ಕೇಂದ್ರ ಸರ್ಕಾರದಿಂದ ಮತ್ತೆ ಕನ್ನಡಿಗರಿಗೆ ಉಂಡೆನಾಮ; ಎಚ್‌ಡಿಕೆ
ಬೆಂಗಳೂರು, ಏಪ್ರಿಲ್ 10; ಕನ್ನಡ ಭಾಷೆಗೆ ಕೇಂದ್ರ ಬಿಜೆಪಿ ಸರ್ಕಾರ ಸದಾ ಅನ್ಯಾಯ ಮಾಡುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸದಾ ಆರೋಪ ಮಾಡುತ್ತಿರುತ್ತಾರೆ. ಈಗ ಸಿಆರ್‌ಪಿಎಫ್ ನೇಮಕದ ಕಂಪ್ಯೂಟರ್ ಪರೀಕ್ಷೆಯಲ್ಲಿ ಕನ್ನಡಕ್ಕೆ ಅವಕಾಶವನ್ನೇ ಕೊಟ್ಟಿಲ್ಲ ಎಂದು ಆರೋಪಿಸಿ ಅವರು ಸರಣಿ ಟ್ವೀಟ್ ಮಾಡಿದ್ದಾರೆ. ಚುನಾವಣಾ ಸಮಯದಲ್ಲಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸೋಮವಾರ ಸರಣಿ ಟ್ವೀಟ್ ಮಾಡಿರುವ ಎಚ್. ಡಿ. ಕುಮಾರಸ್ವಾಮಿ, 'ಕೇಂದ್ರ ಸರಕಾರ ಮತ್ತೆ ಕನ್ನಡಿಗರಿಗೆ ಉಂಡೆನಾಮ ಹಾಕಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. #ಕನ್ನಡ_ನಿರ್ಲಕ್ಷ್ಯ_ಬಿಜೆಪಿಯ_ವರಸೆ ಎಂಬ ಹ್ಯಾಷ್ ಟ್ಯಾಗ್ ಬಳಕೆ ಮಾಡಿಕೊಂಡು ಟ್ವೀಟ್ ಮಾಡಿದ್ದಾರೆ.

ತಮ್ಮ ಟ್ವೀಟ್‌ನಲ್ಲಿ ಕುಮಾರಸ್ವಾಮಿ, 'ಕೇಂದ್ರ @BJP4India ಸರಕಾರ ಮತ್ತೆ ಕನ್ನಡಿಗರಿಗೆ ಉಂಡೆನಾಮ ಹಾಕಿದೆ. ಭಾನುವಾರ ನಡೆದ ಕೇಂದ್ರೀಯ ಮೀಸಲು ಪಡೆ (ಸಿಆರ್‌ಪಿಎಫ್) ನೇಮಕದ ಕಂಪ್ಯೂಟರ್ ಪರೀಕ್ಷೆಯಲ್ಲಿ ಕನ್ನಡಕ್ಕೆ ಅವಕಾಶವನ್ನೇ ಕೊಟ್ಟಿಲ್ಲ. ಹಿಂದಿ, ಇಂಗ್ಲಿಷ್ ಭಾಷೆಯಲ್ಲಷ್ಟೇ ಪರೀಕ್ಷೆಗೆ ಅವಕಾಶ ಕೊಡಲಾಗಿದೆ. ಇದು ಖಂಡನೀಯ' ಎಂದು ಹೇಳಿದ್ದಾರೆ.
