ಧಾರವಾಡದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ
ಧಾರವಾಡ, ಫೆಬ್ರವರಿ 19: ಧಾರವಾಡದಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿಯೊಂದಿದೆ. ಜಿಲ್ಲೆಯಲ್ಲಿ ಶೀಘ್ರದಲ್ಲಿಯೇ ಧಾರವಾಡ ಜಿಲ್ಲಾಮಟ್ಟದ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗುತ್ತದೆ. ವಿವಿಧ ಕಾಲೇಜು ಕ್ಯಾಂಪಸ್‌ಗಳಿಂದ ಉದ್ಯೋಗ ಮೇಳ ನಡೆಯುವ ಸ್ಥಳಕ್ಕೆ ವಿದ್ಯಾರ್ಥಿಗಳು ಆಗಮಿಸಲು ಬಸ್ ವ್ಯವಸ್ಥೆ ಮಾಡಲು ಸಹ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಉದ್ಯೋಗ ಮೇಳದ ದಿನಾಂಕ ಇನ್ನು ನಿಗದಿಯಾಗಿಲ್ಲ.
ಧಾರವಾಡ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಈ ಕುರಿತು ಮಾತನಾಡಿದ್ದಾರೆ. ಜಿಲ್ಲಾ ಪಂಚಾಯತಿ ಸಭಾಭವನದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳ ಹಾಗೂ ಕೈಗಾರಿಕೆ ಸಂಘಗಳ ಪ್ರತಿನಿಧಿಗಳೊಂದಿಗೆ ಅವರು ಸಭೆ ನಡೆಸಿದರು.

"ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ ಸಹಯೋಗದಲ್ಲಿ ಧಾರವಾಡ ಜಿಲ್ಲಾಮಟ್ಟದ ಉದ್ಯೋಗ ಮೇಳವನ್ನು ಶೀಘ್ರದಲ್ಲಿ ಆಯೋಜಿಸಲಾಗುತ್ತಿದೆ. ಉದ್ಯೋಗ ಆಕಾಂಕ್ಷಿಗಳು ಮತ್ತು ಉದ್ಯೋಗದಾತರಾದ ಉದ್ಯಮಿಗಳು ಈ ಅವಕಾಶವನ್ನು ಸದುಪಯೋಗ ಪಡೆಸಿಕೊಂಡು, ಹೆಚ್ಚು ಜನರಿಗೆ ಉದ್ಯೋಗ ಕಲ್ಪಿಸಬೇಕು" ಎಂದು ಕರೆ ನೀಡಿದರು.
"ಧಾರವಾಡ ಜಿಲ್ಲಾ ಉದ್ಯೋಗ ಮೇಳದಲ್ಲಿ ಜಿಲ್ಲೆಯ ಎಲ್ಲಾ ಪದವಿ, ಐಟಿಐ ಕಾಲೇಜುಗಳ ಪದವೀಧರರ ವಿದ್ಯಾರ್ಥಿಗಳು ಪಾಲ್ಗೊಳ್ಳುವಂತೆ ಮಾಹಿತಿ ನೀಡಲು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಮತ್ತು ಆಯಾ ಕಾಲೇಜಿನ ಕ್ಯಾಂಪಸ್‍ನಿಂದ ಉದ್ಯೋಗ ಮೇಳದ ಸ್ಥಳಕ್ಕೆ ಆಗಮಿಸಲು ಬಸ್ ವ್ಯವಸ್ಥೆ ಮಾಡಲು ಕ್ರಮ ವಹಿಸಲಾಗುತ್ತದೆ" ಎಂದರು.
"ಉದ್ಯೋಗ ಮೇಳದಲ್ಲಿ ಸುಮಾರು 8 ರಿಂದ 10 ಸಾವಿರ ಉದ್ಯೋಗ ಆಕಾಂಕ್ಷಿಗಳು ಭಾಗವಹಿಸುವ ನಿರೀಕ್ಷೆ ಇದೆ ಮತ್ತು ಧಾರವಾಡ ಜಿಲ್ಲೆಯ ಬೇಲೂರು, ತಾರಿಹಾಳ ಮತ್ತು ಸತ್ತೂರ ಕೈಗಾರಿಕಾ ಪ್ರದೇಶಗಳಲ್ಲಿನ ಕೈಗಾರಿಕೋದ್ಯಮಿಗಳು ಸಹ ಭಾಗವಹಿಸಲಿದ್ದಾರೆ" ಎಂದು ಹೇಳಿದರು.
