ದಾವಣಗೆರೆ: ಕೆಲಸ ಖಾಲಿ ಇದೆ, ಮೇ 9ರ ತನಕ ಅರ್ಜಿ ಸಲ್ಲಿಸಿ
ದಾವಣಗೆರೆ, ಏಪ್ರಿಲ್ 09: ದಾವಣಗೆರೆ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ನೇಮಕಾತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಕೆ ಮಾಡಲು ಮೇ 9 ಕೊನೆಯ ದಿನವಾಗಿದೆ. ಅರ್ಹ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಚನ್ನಗಿರಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 19 ಅಂಗನವಾಡಿ ಕಾರ್ಯಕರ್ತೆ, 68 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ.

ಆಸಕ್ತ, ಅರ್ಹ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು https://dwcd.karnataka.gov.in ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು.
ಅಭ್ಯರ್ಥಿಗಳು ವೆಬ್‌ಸೈಟ್ ತೆರೆದ ಬಳಿಕ ಕಾರ್ಯಕರ್ತೆ, ಸಹಾಯಕಿಯರ ನೇಮಕಾತಿಯ ಸಬ್‍ಟ್ಯಾಬ್‍ನಲ್ಲಿ ಕ್ಲಿಕ್ ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು. ಚನ್ನಗಿರಿ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ 19 ಅಂಗನವಾಡಿ ಕಾರ್ಯಕರ್ತೆ ಮತ್ತು 68 ಅಂಗನವಾಡಿ ಸಹಾಯಕಿಯರನ್ನು ನೇಮಕಾತಿ ಮಾಡಲು ಈ ಹಿಂದೆ ಭೌತಿಕವಾಗಿ ಅರ್ಜಿ ಆಹ್ವಾನಿಸಲಾಗಿದ್ದು ಇದನ್ನು ಪರಿಗಣಿಸಲಾಗುವುದಿಲ್ಲ. ಈ ಅಭ್ಯರ್ಥಿಗಳು ಸಹ ಹೊಸದಾಗಿ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದೆ.
ಅಭ್ಯರ್ಥಿಗಳು ಆನ್ಲೈನ್ ಮೂಲಕ ನಿಗದಿತ ಅರ್ಜಿ ತುಂಬಬೇಕು, ಭಾವಚಿತ್ರ, ಅಗತ್ಯ ದಾಖಲೆ, ಆಧಾರ್ ಸಂಖ್ಯೆ ನಮೂದಿಸಿ ಇ-ಹಸ್ತಾಕ್ಷರದೊಂದಿಗೆ ಅರ್ಜಿ ಸಲ್ಲಿಕೆ ಕಾರ್ಯ ಪೂರ್ಣಗೊಳಿಸಬೇಕಾಗಿರುತ್ತದೆ. 4 ವಿವಿಧ ಹಂತದಲ್ಲಿ ಅರ್ಜಿಗಳನ್ನು ಕಡ್ಡಾಯವಾಗಿ ಪೂರ್ಣಗೊಳಿಸಬೇಕು. ಇಲ್ಲವಾದಲ್ಲಿ ಅರ್ಜಿಯನ್ನು ತಿರಸ್ಕರಿಸಲಾಗುತ್ತದೆ.
ವೆಬ್‍ಸೈಟ್‍ನಲ್ಲಿ ತಿಳಿಸಿರುವ ಅಂಶಗಳ ಜೊತೆಗೆ ಆನ್‍ಲೈನ್ ಮುಖಾಂತರ ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳು ಇತರೆ ಅವಶ್ಯಕ ದಾಖಲಾತಿಗಳ ಜೊತೆಗೆ, ವಿಧವೆಯರು ಪತಿಯ ಮರಣ ಪ್ರಮಾಣ ಪತ್ರ ಅಥವಾ ವಿಧವಾ ಪ್ರಮಾಣ ಪತ್ರವನ್ನು ಅಪ್‌ಲೋಡ್ ಮಾಡುವುದು ಕಡ್ಡಾಯವಾಗಿರುತ್ತದೆ.
ಅಭ್ಯರ್ಥಿಗಳ ಆಯ್ಕೆ ಪಟ್ಟಿ ತಯಾರಿಸುವಾಗ ಆನ್‍ಲೈನ್‍ನಲ್ಲಿ ಅಪ್‍ಲೋಡ್ ಮಾಡಿರುವ ವಿಧವೆಗೆ ಸಂಬಂಧಿಸಿದ ದಾಖಲಾತಿಗಳನ್ನು ಡೌನ್‍ಲೋಡ್ ಮಾಡಿಕೊಂಡು ಭೌತಿಕವಾಗಿ ಪರಿಶೀಲಿಸಿ ಆಯ್ಕೆ ಪಟ್ಟಿ ತಯಾರಿಸಲಾಗುತ್ತದೆ.
ಆಸಿಡ್ ದಾಳಿಗೆ ತುತ್ತಾದ ಮಹಿಳೆಯರಿಗೆ ಮೊದಲ ಆದ್ಯತೆಯನ್ನು ನೀಡಲಾಗುತ್ತದೆ. ಇಲಾಖೆಯ ಸಂಸ್ಥೆಗಳ ನಿವಾಸಿಗಳಿಗೆ 2ನೇ ಆದ್ಯತೆ, ವಿಧವೆಯರಿಗೆ 3ನೇ ಆದ್ಯತೆ ನೀಡಲಾಗುವುದು.
ಆಸಕ್ತ, ಅರ್ಹರು ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08192-295444.
ಆಕ್ಷೇಪಣೆ ಆಹ್ವಾನ: ಬಳ್ಳಾರಿ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಒಟ್ಟು 64 ಅಂಗನವಾಡಿ ಸಹಾಯಕಿಯರ ಆಯ್ಕೆಗಾಗಿ ಆಧಿಸೂಚನೆ ಹೊರಡಿಸಲಾಗಿದ್ದು, ಈಗಾಗಲೇ ತಾತ್ಕಾಲಿಕವಾಗಿ ಆಯ್ಕೆಗೊಂಡ ಅಂಗನವಾಡಿ ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ.
ಆಯ್ಕೆ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಬಹುದು ಎಂದು ಬಳ್ಳಾರಿ ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ. ಆಯ್ಕೆ ಪಟ್ಟಿ ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಮಹಾನಗರ ಪಾಲಿಕೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ತಹಶೀಲ್ದಾರರ್ ಕಛೇರಿ, ತಾಲ್ಲೂಕು ಪಂಚಾಯತ್, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.
ಆಕ್ಷೇಪಣೆ ಸಲ್ಲಿಸಲು ಏಪ್ರಿಲ್ 22 (ರಜೆ ದಿನಗಳನ್ನು ಹೊರತುಪಡಿಸಿ)ರಂದು ಮಧ್ಯಾಹ್ನ 1.30ರ ತನಕ ಅವಕಾಶವಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08392-268609 ಸಂಪರ್ಕಿಸಬಹುದು.












Click it and Unblock the Notifications