KPSC Recruitment: ಕೆಪಿಎಸ್‌ಸಿ ನೇಮಕಾತಿ, 3 ವರ್ಷ ವಯೋಮಿತಿ ಸಡಿಲಿಕೆ
ಬೆಂಗಳೂರು, ಸೆಪ್ಟೆಂಬರ್ 08: ಕರ್ನಾಟಕ ಸರ್ಕಾರ ನಿರುದ್ಯೋಗಿ ಯುವಕ-ಯುವತಿಯರಿಗೆ ಸಿಹಿಸುದ್ದಿಯೊಂದನ್ನು ನೀಡಿದೆ. ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನೇಮಕಾತಿಯಲ್ಲಿ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದೆ. ಒಂದು ಬಾರಿಗೆ ಮಾತ್ರ ಅನ್ವಯವಾಗುವಂತೆ ಈ ನಿಯಮ ಜಾರಿಗೆ ಬರಲಿದೆ ಎಂದು ಸ್ಪಷ್ಟಪಡಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 5ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ಈ ಕುರಿತು ತೀರ್ಮಾನವನ್ನು ತೆಗೆದುಕೊಂಡಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಮಂಡಿಸಿದ ಟಿಪ್ಪಣಿಗೆ ಸಭೆಯು ಅನುಮೋದನೆಯನ್ನು ನೀಡಿದೆ.

ರಾಜ್ಯ ಸಿಎಲ್ ಸೇವೆಗಳಲ್ಲಿನ ಗ್ರೂಪ್-ಬಿ ಮತ್ತು ಗ್ರೂಪ್-ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು 3 ವರ್ಷಗಳಿಗೆ ಹೆಚ್ಚಿಸಲು ಒಂದು ಬಾರಿಯ ಕ್ರಮವಾಗಿ ಒಂದು ವರ್ಷದ ಅವಧಿಗೆ ಸಡಿಲಿಕೆ ನೀಡುವ ಬಗ್ಗೆ ಎಂದು ಟಿಪ್ಪಣಿಯಲ್ಲಿ ವಿವರ ನೀಡಲಾಗಿತ್ತು. ಸಂಪುಟ ಸಭೆಯಲ್ಲಿ ವಿವರವಾಗಿ ಚರ್ಚಿಸಿ, ಅನುಮೋದನೆ ಕೊಡಲಾಗಿದೆ.
3 ವರ್ಷದ ವಯೋಮಿತಿ ಸಡಿಲಿಕೆ: ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್-ಬಿ ಮತ್ತು ಗ್ರೂಪ್-ಸಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿಮಾಡಲು ಈಗಾಗಲೇ ಹೊರಡಿಸಲಾಗಿರುವ ಅಧಿಸೂಚನೆಗಳಿಗೆ ಹಾಗೂ ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್-ಸಿ ಹುದ್ದೆಗಳಿಗೆ ಮುಂದಿನ ಒಂದು ವರ್ಷದಲ್ಲಿ ಹೊರಡಿಸಲಿರುವ ಅಧಿಸೂಚನೆಯಲ್ಲಿ ಈಗಿರುವ ನಿಯಮಗಳ ಮೇಲೆ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ (One time measure) ಗರಿಷ್ಠ ವಯೋಮಿತಿಯನ್ನು (Uppar age limit) ಮೂರು ವರ್ಷಗಳಿಗೆ ಹೆಚ್ಚಿಸಲು ಅನುಮೋದನೆ ನೀಡಲಾಗಿದೆ.
ಸಚಿವ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್. ಕೆ. ಪಾಟೀಲ್, "ರಾಜ್ಯದ ಸಿವಿಲ್ ಸೇವೆಗಳಲ್ಲಿನ ಗ್ರೂಪ್-ಬಿ ಮತ್ತು ಗ್ರೂಪ್-ಸಿ ಹುದ್ದೆಗಳಿಗೆ ಪ್ರಸ್ತುತ ಸಾಮಾನ್ಯ ವರ್ಗಕ್ಕೆ 35 ವರ್ಷ, ಪ್ರವರ್ಗ 2ಎ/ 2 ಬಿಗಳಿಗೆ 38 ವರ್ಷ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1ಕ್ಕೆ 40 ವರ್ಷದ ಗರಿಷ್ಠ ವಯೋಮಿತಿ ಇದೆ. ಈಗ 1 ವರ್ಷಕ್ಕೆ ಸೀಮಿತವಾಗಿ ವಯೋಮಿತಿ ಸಡಿಲಿಸಲು ನಿರ್ಧರಿಸಲಾಗಿದೆ" ಎಂದು ಹೇಳಿದ್ದಾರೆ.
ಈ ಹಿಂದೆಯೂ ಅವಕಾಶ ನೀಡಿತ್ತು: ಕರ್ನಾಟಕ ಸರ್ಕಾರ ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿಯಲ್ಲಿ ವಯೋಮಿತಿ ಸಡಿಲಗೊಳಿಸುತ್ತಿರುವುದು ಇದೇ ಮೊದಲಲ್ಲ. 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ 384 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿಯೂ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಇದೇ ಮಾದರಿಯಲ್ಲಿ ಅವಕಾಶ ನೀಡಲಾಗಿತ್ತು.
ಹಲವು ವರ್ಷಗಳ ಬಳಿಕ ಕೆಎಎಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಕರೆದ ಕಾರಣಕ್ಕೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ವಯಸ್ಸಿನ ನಿರ್ಬಂಧವಿಲ್ಲದೆ ಒಂದು ಬಾರಿಗೆ ಸೀಮಿತಗೊಳಿಸಿ (one time measure) ಅರ್ಜಿ ಸಲ್ಲಿಸಲು ಹೆಚ್ಚುವರಿ ವಿಶೇಷ ಅವಕಾಶವನ್ನು ನೀಡಲಾಗಿತ್ತು.
ಈಗಾಗಲೇ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ 384 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯ ಅರ್ಜಿ ಸಲ್ಲಿಕೆ ಅವಧಿ ಅಂತ್ಯಗೊಂಡಿದೆ. ಆಗಸ್ಟ್ 27ರ ಮಂಗಳವಾರ ನಡೆದ ಪೂರ್ವಭಾವಿ ಪರೀಕ್ಷೆಯಲ್ಲಿ ಯಡವಟ್ಟು ಆದ ಕಾರಣ ಮರು ಪರೀಕ್ಷೆಯನ್ನು ನಡೆಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ಘೋಷಣೆ ಮಾಡಿದ್ದಾರೆ.












Click it and Unblock the Notifications