ಮತ್ತೊಂದು ಟ್ವೀಟ್‌ನಲ್ಲಿ, 'ತಮ್ಮ ರಾಜ್ಯಗಳಲ್ಲಿ ಉದ್ಯೋಗ ಪಡೆಯಲು ಅನ್ಯಭಾಷೆಯಲ್ಲಿ ಪರೀಕ್ಷೆ ಬರೆಯಬೇಕಾದ ಕರ್ಮ ದಕ್ಷಿಣ ಭಾರತ ರಾಜ್ಯಗಳ ಜನರದ್ದು. ಕನ್ನಡಿಗರೂ ಸೇರಿ ದಕ್ಷಿಣದ ಎಲ್ಲ ಭಾಷಿಕರು ಈ ಬಗ್ಗೆ ವಿರೋಧ ಮಾಡುತ್ತಲೇ ಇದ್ದರೂ ಕೇಂದ್ರ ಸರಕಾರ ಹಿಂದಿ ಹೇರಿಕೆಯನ್ನು ಮುಂದುವರಿಸಿದೆ' ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.

'ಮುಲಾಜಿಲ್ಲದೆ ಸಿಆರ್‌ಪಿಎಫ್ ನೇಮಕಾತಿಯ ಮರು ಪರೀಕ್ಷೆ ನಡೆಸಬೇಕು ಹಾಗೂ ಕನ್ನಡ ಸೇರಿ ದೇಶದ ಎಲ್ಲ ಭಾಷೆಗಳಲ್ಲೂ ಬರೆಯಲು ಅಭ್ಯರ್ಥಿಗಳಿಗೆ ಅವಕಾಶ ನೀಡಬೇಕು. ಇಲ್ಲವಾದರೆ, ಈ ತಾರತಮ್ಯ ಹಾಗೂ ಹಿಂದಿ ಹೇರಿಕೆ ಇನ್ನೊಂದು ದೊಡ್ಡ ಹೋರಾಟಕ್ಕೆ ನಾಂದಿ ಆದೀತು' ಎಂದು ಕುಮಾರಸ್ವಾಮಿ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಸಿದ್ದರಾಮಯ್ಯ ಆಕ್ರೋಶ; ಕರ್ನಾಟಕದಲ್ಲಿ ನಂದಿನಿ vs ಅಮುಲ್ ಜಟಾಪಟಿ ನಡೆಯುತ್ತಿರುವಾಗಲೇ ಸಿಆರ್‌ಪಿಎಫ್ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡವಿಲ್ಲ ಎಂಬ ವಿಚಾರ ಮುಂದಿಟ್ಟುಕೊಂಡು ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿವೆ. ಕೇಂದ್ರ ಸರ್ಕಾರದ ಹಿಂದಿ ಹೇರಿಕೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿವೆ. ಮಾಜಿ ಮುಖ್ಯಮಂತ್ರಿ ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಹ ಈ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದಾರೆ. #ಭಾಷಾತಾರತಮ್ಯ #ಕೇಂದ್ರಸರ್ಕಾರಿಉದ್ಯೋಗ #ಕನ್ನಡಭಾಷೆಗೆಅವಕಾಶಬೇಕು ಎಂಬ ಹ್ಯಾಷ್ ಟ್ಯಾಗ್ ಬಳಕೆ ಮಾಡಿಕೊಂಡು ಸರಣಿ ಟ್ವೀಟ್ ಮಾಡಿದ್ದಾರೆ.
ಸಿದ್ದರಾಮಯ್ಯ ತಮ್ಮ ಟ್ವೀಟ್‌ನಲ್ಲಿ, 'ಕೇಂದ್ರ ಮೀಸಲು ಪೊಲೀಸ್ ಪಡೆಯ ನೇಮಕಾತಿ ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಬರೆಯುವುದನ್ನು ಕಡ್ಡಾಯಗೊಳಿಸಿರುವುದನ್ನು ತಕ್ಷಣ ಸಡಿಲಿಸಿ, ಕನ್ನಡ ಭಾಷೆಯಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟು ಈ ಅನ್ಯಾಯವನ್ನು ಸರಿಪಡಿಸಬೇಕೆಂದು ಪ್ರಧಾನಿ ಮೋದಿ ಅವರನ್ನು ಆಗ್ರಹಪಡಿಸುತ್ತಿದ್ದೇನೆ. ಭಾಷೆಯೇ ಜ್ಞಾನ ಅಲ್ಲ, ಅದು ಜ್ಞಾನದ ಸಂವಹನ ಸಾಧನ ಅಷ್ಟೆ. ಕನ್ನಡ ಭಾಷಾ ಮಾಧ್ಯಮದಲ್ಲಿ ಓದಿದ ನಮ್ಮ ಯುವಜನರು ಜ್ಞಾನಿಗಳಾಗಿದ್ದರೂ ಭಾಷೆಯ ಸಮಸ್ಯೆಯಿಂದಾಗಿ ಕೇಂದ್ರ ಸರ್ಕಾರ ನಡೆಸುವ ಪರೀಕ್ಷೆಯಲ್ಲಿ ಅನುತ್ತೀರ್ಣರಾಗುತ್ತಿದ್ದಾರೆ. ಇದು ಅನ್ಯಾಯ' ಎಂದು ಹೇಳಿದ್ದಾರೆ.
