ಮೋದಿ ಹೆಸರು ಘೋಷಣೆಗೆ ಅಡ್ವಾಣಿ ಬ್ರೇಕ್!
ನವದೆಹಲಿ, ಸೆ.11 : ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಬಿಜೆಪಿ ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸುವುದು ವಿಳಂಬವಾಗುವ ಸಾಧ್ಯತೆ ಇದೆ. ಪಕ್ಷದ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ ಸೇರಿದಂತೆ ಕೆಲವು ನಾಯಕರು ಮೋದಿ ಹೆಸರು ಘೋಷಣೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.
ಬುಧವಾರ ಮಧ್ಯಾಹ್ನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಎಲ್.ಕೆ.ಅಡ್ವಾಣಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಶುಕ್ರವಾರ ನಡೆಯಲಿರುವ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಮೋದಿ ಹೆಸರನ್ನು ಘೋಷಿಸುವ ಕುರಿತು ಮಾತುಕತೆ ನಡೆಸಿದರು.

ರಾಷ್ಟ್ರೀಯ ಸ್ವಯಂ ಸೇವಕ ಸಂಘ ಈಗಾಗಲೇ ಮೋದಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಲು ಅನುಮತಿ ನೀಡಿದೆ. ದೇಶದ ತುಂಬಾ ನರೇಂದ್ರ ಮೋದಿ ಅಲೆ ಇರುವುದರಿಂದ ಅವರ ಹೆಸರನ್ನು ಘೋಷಣೆ ಮಾಡಲು ಅನುಮತಿ ನೀಡಬೇಕೆಂದು ಮನವಿ ಮಾಡಿದರು.
ಆದರೆ, ಎಲ್.ಕೆ.ಅಡ್ವಾಣಿ, ಸುಷ್ಮಾ ಸ್ವರಾಜ್, ಮುರಳಿ ಮನೋಹರ್ ಜೋಶಿ ಸೇರಿದಂತೆ ಹಲವಾರು ನಾಯಕರು ಮೋದಿ ಅವರ ಹೆಸರು ಘೋಷಿಸಿಲು ಒಪ್ಪಿಗೆ ನೀಡಿಲ್ಲ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.
ಮುಂಬರುವ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಧಾನಿ ಎಂದು ಘೋಷಿಸಿದರೆ, ಚುನಾವಣೆಯಲ್ಲಿ ಮತಗಳು ಕಾಂಗ್ರೆಸ್ ಪಕ್ಷದ ಕಡೆ ಹರಿದು ಹೋಗಬಹುದು ಎಂದು ನಾಯಕರು ಆತಂಕ ವ್ಯಕ್ತಪಡಿಸಿದ್ದಾರೆ.
ಮಧ್ಯಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನ ಹಾಗೂ ದೆಹಲಿ ವಿಧಾನಸಭೆ ಚುನಾವಣೆಗಳು ಮುಗಿದ ಬಳಿಕ ನರೇಂದ್ರ ಮೋದಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸುವುದು ಉತ್ತಮ ಎಂದು ಅಭಿಪ್ರಾಯಪಟ್ಟಿದ್ದಾರೆ.
ಆದ್ದರಿಂದ ಬಿಜೆಪಿ ಪ್ರಧಾನಿ ಅಭ್ಯರ್ಥಿಯಾಗಿ ನರೇಂದ್ರ ಮೋದಿ ಅವರ ಹೆಸರು ಘೋಷಿಸುವುದು ವಿಳಂಬವಾಗುವ ಸಾಧ್ಯತೆ ಇದೆ. ಮೊದಲು ಬಿಜೆಪಿ ಶುಕ್ರವಾರ ನಡೆಯಲಿರುವ ಸಂಸದೀಯ ಮಂಡಳಿ ಸಭೆಯಲ್ಲಿ ಮೋದಿ ಅವರು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಲು ಸಕಲ ರೀತಿಯಲ್ಲಿ ಸಜ್ಜಾಗಿತ್ತು. ಕೊನೆಯದಾಗಿ ಅಡ್ವಾಣಿ ಅನುಮತಿ ಪಡೆಯಲು ತೆರಳಿತ್ತು.












Click it and Unblock the Notifications