ಚುನಾವಣಾ ನೀತಿ ಸಂಹಿತೆ ಜಾರಿ; ನೇಮಕಾತಿ ಅಧಿಸೂಚನೆ ರದ್ದು
ಬೆಂಗಳೂರು, ಏಪ್ರಿಲ್ 04; ಕೇಂದ್ರ ಚುನಾವಣಾ ಆಯೋಗ ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. ಚುನಾವಣಾ ವೇಳಾಪಟ್ಟಿ ಘೋಷಣೆಯಾಯಾಗುತ್ತಿದ್ದಂತೆಯೇ ರಾಜ್ಯದಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ. ರಾಜ್ಯದ 224 ಕ್ಷೇತ್ರಗಳಿಗೆ ಮೇ 10ರ ಬುಧವಾರ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ.
ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದ ಬಳಿಕ ಕಟ್ಟುನಿಟ್ಟಿನ ಕ್ರಮಗಳು ಜಾರಿಗೆ ಬಂದಿವೆ.
ಚುನಾವಣಾ ನೀತಿ ಸಂಹಿತೆ ಜಾರಿಯಾದ ಹಿನ್ನಲೆಯಲ್ಲಿ ಶಿಶು ಅಭಿವೃದ್ದಿ ಯೋಜನೆಯಡಿ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಗೆ ಬರುವ 71 ಅಂಗನವಾಡಿ ಕಾರ್ಯಕರ್ತೆ ಹುದ್ದೆ ಹಾಗೂ 80 ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಹೊರಡಿಸಿದ್ದ ನೇಮಕಾತಿ ಅಧಿಸೂಚನೆ ರದ್ದುಗೊಳಿಸಲಾಗಿದೆ.

ಬೆಂಗಳೂರು ನಗರ ಜಿಲ್ಲಾಡಳಿತ ದಿನಾಂಕ 24/3/2023ರಂದು ಹೊರಡಿಸಿರುವ ನೇಮಕಾತಿ ಪ್ರಕಟಣೆಯನ್ನು ರದ್ದುಗೊಳಿಸಲಾಗಿದೆ. ಚುನಾವಣಾ ಪ್ರಕ್ರಿಯೆ ಮುಗಿದ ನಂತರ ಹೊಸ ಅಧಿಸೂಚನೆ ಹೊರಡಿಸಲಾಗುವುದು ಎಂದು ಬೆಂಗಳೂರು ರಾಜ್ಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಈಗಾಗಲೇ ಅರ್ಜಿಗಳನ್ನು ಸಲ್ಲಿಕೆ ಮಾಡಿರುವ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಬೆಂಗಳೂರು ರಾಜ್ಯ ಯೋಜನೆ, ಒಂದನೇ ಮಹಡಿ, ಬಿಬಿಎಂಪಿ ಕಟ್ಟಡ, ಹೆರಿಗೆ ಆಸ್ಪತ್ರೆ ಪಕ್ಕ, ಎನ್. ಆರ್. ಕಾಲೋನಿ, ಬೆಂಗಳೂರು ನಗರ, ಬೆಂಗಳೂರು-560004 ಇವರನ್ನು ಸಂಪರ್ಕಿಸಬಹುದುದ. ದೂರವಾಣಿ ಸಂಖ್ಯೆಗಳು 080-26601917.
ನೀತಿ ಸಂಹಿತೆ ಜಾರಿ; ಮಾದರಿ ಚುನಾವಣಾ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಬೆಂಗಳೂರು ನಗರ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ರಾಜಕೀಯ ಪಕ್ಷಗಳು ಹಾಗೂ ಸರ್ಕಾರಿ ಜಾಹೀರಾತಿಗೆ ಸಂಬಂಧಿಸಿದ ಎಲ್ಲಾ ಗೋಡೆಬರಹ, ಪೋಸ್ಟರ್ಸ್, ಬ್ಯಾನರ್, ಫ್ಲೆಕ್ಸ್ ಇತ್ಯಾದಿಗಳನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗಿದೆ. ಸರ್ಕಾರಿ ಪ್ರವಾಸಿ ಮಂದಿರ, ಪರಿವೀಕ್ಷಣಾ ಮಂದಿರಗಳನ್ನು ಈಗಾಗಲೇ ವಶಕ್ಕೆ ಪಡೆಯಲಾಗಿದೆ. ಚುನಾವಣಾ ಆಯೋಗದ ಸೂಚನೆಯಂತೆ ಚೆಕ್‌ಪೋಸ್ಟ್‌ಗಳನ್ನು ಸ್ಥಾಪನೆ ಮಾಡಿ ವಾಹನಗಳ ತಪಾಸಣೆಗಳನ್ನು ಕೈಗೊಳ್ಳಲಾಗಿದೆ.
ಹೊಸಕೋಟೆಯಲ್ಲಿ ಕೆಲಸ ಖಾಲಿ ಇದೆ; ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಶಿಶು ಅಭಿವೃದ್ದಿ ಯೋಜನೆಯ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕೇಂದ್ರಗಳಿಗೆ 15 ಅಂಗನವಾಡಿ ಕಾರ್ಯಕರ್ತೆ ಮತ್ತು 36 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಕರೆಯಲಾಗಿದೆ. ಗೌರವಧನದ ಆಧಾರದ ಮೇಲೆ ನೇಮಕಾತಿ ನಡೆಯುತ್ತಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಲು ಏಪ್ರಿಲ್ 24 ಕೊನೆಯ ದಿನವಾಗಿದೆ.
ಆಸಕ್ತರು ಅರ್ಜಿ ನಮೂನೆಯನ್ನು ಶಿಶು ಅಭಿವೃದ್ಧಿ ಯೋಜನಾ ಕಛೇರಿ, ಹೊಸಕೋಟೆ ಇಲ್ಲಿ ಪಡೆದು, ಭರ್ತಿ ಮಾಡಿ ಸಲ್ಲಿಕೆ ಮಾಡಬೇಕು. ನಿಗದಿತ ದಿನಾಂಕದ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಅರ್ಜಿಯ ಜೊತೆ ಎಲ್ಲಾ ದಾಖಲಾತಿಗಳನ್ನು ಮುಚ್ಚಿದ ಲಕೋಟೆಯಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಟಿ. ಎ. ಪಿ. ಸಿ. ಎಂ. ಎಸ್. ಆವರಣ, ಹೊಸಕೋಟೆ ಇಲ್ಲಿಗೆ ಸಲ್ಲಿಸಬೇಕು.
ಆಸಕ್ತ ಮತ್ತು ಅರ್ಹರು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-27931493 ಹಾಗೂ ಹೊಸಕೋಟೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.












Click it and Unblock the Notifications