Breaking; ನೇರ ನೇಮಕಾತಿ ಮತ್ತು ಮುಂಬಡ್ತಿ ಬಗ್ಗೆ ಹೊಸ ಸುತ್ತೋಲೆ
ಬೆಂಗಳೂರು, ಜನವರಿ 02; ನೇರ ನೇಮಕಾತಿ ಮತ್ತು ಮುಂಬಡ್ತಿ ಪ್ರಕ್ರಿಯೆ ಕೈಗೊಳ್ಳುವ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸುತ್ತೋಲೆಯೊಂದನ್ನು ಹೊರಡಿಸಿದೆ. 18/11/2022ರಂದು ಹೊರಡಿಸಿದ್ದ ಸುತ್ತೋಲೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಾಪಸ್ ಪಡೆಯಲಾಗಿದೆ.
ಉಮಾ ವರದಯ್ಯ ಸರ್ಕಾರದ ಉಪ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, (ಸೇವಾ ನಿಯಮಗಳು-1) ಈ ಕುರಿತು ಸುತ್ತೋಲೆ ಹೊರಡಿಸಿದ್ದಾರೆ. ಈ ಸುತ್ತೋಲೆ ಎಲ್ಲಾ ಸ್ವಾಯತ್ತ ಸಂಸ್ಥೆಗಳು/ ವಿಶ್ವವಿದ್ಯಾಲಯಗಳು/ ಸಾರ್ವಜನಿಕ ಉದ್ದಿಮೆ/ ಆಯೋಗ/ ನಿಗಮ/ ಮಂಡಳಿಗಳು ಮತ್ತು ಸರ್ಕಾರದಿಂದ ಅನುದಾನಪಡೆಯುವ ಸಂಸ್ಥೆಗಳಿಗೆ ಅನ್ವಯಿಸುತ್ತದೆ.
ಸುತ್ತೋಲೆಯಲ್ಲಿ ಏನಿದೆ?; ದಿನಾಂಕ 18/11/2022ರ ಸುತ್ತೋಲೆ ಸಂಖ್ಯೆ ಸಿಆಸುಇ 240 ಸೆನನಿ 2022 ರಲ್ಲಿ ಎಲ್ಲಾ ನೇರ ನೇಮಕಾತಿ ಮತ್ತು ಮೀಸಲಾತಿ ಅನ್ವಯವಾಗುವ ವೃಂದಗಳಿಗೆ ನೀಡಲಾಗುವ ಮುಂಬಡ್ತಿ ಪ್ರಕ್ರಿಯೆಗೆ ಇಲಾಖಾ ಮುಂಬಡ್ತಿ ಸಮಿತಿ ಸಭೆಯನ್ನು ಆಯೋಜಿಸಲಾಗಿತ್ತು.

ಎಲ್ಲಾ ನೇಮಕಾತಿ ಪ್ರಾಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಗಿತ್ತು. ದಿನಾಂಕ 18/11/2022ರ ಸುತ್ತೋಲೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ.
ಕರ್ನಾಟಕ ಸರ್ಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿ ಅಧಿಸೂಚನೆ ಹೊರಡಿಸಿದ ಬಳಿಕ ಸರ್ಕಾರ ಸುತ್ತೋಲೆಯೊಂದನ್ನು ಹೊರಡಿಸಿತ್ತು. ಪರಿಷ್ಕೃತ ಮೀಸಲಾತಿ ಅನುಷ್ಠಾನಗೊಳ್ಳುವ ತನಕ ನೇರ ನೇಮಕಾತಿ ತಡೆಹಿಡಿಯಬೇಕು ಎಂದು ಸೂಚನೆ ನೀಡಲಾಗಿತ್ತು.
ಹೊಸ ಮೀಸಲಾತಿ ಅನ್ವಯ ಮುಂಬಡ್ತಿ ನೀಡುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ಇಲಾಖೆ ಮುಂಬಡ್ತಿ ಸಮಿತಿ ಸಭೆ ನಡೆಸಬಾರದು ಎಂದು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಸುತ್ತೋಲೆಯಲ್ಲಿ ತಿಳಿಸಿದ್ದರು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮೀಸಲಾತಿ ಪ್ರಮಾಣ ಏರಿಕೆ ಮಾಡುವ ಮಸೂದೆಗೆ ವಿಧಾನ ಮಂಡಲದ ಉಭಯ ಸದನಗಳಲ್ಲಿ ಒಪ್ಪಿಗೆ ನೀಡಿದ ಬಳಿಕ ಈ ಹಿಂದೆ ಹೊರಡಿಸಿದ್ದ ಸುತ್ತೋಲೆಯನ್ನು ವಾಪಸ್ ಪಡೆಯಲಾಗಿದೆ.












Click it and Unblock the Notifications