ಬೇಲೂರು ಕೈಗಾರಿಕಾ ಪ್ರದೇಶದಲ್ಲಿ ಈಗಾಗಲೇ ಉದ್ಯೋಗ ಮೇಳದ ಮಾಹಿತಿ ನೀಡಲಾಗಿದೆ ಮತ್ತು ಉದ್ಯೋಗಿಗಳ ಬೇಡಿಕೆ ಪಟ್ಟಿಯನ್ನು ಸಲ್ಲಿಸಲು ಸೂಚಿಸಲಾಗಿದೆ. ಉದ್ಯೋಗ ಬಯಸಿ ಬರುವ ಅನೇಕ ಆಕಾಂಕ್ಷಿಗಳು ಅರ್ಧಕ್ಕೆ ಕೆಲಸ ಬಿಡುತ್ತಾರೆ. ತರಬೇತಿ ನಂತರ ಕೆಲವು ಭಾರೀ ಬೇರೆ ಕೈಗಾರಿಕೆಗಳಿಗೆ ಹೋಗುತ್ತಾರೆ. ಇದರಿಂದ ಆಯ್ಕೆ ಮಾಡಿಕೊಂಡ ಕೈಗಾರಿಕೆಗಳಿಗೆ ಸ್ವಲ್ಪಮಟ್ಟಿಗೆ ತೊಂದರೆ ಆಗುತ್ತಿದೆ. ಈ ಕುರಿತು ಮೇಳದಲ್ಲಿ ಗಮನ ಹರಿಸಬೇಕೆಂದು ಎಂದು ಸಭೆಯಲ್ಲಿ ಚರ್ಚಿಸಲಾಯಿತು.
ಯುವನಿಧಿ ಫಲಾನುಭವಿಗಳು: ಭುವನೇಶ ಪಾಟೀಲ ಮಾತನಾಡಿ, "ರಾಜ್ಯ ಸರ್ಕಾರ ಯುವನಿಧಿ ಯೋಜನೆಯನ್ನು ಜಾರಿಗೊಳಿಸಿದ್ದು, ಧಾರವಾಡ ಜಿಲ್ಲೆಯ ಸುಮಾರು ಆರು ಸಾವಿರಕ್ಕೂ ಹೆಚ್ಚು ಯುವನಿಧಿ ಫಲಾನುಭವಿಗಳಿದ್ದಾರೆ. ಇವರಿಗೆ ಅಗತ್ಯ ತರಬೇತಿ ನೀಡುವ ಕಾರ್ಯದಲ್ಲಿ ಕೈಗಾರಿಕೆಗಳು ಕೈ ಜೋಡಿಸಬೇಕು. ಧಾರವಾಡ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಹೆರಳವಾದ ಮಾನವ ಸಂಪನ್ಮೂಲವಿದೆ. ಇವರಿಗೆ ಅಗತ್ಯ ಕೌಶಲ್ಯ ತರಬೇತಿಯನ್ನು ನೀಡುವ ಮೂಲಕ ಸದುಪಯೋಗ ಮಾಡಿಕೊಳ್ಳಬೇಕು" ಎಂದರು.
ಹುಬ್ಬಳ್ಳಿ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಎಸ್. ಪಿ. ಸಂಶಿಮಠ ಮಾತನಾಡಿ, "ಈ ಉದ್ಯೋಗ ಮೇಳದಲ್ಲಿ 60ಕ್ಕೂ ಹೆಚ್ಚು ಕೈಗಾರಿಕೋದ್ಯಮಿಗಳು ಭಾಗವಹಿಸಲಿದ್ದಾರೆ. ಆಯಾ ಕೈಗಾರಿಕೆಗಳಿಗೆ ಅಗತ್ಯವಿರುವ ಉದ್ಯೋಗಿಗಳ ಸಂಖ್ಯೆಯನ್ನು ಮುಂಚಿತವಾಗಿ ನೀಡಲಿದ್ದಾರೆ. ಅಕೌಶಲ್ಯವಿರುವ ಉದ್ಯೋಗ ಆಕಾಂಕ್ಷಿಗಳನ್ನು ಸಹ ಆಯ್ಕೆ ಮಾಡಿಕೊಂಡು ಕೆಲವು ಕೈಗಾರಿಕೆಗಳು ತರಬೇತಿಯನ್ನು ನೀಡುತ್ತಿವೆ" ಎಂದು ಹೇಳಿದರು.












Click it and Unblock the Notifications