Government jobs; ಕ್ರೀಡಾಪಟುಗಳಿಗೆ ಶೇ 2ರಷ್ಟು ಮೀಸಲಾತಿ
ಬೆಂಗಳೂರು, ಫೆಬ್ರವರಿ 02: ಕರ್ನಾಟಕ ಸರ್ಕಾರ ಕ್ರೀಡಾಪಟುಗಳಿಗೆ ಸಿಹಿಸುದ್ದಿಯನ್ನು ನೀಡಿದೆ. ರಾಜ್ಯ ಸಿವಿಲ್ ಸೇವೆಗಳ ನೇಮಕಾತಿಗಳಲ್ಲಿ ಕ್ರೀಡಾಪಟುಗಳಿಗೆ ಶೇ 2ರಷ್ಟು ಮೀಸಲಾತಿಯನ್ನು ನೀಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನವನ್ನು ಕೈಗೊಳ್ಳಲಾಗಿದೆ.
ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಸಭೆಯಲ್ಲಿ ಎಲ್ಲಾ ಇಲಾಖೆಗಳಿಗೂ ಅನ್ವಯವಾಗುವಂತೆ ಸಿವಿಲ್ ಸೇವೆಗಳ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇ 2ರಷ್ಟು ಮೀಸಲಾತಿ ನೀಡಲು ಒಪ್ಪಿಗೆ ನೀಡಲಾಗಿದೆ.

ಇದಕ್ಕಾಗಿ ಸರ್ಕಾರ ಕರ್ನಾಟಕ ಸಿವಿಲ್ ಸೇವಾ (ಸಾಮಾನ್ಯ ನೇಮಕಾತಿ) ತಿದ್ದುಪಡಿ ನಿಯಮ 2024ಕ್ಕೆ ಅನುಮೋದನೆ ನೀಡಿದೆ. ಹಾಲಿ ಪೊಲೀಸ್ ಮತ್ತು ಅರಣ್ಯ ಇಲಾಖೆಯ ನೇಮಕಾತಿಯಲ್ಲಿ ಮಾತ್ರ ಕ್ರೀಡಾಪಟುಗಳಿಗೆ ಮೀಸಲಾತಿ ಇತ್ತು.
2021ರ ಆದೇಶ; ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾನ್ಸ್‌ಟೇಬಲ್, ಸಬ್ ಇನ್ಸ್‌ಸ್ಪೆಕ್ಟರ್, ಪೊಲೀಸ್ ಉಪ ಅಧೀಕ್ಷಕ ಹುದ್ದೆಗಳ ನೇರ ನೇಮಕಾತಿಯಲ್ಲಿ ಶೇ2ಕ್ಕೆ ಕಡಿಮೆ ಇಲ್ಲದಂತೆ ಹುದ್ದೆಗಳನ್ನು ಕ್ರೀಡಾ ಮೀಸಲಾತಿ ಅಡಿ ನೇಮಕ ಮಾಡಬೇಕು ಎಂದು ಆದೇಶ ಹೊರಡಿಸಲಾಗಿತ್ತು.
ಈಗ ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಎಲ್ಲಾ ಇಲಾಖೆಗಳಿಗೂ ಅನ್ವಯವಾಗುವಂತೆ ಕ್ರೀಡಾಪಟುಗಳಿಗೆ ಶೇ 2ರಷ್ಟು ಮೀಸಲಾತಿ ನೀಡಲು ಅನುಮೋದನೆ ನೀಡಿದೆ. ಇದರಿಂದಾಗಿ ಕ್ರೀಡಾಪಟುಗಳು ಸರ್ಕಾರಿ ಸೇವೆಗೆ ಸೇರಲು ಸಹಾಯಕವಾಗಲಿದೆ.
ಸಚಿವ ಸಂಪುಟದ ಒಪ್ಪಿಗೆ ಸಿಕ್ಕಿರುವುದರಿಂದ ಕರ್ನಾಟಕ ಸಿವಿಲ್ ಸೇವಾ (ಸಾಮಾನ್ಯ ನೇಮಕಾತಿ) ನಿಯಮಕ್ಕೆ ತಿದ್ದುಪಡಿ ತರಲಾಗುತ್ತದೆ. ಬಜೆಟ್ ಅಧಿವೇಶನ ಫೆಬ್ರವರಿ 12ರಿಂದ ಆರಂಭವಾಗಲಿದ್ದು, ಆಗ ಮಸೂದೆ ಮಂಡನೆ ಮಾಡಿ ಸರ್ಕಾರ ಒಪ್ಪಿಗೆ ಪಡೆಯುವ ನಿರೀಕ್ಷೆ ಇದೆ.
