Karnataka Government Jobs: ಸದ್ಯಕ್ಕೆ ಕರ್ನಾಟಕದಲ್ಲಿ ಸರ್ಕಾರಿ ಕೆಲಸ ಸಿಗಲ್ಲ
ಬೆಂಗಳೂರು, ಮಾರ್ಚ್ 26: ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಕಾಯುವ ಅಭ್ಯರ್ಥಿಗಳಿಗೆ ನಿರಾಸೆ ಮೂಡಿಸುವ ಸುದ್ದಿಯೊಂದಿದೆ. ರಾಜ್ಯ ಸರ್ಕಾರದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಖಾಲಿ ಇರುವ ವಿವಿಧ ಇಲಾಖೆಗಳ ಹುದ್ದೆಗಳು 2,76,386. ಆದರೆ ಸರ್ಕಾರ ಸದ್ಯಕ್ಕೆ ಯಾವುದೇ ಇಲಾಖೆಯ ಹೊಸ ನೇಮಕಾತಿಯನ್ನು ಕೈಗೊಳ್ಳುವುದಿಲ್ಲ. ಇಲಾಖೆಗಳ ವಿವಿಧ ಹುದ್ದೆಗಳ ನೇಮಕಾತಿ ಯಾವಾಗ ಆರಂಭವಾಗಲಿದೆ ಎಂಬ ಬಗ್ಗೆ ಸರ್ಕಾರ ಖಚಿತ ಮಾಹಿತಿಯನ್ನೂ ನೀಡುತ್ತಿಲ್ಲ.
ಕರ್ನಾಟಕದ ಕಾಂಗ್ರೆಸ್ ಸರ್ಕಾರ ಪರಿಶಿಷ್ಟ ಜಾತಿಯವರಿಗೆ ಒಳ ಮೀಸಲಾತಿ ಕಲ್ಪಿಸುವ ಕುರಿತು ತೀರ್ಮಾನ ಆಗುವ ತನಕ ಯಾವುದೇ ಹೊಸ ನೇಮಕಾತಿ, ಬಡ್ತಿಯನ್ನು ಕೈಗೊಳ್ಳದಂತೆ ಸೂಚನೆ ನೀಡಿದೆ. ಈ ಹಿಂದೆಯೂ ಯಾವುದೇ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಿದಂತೆ ಸಚಿವ ಸಂಪುಟ ಸಭೆಯ ತೀರ್ಮಾನದಂತೆ ವಿವಿಧ ಇಲಾಖೆಗಳಿಗೆ ಸೂಚನೆಯನ್ನು ನೀಡಲಾಗಿತ್ತು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್, ಸಿದ್ದರಾಮಯ್ಯ ಸಂಪುಟದ ವಿವಿಧ ಸಚಿವರ ಜೊತೆ ಸಭೆ ನಡೆಯಿತು. ಸಭೆಯಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್. ಕೆ. ಅತೀಕ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಹ ಪಾಲ್ಗೊಂಡಿದ್ದರು. ಈ ಸಭೆಯಲ್ಲಿಯೂ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲು ಅನುಮತಿ ಸಿಕ್ಕಿಲ್ಲ.
ಸದ್ಯಕ್ಕಿಲ್ಲ ಹೊಸ ನೇಮಕಾತಿ: ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಯವರಿಗೆ ಒಳ ಮೀಸಲಾತಿ ಜಾರಿ ಕುರಿತು ವರದಿ ನೀಡಲು ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಹೆಚ್. ಎನ್. ನಾಗಮೋಹನ್ ದಾಸ್ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗವನ್ನು ರಚನೆ ಮಾಡಿದೆ. ಈ ಆಯೋಗ ಬುಧವಾರ ಸರ್ಕಾರಕ್ಕೆ ಮಧ್ಯಂತರ ವರದಿಯನ್ನು ಸಲ್ಲಿಕೆ ಮಾಡುವ ನಿರೀಕ್ಷೆ ಇದೆ.
ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬುಧವಾರ ಮಧ್ಯಂತರ ವರದಿ, ಒಂದು ತಿಂಗಳಿನಲ್ಲಿ ಅಂತಿಮ ವರದಿ ಸಲ್ಲಿಕೆ ಮಾಡುವಂತೆ ಸೂಚನೆ ನೀಡಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಅಂತಿಮ ವರದಿಯ ಕುರಿತು ತೀರ್ಮಾನ ಕೈಗೊಂಡು, ಒಳಮೀಸಲಾತಿ ಕುರಿತು ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಬಳಿಕ ವಿವಿಧ ಇಲಾಖೆಗಳ ನೇಮಕಾತಿ ನಡೆಯಲಿದೆ.
ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಒಳ ಮೀಸಲಾತಿ ಜಾರಿಯಾಗುವ ತನಕ ಸರ್ಕಾರದ ಇಲಾಖೆ, ನಿಗಮ/ ಮಂಡಳಿ ಹಾಗೂ ಸರ್ಕಾರಿ ಸಂಸ್ಥೆಗಳಲ್ಲಿ ನೇಮಕಾತಿ, ಬಡ್ತಿ ಪ್ರಕ್ರಿಯೆ ನಡೆಸದಂತೆ ತೀರ್ಮಾನಿಸಲಾಗಿದೆ. ಆದ್ದರಿಂದ ಮುಂದಿನ ಎರಡು-ಮೂರು ತಿಂಗಳು ಕರ್ನಾಟಕ ಸರ್ಕಾರದ ಯಾವುದೇ ಹೊಸ ನೇಮಕಾತಿ ಪ್ರಕ್ರಿಯೆ ನಡೆಯುವುದಿಲ್ಲ.
ಈಗ ನೇಮಕಾತಿ ಪ್ರಕ್ರಿಯೆ ನಡೆಸಿದರೆ ಒಳ ಮೀಸಲಾತಿ ಜಾರಿ ಬಳಿಕ ಸಮಸ್ಯೆ ಉಂಟಾಗಲಿದೆ. ಯಾವುದೇ ಒಂದು ಸ್ಥಾನಕ್ಕೆ ನೇಮಕ ಮಾಡಿದರೆ ಅಥವ ಬಡ್ತಿ ನೀಡಿದರೆ ಅಲ್ಲಿಗೆ ಒಳ ಮೀಸಲಾತಿ ಅನ್ವಯ ಅರ್ಹತೆ ಪಡೆದ ಪರಿಶಿಷ್ಟ ಜಾತಿ ಅಥವ ಪಂಗಡದವರನ್ನು ನೇಮಕ ಮಾಡಬೇಕಾದ ಸಂದರ್ಭ ಎದುರಾದರೆ ಸಮಸ್ಯೆ ಆಗಲಿದೆ. ಆದ್ದರಿಂದ ಸದ್ಯಕ್ಕೆ ಹೊಸ ನೇಮಕಾತಿಗಳಿಗೆ ತಡೆ ನೀಡಲಾಗಿದೆ.
ಸಚಿವ ಸಂಪುಟ ಸಭೆಯ ಬಳಿಕ ಕರ್ನಾಟಕ ಸರ್ಕಾರ ಸುತ್ತೋಲೆಯೊಂದನ್ನು ಹೊರಡಿಸಿತ್ತು. ದಿನಾಂಕ 28.10.2024ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದಂತೆ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೂ ಹೊರಡಿಸಬಾರದೆಂದು ಸೂಚಿಸಿತ್ತು.
ಈ ದಿನಾಂಕದ ಪೂರ್ವದಲ್ಲಿ ನೇರ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದ್ದಲ್ಲಿ ಅಥವಾ ಆಯ್ಕೆ ಪ್ರಕ್ರಿಯ ಪ್ರಾರಂಭಗೊಂಡಿದ್ದಲ್ಲಿ ಅಂತಹ ನೇಮಕಾತಿಗಳನ್ನು ಹೊರಡಿಸಲಾಗಿದ್ದ ಅಧಿಸೂಚನೆಯನ್ವಯ ಪೂರ್ಣಗೊಳಿಸಬಹುದಾಗಿದೆ. ನೇಮಕಾತಿ ಪ್ರಾಧಿಕಾರಗಳು ಇದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು ಎಂದು ನಿರ್ದೇಶನ ನೀಡಲಾಗಿತ್ತು.
ಕರ್ನಾಟಕ ಸರ್ಕಾರದ ಮಾಹಿತಿ ಅನ್ವಯ ರಾಜ್ಯದಲ್ಲಿ 2 ಲಕ್ಷಕ್ಕೂ ಅಧಿಕ ಸರ್ಕಾರಿ ಹುದ್ದೆಗಳು ಖಾಲಿ ಇದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಖಾಲಿ ಇರುವ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಬೇಕು ಎಂದು ಸರ್ಕಾರಕ್ಕೆ ಬೇಡಿಕೆ ಈಡುತ್ತಿದೆ. ರಾಜ್ಯದ ಯುವಕರು ಸರ್ಕಾರಿ ಉದ್ಯೋಗಕ್ಕಾಗಿ ಕಾದು ಕುಳಿತಿದ್ದಾರೆ.
