ದಾವಣಗೆರೆ; ಸೆ. 21ರ ಗುರುವಾರ ಉದ್ಯೋಗ ಮೇಳ
ದಾವಣಗೆರೆ, ಸೆಪ್ಟೆಂಬರ್ 20; ದಾವಣಗೆರೆಯಲ್ಲಿ ಸೆಪ್ಟೆಂಬರ್ 21ರ ಗುರುವಾರ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಕೆಲಸ ಹುಡುಕುತ್ತಿರುವ ಯುವಕ/ ಯುವತಿಯರು ಅಗತ್ಯ ದಾಖಲೆಗಳ ಜೊತೆ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದು.
ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರದ ವತಿಯಿಂದ ಗುರುವಾರ ಬೆಳಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ (ಕೊಠಡಿ ಸಂಖ್ಯೆ 51)ರಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಈ ಉದ್ಯೋಗ ಮೇಳದಲ್ಲಿ ಹಲವು ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ತಮ್ಮಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿವೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ. ಡಿ ತಿಳಿಸಿದ್ದಾರೆ.
ವಿದ್ಯಾರ್ಹತೆ; ಸೆಪ್ಟೆಂಬರ್ 21ರಂದು ನಡೆಯುವ ಉದ್ಯೋಗ ಮೇಳದಲ್ಲಿ ವಿವಿಧ ಹುದ್ದೆಗಳಿಗೆ ಎಸ್. ಎಸ್. ಎಲ್. ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಹಾಗೂ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಹ, ಆಸಕ್ತ ಅಭ್ಯರ್ಥಿಗಳು ಕನಿಷ್ಠ 5 ಸೆಟ್ ರೆಸ್ಯೂಮ್ ಮತ್ತು ಆಧಾರ್ ಕಾರ್ಡ್ ಪ್ರತಿಯ ಜೊತೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ 6361550016, 08192-259446 ಸಂಖ್ಯೆಗೆ ಕರೆ ಮಾಡಬಹುದು.
ಉದ್ಯೋಗ ನೋಂದಣಿ ಶಿಬಿರ; ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಛೇರಿ, ಬೆಂಗಳೂರು ವತಿಯಿಂದ ಸೆಪ್ಟೆಂಬರ್ 21ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯ ತನಕ ಸಂಚಾರಿ ಉದ್ಯೋಗ ನೋಂದಣಿ ಶಿಬಿರವನ್ನು ಜಿಲ್ಲಾ ಕೌಶಲ್ಯಾಭಿವೃದ್ಧಿ ಕಛೇರಿ, ಕೊಠಡಿ ಸಂಖ್ಯೆ 132, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು ಇಲ್ಲಿ ಆಯೋಜಿಸಲಾಗಿದೆ.
ಎಸ್. ಎಸ್. ಎಲ್. ಸಿ, ಪಿಯುಸಿ, ಬಿಎ, ಬಿಕಾಂ, ಬಿಎಸ್ಸಿ, ಬಿಎಡ್, ಡಿಎಡ್, ಬಿಬಿಎ, ಬಿಸಿಎ, ಸೀನಿಯರ್ ಟೈಪಿಂಗ್ ಹಾಗೂ ಶೀಘ್ರಲಿಪಿಗಾರರ ವಿದ್ಯಾರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ದಾಖಲಾತಿಗಳ ಮೂಲ ಪ್ರತಿ ಹಾಗೂ ನಕಲು, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್‌ನ ಪ್ರತಿಗಳು ಹಾಗೂ ಎರಡು ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಶಿಬಿರ ನಡೆಯುವ ಸ್ಥಳದಲ್ಲಿ ಹಾಜರಿದ್ದು, ನೋಂದಣಿ ಮಾಡಿಸಿಕೊಳ್ಳಬಹುದಾಗಿದೆ.
ಉದ್ಯೋಗ ನೋಂದಣಿ ಮಾಡಬಯಸುವ ಅಭ್ಯರ್ಥಿಗಳು ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಿವಾಸಿಗಳಾಗಿರಬೇಕು. ಹೆಚ್ಚಿನ ಮಾಹಿತಿಗಾಗಿ ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಛೇರಿ, ಏಷ್ಯಾಟಿಕ್ ಕಟ್ಟಡ, 2ನೇ ಮಹಡಿ, ಕೆಂಪೇಗೌಡ ರಸ್ತೆ, ಬೆಂಗಳೂರು-09 ಇಲ್ಲಿಗೆ ಸಂಪರ್ಕಿಸಬಹುದು ಅಥವಾ 080-29560045, 9448220647 ಸಂಖ್ಯೆಗೆ ಕರೆ ಮಾಡಬಹುದು.
ಹೈನುಗಾರಿಕೆ ತರಬೇತಿ; ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ದಾವಣಗೆರೆ ನಗರದ ಪಶು ಆಸ್ಪತ್ರೆ ಆವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಸೆಪ್ಟೆಂಬರ್ 21 ಮತ್ತು 22 ರಂದು ಆಧುನಿಕ ಹೈನುಗಾರಿಕೆ ತರಬೇತಿ ಮತ್ತು ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಯನ್ನು ಆಯೋಜಿಸಲಾಗಿದೆ.
ತರಬೇತಿಗೆ ಹಾಜರಾಗುವ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಫೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ತರಬೇಕು. ತರಬೇತಿಯಲ್ಲಿ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ದಾವಣಗೆರೆ ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08192-233787ಗೆ ಸಂಪರ್ಕಿಸಬಹುದು.












Click it and Unblock the Notifications