Karnataka Government Jobs: ಕೆಪಿಎಸ್‌ಸಿ ಹೊಸ ನೇಮಕಾತಿ ಅಧಿಸೂಚನೆಗಳಿಗೆ ತಡೆ
ಬೆಂಗಳೂರು, ನವೆಂಬರ್ 16: ಕರ್ನಾಟಕದಲ್ಲಿ ಸರ್ಕಾರಿ ನೌಕರಿ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಬೇಸರದ ಸುದ್ದಿಯೊಂದಿದೆ. ಸದ್ಯಕ್ಕೆ ಹೊಸದಾಗಿ ಯಾವುದೇ ನೇಮಕಾತಿ ಅಧಿಸೂಚನೆಯನ್ನು ಹೊರಡಿಸದಂತೆ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ)ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸೂಚಿಸಿದೆ. ವಿವಿಧ ಇಲಾಖೆಗಳ ಹಲವಾರು ಹೊಸ ನೇಮಕಾತಿ ಪ್ರಸ್ತಾವನೆಗಳು ಕೆಪಿಎಸ್‌ಸಿಯಲ್ಲಿ ಬಾಕಿ ಇದ್ದು, ಈ ಸೂಚನೆಯ ಕಾರಣ ಹೊಸ ನೇಮಕಾತಿ ಆದೇಶ ಪ್ರಕಟವಾಗುವುದು ಇನ್ನಷ್ಟು ವಿಳಂಬವಾಗಲಿದೆ.
ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸಲು ಅನುಮೋದನೆ ನೀಡಲಾಗಿತ್ತು. ಸದ್ಯ ಈ ಕುರಿತು ವರದಿ ನೀಡಲು ಹೈಕೋರ್ಟ್ ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗ ರಚನೆ ಮಾಡಲಾಗಿದೆ. ವರದಿ ಸಲ್ಲಿಕೆ ಮಾಡಲು ಎರಡು ತಿಂಗಳ ಕಾಲಾವಕಾಶವನ್ನು ನೀಡಲಾಗಿದೆ.

ಈಗ ಪರಿಶಿಷ್ಟ ಜಾತಿಯವರಿಗೆ ಒಳ ಮೀಸಲಾತಿ ಕಲ್ಪಿಸುವ ಕುರಿತು ಮುಂದಿನ ತೀರ್ಮಾನ ಆಗುವವರೆಗೆ ಯಾವುದೇ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಿದಂತೆ ಕೆಪಿಎಸ್‌ಸಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸೂಚಿಸಿದೆ. ಇದರಿಂದಾಗಿ ಈ ವರ್ಷ ವಿವಿಧ ಇಲಾಖೆಗಳಲ್ಲಿ ಯಾವುದೇ ನೇಮಕಾತಿಗಳು ನಡೆಯುವುದಿಲ್ಲ. ಈಗ ಹೊರಡಿಸಿರುವ ಅಧಿಸೂಚನೆಗಳ ಪರೀಕ್ಷೆ ಸೇರಿದಂತೆ ವಿವಿಧ ಪ್ರಕ್ರಿಯೆಗಳು ನಡೆಯಲಿವೆ.
ಹೊಸ ನೇಮಕಾತಿ ಅಧಿಸೂಚನೆ ಬೇಡ: ಅಕ್ಟೋಬರ್ 28ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿ ಕುರಿತು ವರದಿ ನೀಡಲು ಏಕಸದಸ್ಯ ಆಯೋಗವನ್ನು ರಚಿಸಿರುವ ತೀರ್ಮಾನ ಕೈಗೊಳ್ಳಲಾಗಿತ್ತು.
ರಾಜ್ಯ ಸರ್ಕಾರ ಈಗ ಈ ಕುರಿತು ವರದಿ ನೀಡಲು ಆಯೋಗವನ್ನು ರಚನೆ ಮಾಡಿದೆ. ಸಂಪುಟ ಸಭೆಯಲ್ಲಿ ವರದಿಯ ಬಗ್ಗೆ ಅಂತಿಮ ತೀರ್ಮಾನ ಆಗುವವರೆಗೆ ಯಾವುದೇ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸದಿರಲು ತೀರ್ಮಾನ ತೆಗೆದುಕೊಳ್ಳಲಾಗಿತ್ತು. ಆದ್ದರಿಂದ ರಾಜ್ಯ ಸಿವಿಲ್ ಸೇವೆಗಳಲ್ಲಿ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸದಂತೆ ಸೂಚನೆ ನೀಡಲಾಗಿದೆ.
ಸಚಿವ ಸಂಪುಟ ಸಭೆಗೆ ರಾಜ್ಯದ ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕಲ್ಪಿಸುವ ಕುರಿತು ಪ್ರಸ್ತಾವನೆಯನ್ನು ಮಂಡಿಸಲಾಗಿತ್ತು. ಸಚಿವ ಸಂಪುಟವು ಸುಪ್ರೀಂಕೋರ್ಟ್‌ನ ದಿನಾಂಕ 01.08.2024ರ ಆದೇಶದಂತೆ ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿಯನ್ನು ಕಲ್ಪಿಸಲು ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯ ವಿವಿಧ ಉಪಜಾತಿಗಳಿಗೆ ಸೇರಿದವರ ಪ್ರಾತಿನಿಧ್ಯತೆ ಕುರಿತು Empirical Data ಪಡೆದು ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಬಗ್ಗೆ ಸೂಕ್ತ ಶಿಫಾರಸಿ ನೊಂದಿಗೆ ವರದಿ ಸಲ್ಲಿಸಲು ಹೈಕೋರ್ಟ್ ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಆಯೋಗವನ್ನು ರಚಿಸಲು ಅನುಮೋದನೆ ನೀಡಿದೆ.
ಅಲ್ಲದೇ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ಮುಂದಿನ ತೀರ್ಮಾನದವರೆಗೂ ಹೊರಡಿಸಬಾರದೆಂದು ಸಚಿವ ಸಂಪುಟವು ನಿರ್ಧರಿಸಿದೆ. ಆದ್ದರಿಂದ ಈಗ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸದಂತೆ ಕೆಪಿಎಸ್‌ಸಿಗೆ ಸೂಚನೆ ನೀಡಲಾಗಿದೆ.
ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯ ವಿವಿಧ ಉಪಜಾತಿಗಳಿಗೆ ಸೇರಿದವರ ಪ್ರಾತಿನಿಧ್ಯತೆ ಕುರಿತು Empirical Data ಪಡೆದು ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಬಗ್ಗೆ ಸೂಕ್ತ ಶಿಫಾರಸ್ಸಿಗಳೊಂದಿಗೆ ಎರಡು ತಿಂಗಳ ಅವಧಿಯೊಳಗಾಗಿ ವರದಿ ಸಲ್ಲಿಸಲು ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಾಧೀಶರಾದ ಹೆಚ್. ಎನ್. ನಾಗಮೋಹನ್ ದಾಸ್ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗವನ್ನು ರಚನೆ ಮಾಡಿದೆ.












Click it and Unblock the Notifications