ಕರ್ನಾಟಕ ಲೋಕಸೇವಾ ಆಯೋಗ, ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ವಿವಿಧ ಹುದ್ದೆಗಳ ನೇಮಕಾತಿ ಸಂಬಂಧ ಪ್ರಸ್ತಾವನೆಗಳು ಸಲ್ಲಿಕೆಯಾಗಿವೆ. ಆದರೆ ಅಧಿಸೂಚನೆ ಹೊರಡಿಸಿ ಮುಂದಿನ ಪ್ರಕ್ರಿಯೆಯನ್ನು ನಡೆಸಲು ಸರ್ಕಾರದ ಸುತ್ತೋಲೆ ಅಡ್ಡಿಯಾಗಿದೆ. ಒಳ ಮೀಸಲಾತಿ ಕುರಿತು ಸರ್ಕಾರ ಯಾವಾಗ ತೀರ್ಮಾನ ಕೈಗೊಳ್ಳಲಿದೆ. ಹೊಸ ನೇಮಕಾತಿ ಯಾವಾಗ ಆರಂಭ? ಎಂದು ಅಭ್ಯರ್ಥಿಗಳು ಕಾದು ಕುಳಿತಿದ್ದಾರೆ.
ಕರ್ನಾಟಕ ಸರ್ಕಾರ ಪರಿಶಿಷ್ಟ ಜಾತಿಯವರಿಗೆ ಒಳ ಮೀಸಲಾತಿ ಕಲ್ಪಿಸುವುದಾಗಿ ಘೋಷಣೆ ಮಾಡಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿಯೂ ಈ ಕುರಿತು ಚರ್ಚಿಸಲಾಗಿತ್ತು. ಅಂತಿಮವಾಗಿ ಸುಪ್ರೀಂಕೋರ್ಟ್‌ನ ದಿನಾಂಕ 01.08.2024ರ ಆದೇಶದಂತೆ ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿಯನ್ನು ಕಲ್ಪಿಸಲು ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯ ವಿವಿಧ ಉಪಜಾತಿಗಳಿಗೆ ಸೇರಿದವರ ಪ್ರಾತಿನಿಧ್ಯತೆ ಕುರಿತು Empirical Data ಪಡೆದು ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಬಗ್ಗೆ ಸೂಕ್ತ ಶಿಫಾರಸಿನೊಂದಿಗೆ ವರದಿ ಸಲ್ಲಿಸಲು ಆಯೋಗವನ್ನು ರಚನೆ ಮಾಡಿದೆ.
ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಹೆಚ್. ಎನ್. ನಾಗಮೋಹನ್ ದಾಸ್ ಅಧ್ಯಕ್ಷತೆಯ ಏಕ ಸದಸ್ಯ ಆಯೋಗ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯ ವಿವಿಧ ಉಪಜಾತಿಗಳಿಗೆ ಸೇರಿದವರ ಪ್ರಾತಿನಿಧ್ಯತೆ ಕುರಿತು Empirical Data ಪಡೆದು ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಬಗ್ಗೆ ಸೂಕ್ತ ಶಿಫಾರಸ್ಸಿಗಳೊಂದಿಗೆ ವರದಿ ಸಲ್ಲಿಸಬೇಕಿದೆ.
ಮೊದಲು ಈ ಆಯೋಗಕ್ಕೆ ಎರಡು ತಿಂಗಳಿನಲ್ಲಿ ವರದಿ ಸಲ್ಲಿಕೆ ಸೂಚನೆ ನೀಡಲಾಗಿತ್ತು. ಆದರೆ ಇನ್ನು ಸಹ ಮಧ್ಯಂತರ ವರದಿ ಸಲ್ಲಿಕೆಯಾಗಿಲ್ಲ. ಬುಧವಾರ ಮಧ್ಯಂತರ ವರದಿ, ಬಳಿಕ ಒಂದು ತಿಂಗಳಿನಲ್ಲಿ ಅಂತಿಮ ವರದಿ ಸಲ್ಲಿಕೆ ಮಾಡಲಾಗುತ್ತದೆ ಎಂಬ ಮಾಹಿತಿ ಇದೆ. ಬಳಿಕ ಸರ್ಕಾರ ಒಳ ಮೀಸಲಾತಿ ಕುರಿತು ತನ್ನ ತೀರ್ಮಾನವನ್ನು ಕೈಗೊಳ್ಳಲಿದೆ.
ಡಿಸೆಂಬರ್‌ನಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಕರ್ನಾಟಕ ಸರ್ಕಾರ ನೀಡಿದ ಮಾಹಿತಿಯಂತೆ ಸರ್ಕಾರದ ಒಟ್ಟು ಇಲಾಖೆಗಳು 43. ಇವುಗಳಲ್ಲಿ ಎ ವರ್ಗದ 16017, ಬಿ ವರ್ಗದ 16734, ಸಿ ವರ್ಗದ 166021, ಡಿ ವರ್ಗದ 77,614 ಸೇರಿ ಒಟ್ಟು ಖಾಲಿ ಇರುವ ಹುದ್ದೆಗಳು 276386. ಇವುಗಳ ಭರ್ತಿಗೆ ಸರ್ಕಾರ ಯಾವಾಗ ತ್ವರಿತ ಕ್ರಮ ಕೈಗೊಳ್ಳಲಿದೆ ಎಂದು ಕಾದು ನೋಡಬೇಕಿದೆ.












Click it and Unblock the Notifications