳು ತೆರೆಯದಂತೆ.
ಪಲ್ಲ ಜೋಳವ ಎತ್ತಿ ಅಪ್ಪನ್ನ ಮೆಚ್ಚಿಸಿ ತೋಳಬಂದಿಯ ಗೆದ್ದು ,
ಹೆಂಟೆಗೊಂದು ಮೊಗೆ ನೀರು ಹಿಗ್ಗಿ ;
ಮೆಣಸು, ಅವರೆ, ಜೋಳ, ತೊಗರಿಯ ಹೊಲವ ಕೈಯಲ್ಲಿ ಉತ್ತು ,
ಹೂವಲ್ಲಿ ಗದ್ದೆಯ ನೋಡಿಕೊಂಡು,
ಯೌವನವ ಕಳೆದವಳು ಚಿಂದಿಯ ಸೀರೆ ಉಟ್ಟುಕೊಂಡು.
ಸತ್ತಳು ಈಕೆ :
ಬಾಗು ಬೆನ್ನಿನ ಮುದುಕಿಗೆಷ್ಟು ಪ್ರಾಯ ?
ಎಷ್ಟು ಗಾದಿಯ ಚಂದ್ರ, ಒಲೆಯೆದುರು ಹೋಳಿಗೆಯ ಸಂಭ್ರಮ ?
ಎಷ್ಟು ಸಲ ಈ ಮುದುಕಿ ಅತ್ತಳು
ಕಾಸಿಗೆ, ಕೆಟ್ಟ ಪೈರಿಗೆ, ಸತ್ತ ಕರುವಿಗೆ;
ಎಷ್ಟು ಸಲ ಹುಡುಕುತ್ತ ಊರೂರು ಅಲೆದಳು
ತಪ್ಪಿಸಿಕೊಂಡ ಮುದಿಯ ಎಮ್ಮೆಗೆ ?
ಸತಿ ಸಾವಿತ್ರಿ, ಜಾನಕಿ, ಊರ್ಮಿಳೆಯಲ್ಲ ;
ಚರಿತ್ರೆ ಪುಸ್ತಕದ ಶಾಂತ, ಶ್ವೇತ, ಗಂಭೀರೆಯಲ್ಲ ;
ಗಾಂಧೀಜಿ , ರಾಮಕೃಷ್ಣರ ಸತಿಯರಂತಲ್ಲ ;
ಮುತ್ತೆೈದೆಯಾಗಿ ಕುಂಕುಮ ಕೂಡ ಇಡಲಿಲ್ಲ .
ಬನದ ಕರಡಿಯ ಹಾಗೆ
ಚಿಕ್ಕ ಮಕ್ಕಳ ಹೊತ್ತು
ಗಂಡನ್ನ ಸಾಕಿದಳು ಕಾಸು ಗಂಟಿಕ್ಕಿದಳು
ನೊಂದ ನಾಯಿಯ ಹಾಗೆ ಬೈದು, ಗೊಣಗಿ, ಗುದ್ದಾಡಿದಳು ;
ಸಣ್ಣತನ, ಕೊಂಕು, ಕೆರೆದಾಟ ಕೋತಿಯ ಹಾಗೆ :
ಎಲ್ಲಕ್ಕೆ ಮನೆತನದ ಉದ್ಧಾರ ಸೂತ್ರ.
ಈಕೆ ಉರೆದೆದ್ದಾಳು
ಮಗ ಕೆಟ್ಟರೆ, ಗಂಡ ಬೇರೆ ಕಡೆ ಹೋದಾಗ ಮಾತ್ರ.
ಬನದ ಕರಡಿಗೆ ನಿಮ್ಮ ಭಗವದ್ಗೀತೆ ಬೇಡ ;
ನನ್ನವ್ವ ಬದುಕಿದ್ದು
ಕಾಳುಕಡ್ಡಿಗೆ, ದುಡಿತಕ್ಕೆ, ಮಕ್ಕಳಿಗೆ ;
ಮೇಲೊಂದು ಸೂರು, ಅನ್ನ , ರೊಟ್ಟಿ , ಹಚಡಕ್ಕೆ ;
ಸರೀಕರ ಎದುರು ತಲೆಯೆತ್ತಿ ನಡೆಯಲಿಕ್ಕೆ.
ಇವಳಿಗೆ ಮೆಚ್ಚುಗೆ, ಕೃತಜ್ಞತೆಯ ಕಣ್ಣೀರು :
ಹೆತ್ತದ್ದಕ್ಕೆ ಸಾಕಿದ್ದಕ್ಕೆ ; ಮಣ್ಣಲ್ಲಿ ಬದುಕಿ,
ಮನೆಯಿಂದ ಹೊಲಕ್ಕೆ ಹೋದಂತೆ
ತಣ್ಣಗೆ ಮಾತಾಡುತ್ತಲೇ ಹೊರಟು ಹೋದದ್ದಕ್ಕೆ.












Click it and Unblock the Notifications