ಧಾರವಾಡ: ಮಾರ್ಚ್ 9ರಂದು ಉದ್ಯೋಗ ಮೇಳ, ವಿವರಗಳು
ಧಾರವಾಡ, ಮಾರ್ಚ್ 06: ಕರ್ನಾಟಕ ಸರ್ಕಾರದಿಂದ ಮೊದಲ ಬಾರಿಗೆ ಧಾರವಾಡದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ಮಾರ್ಚ್ 9ರ ಬೆಳಗ್ಗೆ 9ಗಂಟೆಗೆ ಕರ್ನಾಟಕ ಕಾಲೇಜು ಆವರಣದಲ್ಲಿ ಉದ್ಯೋಗ ಮೇಳ ನಡೆಯಲಿದೆ. ಜಿಲ್ಲಾಡಳಿತ ಉದ್ಯೋಗದಾತರಿಗೆ ಮತ್ತು ಉದ್ಯೋಗ ಆಕಾಂಕ್ಷಿಗಳಿಗೆ ಅನುಕೂಲವಾಗುವಂತೆ ವ್ಯವಸ್ಥೆಗಳನ್ನು ಮಾಡುತ್ತಿದೆ.
ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಹಾಗೂ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ಹಾಗೂ ಜಿಲ್ಲಾ ಕೌಶಲ್ಯ ಮಿಷನ್ ಸಂಯುಕ್ತಾಶ್ರಯದಲ್ಲಿ ಕೌಶಲ್ಯ ರೋಜ್‍ಗಾರ್ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಉದ್ಯೋಗ ಮೇಳ ಕರ್ನಾಟಕ ಕಾಲೇಜು ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಆದರೆ ಉದ್ಯೋಗಮೇಳದ ಉದ್ಘಾಟನಾ ಸಮಾರಂಭ ಡಾ. ಅಣ್ಣಾಜಿರಾವ ಶಿರೂರು (ಸೃಜನಾ) ರಂಗಮಂದಿರದಲ್ಲಿ ಆಯೋಜಿಸಲಾಗಿದೆ. ಕಾರ್ಮಿಕ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಉದ್ಯೋಗ ಮೇಳ ಉದ್ಘಾಟಿಸಲಿದ್ದಾರೆ. ಧಾರವಾಡ ಸಂಸದ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಉದ್ಯೋಗ ಮೇಳದ ಮಾಹಿತಿ: ಧಾರವಾಡ ಜಿಲ್ಲೆಯಲ್ಲಿ ಮೊದಲ ಬಾರಿಗೆ ಸರ್ಕಾರದಿಂದ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಆಯೋಜನೆ ಮಾಡಲಾಗುತ್ತಿದೆ. "ಅಧಿಕಾರಿಗಳು ಉದ್ಯೋಗದಾತರಿಗೆ ಮತ್ತು ಉದ್ಯೋಗ ಆಕಾಂಕ್ಷಿಗಳಿಗೆ ಅನುಕೂಲವಾಗುವಂತೆ ವ್ಯವಸ್ಥಿತವಾಗಿ ಉದ್ಯೋಗ ಮೇಳ ಸಂಘಟಿಸಬೇಕು" ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ನಿರ್ದೇಶನ ನೀಡಿದ್ದಾರೆ.
"ಅರ್ಹತೆ ಇರುವ ಪ್ರತಿಯೊಬ್ಬ ವ್ಯಕ್ತಿಗೂ ಉದ್ಯೋಗ ದೊರೆಯಬೇಕು ಉದ್ಯೋಗ ಆಕಾಂಕ್ಷಿಗಳಿಗೆ ಅನುಕೂಲವಾಗಲು ಸರ್ಕಾರದಿಂದಲೇ ಉದ್ಯೋಗ ಮೇಳ ಆಯೋಜಿಸಿ, ಖಾಸಗಿ ಕೈಗಾರಿಕೆಗಳಲ್ಲಿ ಉದ್ಯೋಗ ಕಲ್ಪಿಸಲು ಈ ಉದ್ಯೋಗ ಮೇಳ ಸಂಘಟಿಸಲಾಗುತ್ತಿದೆ" ಎಂದು ಸಚಿವರು ಹೇಳಿದ್ದಾರೆ.
ಸಚಿವ ಸಂತೋಷ್ ಲಾಡ್, "ಉದ್ಯೋಗ ಮೇಳವನ್ನು ವ್ಯವಸ್ಥಿತವಾಗಿ ಸಂಘಟಿಸಬೇಕು. ಉದ್ಯೋಗಾಂಕ್ಷಿಗಳ ಮಾಹಿತಿ, ಬೇಡಿಕೆ ಸಂಗ್ರಹಿಸಿ, ಮ್ಯಾಪಿಂಗ್ ಮಾಡಬೇಕು ಅವಳಿ ನಗರದ ಕೈಗಾರಿಕೋದ್ಯಮಿಗಳಿಂದ ಕಾರ್ಮಿಕರ ಬೇಡಿಕೆ ಪಡೆಯಬೇಕು. ಅದಕ್ಕೆ ಅನುಗುಣವಾಗಿ ಕಾರ್ಯಕ್ರಮ ರೂಪಿಸಬೇಕು" ಎಂದು ಸೂಚನೆ ನೀಡಿದ್ದಾರೆ.
"ಕರ್ನಾಟಕ ಸರ್ಕಾರ ಖಾಸಗಿ ವಲಯದ ಉದ್ಯೋಗಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲು ಮಾಲೀಕರನ್ನು, ಉದ್ಯೋಗದಾತರನ್ನು ಉತ್ತೇಜಿಸುವ ದೃಷ್ಟಿಯಿಂದ ಹಾಗೂ ಈ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಖಾಸಗಿ ವಲಯದಲ್ಲಿ ಉದ್ಯೋಗಾವಕಾಶ ಪಡೆಯಲು ಅನುಕೂಲವಾಗುವಂತೆ ಆಶಾದೀಪ ಎಂಬ ನೂತನ ಯೋಜನೆಯನ್ನು ರೂಪಿಸಿದೆ" ಎಂದು ಸಚಿವರು ಹೇಳಿದ್ದಾರೆ.
ಮಾರ್ಚ್ 9ರಂದು ಉದ್ಯೋಗ ಮೇಳಕ್ಕೆ ಆಗಮಿಸುವ ಪ್ರತಿಯೊಬ್ಬರಿಗೂ ಕುಡಿಯುವ ನೀರು, ಊಟ, ಶೌಚಾಲಯ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳು ಸಿಗಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗ ಆಕಾಂಕ್ಷಿಗಳು ನೋಂದಣಿ ಮಾಡಿಕೊಂಡರೆ ಎರಡು ದಿನಗಳವರೆಗೆ ಉದ್ಯೋಗ ಮೇಳ ಆಯೋಜಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸಚಿವ ಸಂತೋಷ್ ಲಾಡ್ ಸೂಚನೆ ನೀಡಿದ್ದಾರೆ.












Click it and Unblock the Notifications