'ರಾಜ್ಯದ ಬಿಜೆಪಿ ಸರ್ಕಾರದ ಭ್ರಷ್ಟಾಚಾರದಿಂದಾಗಿ ರಾಜ್ಯದಲ್ಲಿ ಮತ್ತು ಕೇಂದ್ರದ ಬಿಜೆಪಿ ಸರ್ಕಾರದ ಭಾಷಾ ನೀತಿಯಿಂದಾಗಿ ಕೇಂದ್ರದಲ್ಲಿ ಕನ್ನಡಿಗ ಯುವಜನರು ಉದ್ಯೋಗ ವಂಚಿತರಾಗುತ್ತಿದ್ದಾರೆ. ಇದರಿಂದ ರಾಜ್ಯದಲ್ಲಿ ನಿರುದ್ಯೋಗದ ಪ್ರಮಾಣ ಹೆಚ್ಚಾಗುತ್ತಿದೆ, ಯುವಜನರ ಭವಿಷ್ಯ ಮಂಕಾಗುತ್ತಿದೆ. ಕೇಂದ್ರದ ಬಿಜೆಪಿ ಸರ್ಕಾರ ರಾಜ್ಯ ಭಾಷೆಗಳನ್ನು ಮೂಲೆಗೆ ತಳ್ಳಿ ಹಿಂದಿ ಭಾಷೆಯನ್ನು ನಮ್ಮ ತಲೆ ಮೇಲೆ ಹೇರುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಾ ಬಂದಿದೆ. ಉದ್ಯಮ, ಉದ್ಯೋಗ, ಶಿಕ್ಷಣ ಹೀಗೆ ಪ್ರತಿಯೊಂದು ಕ್ಷೇತ್ರದಲ್ಲಿಯೂ ಹಿಂದಿ ಭಾಷೆಯ ಯಜಮಾನಿಕೆ ಹೆಚ್ಚಾಗುತ್ತಿದೆ. ಇದನ್ನು ಸಹಿಸಲು ಸಾಧ್ಯ ಇಲ್ಲ' ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
'ಈಗಲೂ ಕಾಲ ಮಿಂಚಿಲ್ಲ ಪ್ರಧಾನಿ ನರೇಂದ್ರ ಮೋದಿ ಅವರು ತಕ್ಷಣ ಮಧ್ಯೆ ಪ್ರವೇಶಿಸಿ ಸಿಆರ್‌ಪಿಎಫ್ ಪರೀಕ್ಷೆಗಳನ್ನು ಕನ್ನಡವೂ ಸೇರಿದಂತೆ ರಾಜ್ಯ ಭಾಷೆಗಳಲ್ಲಿ ಬರೆಯಲು ಅನುಕೂಲ ಮಾಡಿಕೊಡಬೇಕು. ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮತ್ತು ಬಿಜೆಪಿ ಸಂಸದರು ಇದಕ್ಕಾಗಿ ಪ್ರಧಾನಿಗಳ ಮೇಲೆ ಒತ್ತಡ ಹೇರಬೇಕು' ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.












Click it and Unblock the Notifications