2023ರ ಅಕ್ಟೋಬರ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು 19ನೇ ಏಷ್ಯನ್ ಗೇಮ್ಸ್‌ನಲ್ಲಿ ಪದಕ ಪಡೆದ ರಾಜ್ಯದ ಕ್ರೀಡಾಪಟುಗಳು ಮತ್ತು ಕೋಚ್‌ಗಳು ಭೇಟಿಯಾಗಿದ್ದರು. ಅವರನ್ನು ಸನ್ಮಾನಿಸಿ ಮಾತನಾಡಿದ್ದ ಮುಖ್ಯಮಂತ್ರಿಗಳು ಶೇ 2ರಷ್ಟು ಮೀಸಲಾತಿಯನ್ನು ನೀಡುವ ಕುರಿತು ಚರ್ಚಿಸಿ, ತೀರ್ಮಾನ ಮಾಡಲಾಗುತ್ತದೆ ಎಂದು ಭರವಸೆ ನೀಡಿದ್ದರು.
ಸಿದ್ದರಾಮಯ್ಯ ಮಾತನಾಡಿ, "ರಾಜ್ಯ ಸರ್ಕಾರ ಕ್ರೀಡೆಗೆ, ಕ್ರೀಡಾಪಟುಗಳಿಗೆ ಉತ್ತೇಜನ ನೀಡಲು ಬದ್ಧವಾಗಿದೆ. ಏಷ್ಯನ್ ಗೇಮ್ಸ್, ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಗೆದ್ದವರಿಗೆ ಅತಿ ಹೆಚ್ಚು ಬಹುಮಾನ ಘೋಷಣೆ ಮಾಡಿದ ಮೊದಲ ರಾಜ್ಯ ನಮ್ಮದು" ಎಂದು ಹೇಳಿದ್ದರು.
"ಪ್ರಸ್ತುತ ಪೊಲೀಸ್ ಮತ್ತು ಅರಣ್ಯ ಇಲಾಖೆಯಲ್ಲಿ ಕ್ರೀಡಾಪಟುಗಳಿಗೆ ನೇಮಕಾತಿಯಲ್ಲಿ ಮೀಸಲಾತಿ ನೀಡಲಾಗುತ್ತಿದೆ. ಇತರ ಇಲಾಖೆಗಳಲ್ಲೂ ಶೇ 2ರಷ್ಟು ಮೀಸಲಾತಿ ನೀಡುವ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುತ್ತದೆ" ಎಂದು ಭರವಸೆಯನ್ನು ಸಿದ್ದರಾಮಯ್ಯ ಕೊಟ್ಟಿದ್ದರು.
ಸಚಿವ ಸಂಪುಟ ಸಭೆಯ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಕರ್ನಾಟಕ ಅಕೌಂಟ್‌ನಿಂದ ಪೋಸ್ಟ್ ಹಾಕಲಾಗಿದೆ. 'ಕರ್ನಾಟಕ ಸಿವಿಲ್ ಸೇವಾ (ಸಾಮಾನ್ಯ ನೇಮಕಾತಿ) (ತಿದ್ದುಪಡಿ)ನಿಯಮಗಳು- 2024ಕ್ಕೆ ಸಂಬಂಧಿಸಿದಂತೆ ಗೆಜೆಟ್ ಅಧಿಸೂಚನೆ ಹೊರಡಿಸಿದ ನಂತರ ಬರುವ ಆಕ್ಷೇಪಣೆಗಳನ್ನು ಪರಿಗಣಿಸಿದ ನಂತರ ರಾಜ್ಯ ಸಿವಿಲ್ ಸೇವೆಗಳ ನೇರ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ 2% ಮೀಸಲಾತಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯು ನಿರ್ಧರಿಸಿದೆ' ಎಂದು ಹೇಳಿದೆ.












Click it and Unblock the Notifications