ಕಲಬುರಗಿ; ಜುಲೈ 15 ರಂದು ಉದ್ಯೋಗ ಮೇಳ
ಕಲಬುರಗಿ, ಜುಲೈ 06; ವಿಶ್ವ ಕೌಶಲ್ಯ ದಿನದ ಅಂಗವಾಗಿ ಕಲಬುರಗಿಯಲ್ಲಿ ಜುಲೈ 15ರಂದು ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ಭಾಗವಹಿಸಲು ಇಚ್ಚಿಸುವ ಅಭ್ಯರ್ಥಿಗಳು ಹೆಸರು ನೋಂದಣಿ ಮಾಡಿಕೊಳ್ಳುವಂತೆ ಕರೆ ನೀಡಲಾಗಿದೆ.
ಕಲಬುರಗಿ ನಗರದ ಸರ್ಕಾರಿ ಐಟಿಐ ಕಾಲೇಜು ಹಿಂಭಾಗದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನಡೆಯಲಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಉದ್ಯೋಗ ಮೇಳದಲ್ಲಿ ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೋಮಾ ಹಾಗೂ ಪದವೀಧರ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದೆ. ಆಸಕ್ತರು ತಮ್ಮ ಶೈಕ್ಷಣಿಕ ಅರ್ಹತೆಯ ಪ್ರಮಾಣ ಪತ್ರಗಳು, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ, 371 (ಜೆ) ಪ್ರಮಾಣಪತ್ರ ಹಾಗೂ 2 ಪಾಸ್‌ಪೋರ್ಟ್ ಸೈಜ್ ಭಾವಚಿತ್ರದೊಂದಿಗೆ ನೋಂದಣಿ ಮಾಡಿಸಿಕೊಳ್ಳಬೇಕು.
ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು ಜುಲೈ 10ರಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಆಗಮಿಸಿ ಹೆಸರು ನೋಂದಣಿ ಮಾಡಿಕೊಳ್ಳಬೇಕು ಎಂದು ಕರೆ ನೀಡಲಾಗಿದೆ. ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸಬಹುದು. ಕರೆ ಮಾಡಲು ದೂರವಾಣಿ ಸಂಖ್ಯೆ 08472-274846.
ಕಾರ್ಯಾಗಾರ: ವಿಶ್ವ ಕೌಶಲ್ಯ ದಿನದ ಅಂಗವಾಗಿ ಜುಲೈ 14ರ ಶುಕ್ರವಾರ ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಕೆಎಎಸ್. ಮತ್ತು ಕೆಪಿಎಸ್‌ಸಿ ಪರೀಕ್ಷಾರ್ಥಿಗಳಿಗೆ ಪರ್ಸನಾಲಿಟಿ ಡೆವಲಪ್‌ಮೆಂಟ್ ಹಾಗೂ ಸಾಫ್ ಸ್ಕಿಲ್ಸ್‌ಗಳ ಕುರಿತು ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಆಸಕ್ತಿಯುಳ್ಳ ಅಭ್ಯರ್ಥಿಗಳು ಈ ಕಾರ್ಯಾಗಾರದಲ್ಲಿ ಭಾಗವಹಿಸಬಹುದಾಗಿದೆ. ಈ ಕಾರ್ಯಗಾರದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆ ನೀಡಲಾಗುವುದಿಲ್ಲ ಎಂದು ಜಿಲ್ಲಾ ಉದ್ಯೋಗ ವಿನಿಯಮ ಕಚೇರಿ ಸ್ಪಷ್ಟಪಡಿಸಿದೆ.
ನೇಮಕಾತಿ ಮುಂದೂಡಿಕೆ; ಕೊಪ್ಪಳ ಜಿಲ್ಲೆಯ ಕನಕಗಿರಿಯ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕಾತಿ ಮುಂದೂಡಿಕೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಈ ಕುರಿತು ಕನಕಗಿರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ಕನಕಗಿರಿ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಒಟ್ಟು 54 ಅಂಗನವಾಡಿ ಕಾರ್ಯಕರ್ತೆ ಹಾಗೂ 89 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಮೌಖಿಕ ಆದೇಶದನ್ವಯ ಈ ನೇಮಕಾತಿಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ.












Click it and Unblock the Notifications