ಕರ್ನಾಟಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ; 26 ಹುದ್ದೆಗಳು
ಬೆಂಗಳೂರು, ಮೇ 27 : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವೈರ್‌ಲೆಸ್ ವಿಭಾಗದಲ್ಲಿನ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 26/6/2020 ಕೊನೆಯ ದಿನಾಂಕವಾಗಿದೆ.
Recommended Video
ಹೈದರಾಬಾದ್-ಕರ್ನಾಟಕೇತರ ಹುದ್ದೆಗಳಿಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಒಟ್ಟು 26 ಹುದ್ದೆಗಳಿದ್ದು, ಮೇ 26ರಿಂದ ಜೂನ್ 26ರ ತನಕ ಅರ್ಜಿ ಸಲ್ಲಿಸಬಹುದು.
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 37900 ರಿಂದ 70850 ರೂ. ವೇತನ ನಿಗದಿ ಮಾಡಲಾಗಿದೆ. ಅರ್ಜಿಗಳನ್ನು ಸಲ್ಲಿಸಿದ ಅಭ್ಯರ್ಥಿಗಳು ಜೂನ್ 30ರೊಳಗೆ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಕರ್ನಾಟಕ ಪೊಲೀಸ್ ಇಲಾಖೆಯ ಅಧಿಕೃತ ವೆಬ್ ಸೈಟ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವವರು ನೀಡಿರುವ ಸೂಚನೆಗಳನ್ನು ಒಮ್ಮೆ ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಬೇಕು ಎಂದು ಸೂಚನೆ ನೀಡಲಾಗಿದೆ.

ವಯೋಮಿತಿ ವಿವರಗಳು
ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 26 ವರ್ಷ, ಎಸ್‌ಸಿ/ಎಸ್‌ಟಿ/ಪ್ರವರ್ಗ-1/ಒಬಿಸಿ ಅಭ್ಯರ್ಥಿಗಳಿಗೆ 28 ವರ್ಷ. ಸೇವಾ ನಿರತ ಸಾಮಾನ್ಯ ವರ್ಗದ ಅಭ್ಯರ್ಥಿಗೆ 35 ವರ್ಷ, ಇತರೆ ಎಲ್ಲಾ ಅಭ್ಯರ್ಥಿಗಳಿಗೆ 40 ವರ್ಷದ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ.

ಅರ್ಜಿ ಶುಲ್ಕದ ವಿವರ
ಅರ್ಜಿಗಳನ್ನು ಸಲ್ಲಿಸಿದ ಸಾಮಾನ್ಯ ಮತ್ತು ಒಬಿಸಿ ವರ್ಗದ ಅಭ್ಯರ್ಥಿಗಳು ರೂ. 250, ಎಸ್‌ಸಿ/ಎಸ್‌ಟಿ/ಪ್ರವರ್ಗ-1ರ ಅಭ್ಯರ್ಥಿಗಳು 100 ರೂ. ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಅರ್ಜಿ ಶುಲ್ಕವನ್ನು ಸ್ಟೇಟ್ ಬ್ಯಾಂಕ್ ಇಂಡಿಯಾದ ಶಾಖೆ ಅಥವ ಅಂಚೆ ಕಚೇರಿಯಲ್ಲಿ ಮಾತ್ರ ಪಾವತಿಸಬೇಕು. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಸಿಗುವ ಚಲನ್ ಪಡೆದುಕೊಂಡು ಶುಲ್ಕ ಪಾವತಿ ಮಾಡಬಹುದು.

ನೇಮಕಾತಿ ಹೇಗೆ?
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸಹಿಷ್ಣುತೆ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಯಲ್ಲಿ ಅರ್ಹಗೊಂಡ ಅಭ್ಯರ್ಥಿಗಳಿಗೆ ಎಲ್ಲಾ ಕೇಂದ್ರಗಳಲ್ಲಿ ಏಕಕಾಲದಲ್ಲಿ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ನಂತರ ಗಳಿಸಿದ ಅಂಕಗಳ ಆಧಾರದ ಮೇಲೆ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಿಸಲಾಗುತ್ತದೆ.

ವಿದ್ಯಾರ್ಹತೆಯ ವಿವರ
ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಪದವಿ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ಮಾಡಬೇಕಿದೆ. ಅರ್ಜಿಯನ್ನು ಸಲ್ಲಿಸಿದ ಬಳಿಕ ಪ್ರಿಂಟ್ ತೆಗೆದುಕೊಂಡು ಇಟ್ಟುಕೊಳ್ಳಬೇಕು ಎಂದು ಅಭ್ಯರ್ಥಿಗಳಿಗೆ ಸಲಹೆ ನೀಡಲಾಗಿದೆ.












Click it and Unblock the Notifications