ಮೇ 18ರಂದು ಬಳ್ಳಾರಿ, ಬೆಂಗಳೂರಿನಲ್ಲಿ ಉದ್ಯೋಗ ಮೇಳ
ಬೆಂಗಳೂರು, ಮೇ 17; ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ. ಮೇ 18ರ ಗುರುವಾರ ಬಳ್ಳಾರಿ ಮತ್ತು ಬೆಂಗಳೂರಿನಲ್ಲಿ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಆಸಕ್ತ ಯುವಕ/ ಯುವತಿಯರು ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.
ಬಳ್ಳಾರಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನಡೆಯಲಿದೆ. ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿ, ಕೆ. ಜಿ. ರಸ್ತೆ ಬೆಂಗಳೂರು ಇಲ್ಲಿ ಉದ್ಯೋಗ ಮೇಳ ನಡೆಯಲಿದೆ ಎಂದು ಪ್ರಕಟಣೆ ಹೇಳಿದೆ.

ಬಳ್ಳಾರಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಗುರುವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 3ರ ತನಕ ತಹಶೀಲ್ದಾರ್ ಕಚೇರಿ ಆವರಣದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಆಯೋಜನೆ ಮಾಡಿದೆ. ಮೇಳದಲ್ಲಿ 6ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುತ್ತಿವೆ.
ವಿವಿಧ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತರು ತಮ್ಮ ಆಧಾರ್ ಕಾರ್ಡ್ ಪ್ರತಿ ಮತ್ತು ಸ್ವ-ವಿವರ ಪ್ರತಿಗಳೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಯಾವುದೇ ಶುಲ್ಕ ಪಾವತಿಸಬೇಕಿಲ್ಲ.

ವಿದ್ಯಾರ್ಹತೆ ವಿವರ; ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿ ಮತ್ತು ಡಿ.ಇಡಿ, ಬಿ.ಇಡಿ ವಿದ್ಯಾರ್ಹತೆ ಹೊಂದಿರಬೇಕು.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಯಮ ಕಚೇರಿಯನ್ನು ಸಂಪರ್ಕಿಸಬಹುದು ಅಥವಾ 8073365184, 9019692898 ಹಾಗೂ 7892971984 ಸಂಖ್ಯೆಗೆ ಕರೆ ಮಾಡಬಹುದಾಗಿದೆ.
ಬೆಂಗಳೂರಿನಲ್ಲಿ ಉದ್ಯೋಗ ಮೇಳ; ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ವತಿಯಿಂದ ಮೇ 18ರ ಗುರುವಾರ ಬೆಂಗಳೂರಿನಲ್ಲಿ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ವಿವಿಧ ಕಂಪನಿ/ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಬೆಳಗ್ಗೆ 10.30 ರಿಂದ ಸಂಜೆ 4 ಗಂಟೆಯವರೆಗೆ ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿ, ಏಷ್ಯಾಟಿಕ ಕಟ್ಟಡ, (ಜನತಾ ಬಜಾರ್) ಕೆ. ಜಿ. ರಸ್ತೆ, ಬೆಂಗಳೂರು ಇಲ್ಲಿ ಉದ್ಯೋಗ ಮೇಳ ನಡೆಯಲಿದೆ.
ಈ ಉದ್ಯೋಗ ಮೇಳದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ 35 ವರ್ಷಗಳ ವಯೋಮಿತಿಯುಳ್ಳ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು. ಉದ್ಯೋಗ ಮೇಳಕ್ಕೆ ಬರುವಾಗ ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಆಗಮಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿ, ಏಷ್ಯಾಟಿಕ ಕಟ್ಟಡ, (ಜನತಾ ಬಜಾರ್) ಕೆ. ಜಿ. ರಸ್ತೆ, ಬೆಂಗಳೂರು ಇವರನ್ನು ಸಂಪರ್ಕಿಸಬಹುದು ಅಥವಾ ದೂರವಾಣಿ ಸಂಖ್ಯೆ 080-22374582/ 8310960536 ಗೆ ಕರೆ ಮಾಡಬಹುದು.












Click it and Unblock the Notifications