ಕೊಡಗು: ಫೆಬ್ರವರಿ 24ರಂದು ಉದ್ಯೋಗ ಮೇಳ
ಮಡಿಕೇರಿ, ಫೆಬ್ರವರಿ 23: ಉದ್ಯೋಗ ಹುಡುಕುತ್ತಿರುವ ಕೊಡಗು ಜಿಲ್ಲೆಯ ಯುವಕ/ ಯುವತಿಯರಿಗೆ ಪ್ರಮುಖವಾದ ಮಾಹಿತಿಯೊಂದಿದೆ. ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಫೆಬ್ರವರಿ 24ರ ಸೋಮವಾರ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ಈ ಉದ್ಯೋಗ ಮೇಳದಲ್ಲಿ ವಿವಿಧ ಕಂಪನಿಗಳು ಪಾಲ್ಗೊಳ್ಳಲಿದ್ದು, ತಮ್ಮಲ್ಲಿನ ಖಾಲಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಸೋಮವಾರ ಬೆಳಗ್ಗೆ 10.30ರಿಂದ ಮಧ್ಯಾಹ್ನ 3 ಗಂಟೆವರೆಗೆ ಕೊಡಗು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನಡೆಯಲಿದೆ. ಈ ಮೇಳದಲ್ಲಿ ಖಾಸಗಿ ಕಂಪನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಈ ಉದ್ಯೋಗ ಮೇಳದಲ್ಲಿ ಮಡಿಕೇರಿ ತಾಜ್ ರೆಸಾರ್ಟ್, ವಿರಾಜಪೇಟೆ ತಾಮರ ರೆಸಾರ್ಟ್, ಮಡಿಕೇರಿ ಕಲ್ಯಾಣಿ ಮೋಟಾರ್ಸ್, ಪ್ಯಾಲೇಸ್ ಟೊಯೋಟಾ ಕಾರ್ ಶೋ ರೂಮ್ ಕುಶಾಲನಗರ, ಪೆಂಟಾಟೆಕ್ ಮತ್ತು ಕ್ಲಬ್ ಮಹೀಂದ್ರ ರೆಸಾರ್ಟ್ ಪಾಲ್ಗೊಳ್ಳಲಿದ್ದು, ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಈ ಉದ್ಯೋಗ ಮೇಳದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ ಹಾಗೂ ಸ್ನಾತಕೋತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೆರವು ಪಡೆಯಬಹುದು.
ಆಸಕ್ತ ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣ ಪತ್ರ (ಅನ್ವಯಿಸುವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗ ಮೇಳಕ್ಕೆ ಹಾಜರಾಗಬೇಕು ಎಂದು ಸೂಚನೆ ನೀಡಲಾಗಿದೆ.
ಅರ್ಜಿ ಆಹ್ವಾನ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಬ್ಯೂಟಿ ಪಾರ್ಲರ್ ಕುರಿತ 30 ದಿನಗಳ ಉಚಿತ ತರಬೇತಿಯು ಮಾರ್ಚ್ 4ರಿಂದ ಪ್ರಾರಂಭವಾಗಲಿದೆ. ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಅನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ.
ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.
ಆಸಕ್ತರು ಹೆಚ್ಚಿನ ಮಾಹಿತಿಗೆ ರುಡ್‍ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರನ್ನು ಸಂಪರ್ಕಿಸಬಹುದು. ಮೊಬೈಲ್ ಸಂಖ್ಯೆ 9380162042, 9241482541, 9740982585, 9113880324.
ನೇಮಕಾತಿ ರದ್ದು: ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಶಿಶು ಅಭಿವೃದ್ದಿ ಯೋಜನೆಯ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಹುದ್ದೆಗಳಿಗೆ ನೇಮಕಾತಿಯನ್ನು ಭೌತಿಕವಾಗಿ (ಆಫ್‍ಲೈನ್) ಮುಖಾಂತರ ಆಹ್ವಾನಿಸದ ಅರ್ಜಿಗಳ ಅಧಿಸೂಚನೆಯನ್ನು ರದ್ದುಪಡಿಸಲಾಗಿದೆ ಎಂದು ಶಿಶು ಅಭಿವೃದ್ದಿ ಯೋಜನಾಧಿಕಾರಿ ತಿಳಿಸಿದ್ದಾರೆ.












Click it and Unblock the Notifications