Kalyana Karnataka: 5,267 ಶಿಕ್ಷಕ ಹುದ್ದೆಗಳ ನೇಮಕಾತಿಗೆ ಒಪ್ಪಿಗೆ
ಬೆಂಗಳೂರು, ಅಕ್ಟೋಬರ್ 09: ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಣದ ಗುಣಮಟ್ಟ ಸುಧಾರಿಸಲು ಸರ್ಕಾರ ಮುಂದಾಗಿದೆ. ಒಟ್ಟು 5,267 ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಒಪ್ಪಿಗೆ ನೀಡಲಾಗಿದೆ. ಕೆಲವು ದಿನಗಳ ಹಿಂದೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಖಾತೆ ಸಚಿವ ಮಧು ಬಂಗಾರಪ್ಪ ಕಲ್ಯಾಣ ಕರ್ನಾಟಕ ಭಾಗದಲ್ಲಿಯೂ ಶಿಕ್ಷಕರ ಕೊರತೆ ಇದೆ, ಈ ಭಾಗಕ್ಕೆ ಶೀಘ್ರದಲ್ಲಿಯೇ 5 ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಹೇಳಿದ್ದರು.
ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ 5,267 ಶಿಕ್ಷಕರ ಹುದ್ದೆಗಳ ನೇಮಕಾತಿ ಮಾಡಿಕೊಳ್ಳುವ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹಸರಿನಲ್ಲಿ, ಎಂ. ಎ. ಮಹಾಲಕ್ಷ್ಮಿ, ಸರ್ಕಾರದ ಅಧೀನ ಕಾರ್ಯದರ್ಶಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶವನ್ನು ಹೊರಡಿಸಿದ್ದಾರೆ.

ಈ ಆದೇಶ 2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ 103ರಲ್ಲಿನ ಘೋಷಣೆಯಂತೆ 2024-25ನೇ ಶೈಕ್ಷಣಿಕ ಸಾಲಿಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮಂಜೂರಾಗಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರದ ಅನುಮತಿ ನೀಡುವ ಕುರಿತು ಎಂಬ ವಿಷಯ ಒಳಗೊಂಡಿದೆ.
2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕ 103ರಲ್ಲಿ ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಹಾಗೂ ಪದವಿ ಪೂರ್ವ ಕಾಲೇಜುಗಳ ವಿವಿಧ ವಿಷಯಗಳ ಶಿಕ್ಷಕರು/ ಉಪನ್ಯಾಸಕರುಗಳನ್ನು ನೇಮಕ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು ಎಂದು ಘೋಷಿಸಲಾಗಿರುತ್ತದೆ.
ಅದರಂತೆ, ಕಲ್ಯಾಣ ಕರ್ನಾಟಕ ಭಾಗದಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮಂಜೂರಾಗಿ ಪ್ರಸ್ತುತ ಖಾಲಿ ಇರುವ ಒಟ್ಟು 6,584 ಶಿಕ್ಷಕರ ಹುದ್ದೆಗಳ ಪೈಕಿ ಶೇ. 80 ರಷ್ಟು ಅಂದರೆ ಒಟ್ಟು 5,267 ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅನುಮತಿ ನೀಡುವಂತೆ ಕೋರಿ ಹುದ್ದೆಗಳ ವಿವರಗಳೊಂದಿಗೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಇವರು ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿರುತ್ತಾರೆ.
ಸದರಿ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿದ ಸರ್ಕಾರವು, ಈ ಆದೇಶವನ್ನು ಹೊರಡಿಸಿದೆ. 2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ 103ರಲ್ಲಿ ಘೋಷಿಸಿರುವಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮಂಜೂರಾಗಿ ಪ್ರಸ್ತುತ ಖಾಲಿ ಇರುವ ಒಟ್ಟು 6,584 ಶಿಕ್ಷಕರ ಹುದ್ದೆಗಳ ಪೈಕಿ ಶೇ. 80 ರಷ್ಟು ಅಂದರೆ ಒಟ್ಟು 5,267 ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರದ ಅನುಮತಿ ನೀಡಿ ಆದೇಶಿಸಲಾಗಿದೆ ಎಂದು ಹೇಳಿದೆ.
ಹುದ್ದೆಗಳ ವಿವರಗಳು: ಪಿಎಸ್‌ಟಿ 1-5 4424 ಹುದ್ದೆಗಳು, ಜಿಪಿಟಿ 6-8 78 ಹುದ್ದೆಗಳು, ಪಿಇಟಿ (ಗ್ರೇಡ್-2) 380 ಹುದ್ದೆಗಳು, ಎಸ್‌ಇಸಿ ಎಎಂ 121 ಹುದ್ದೆಗಳು, ಎಸ್‌ಇಸಿ ಪಿಇಟಿ 216 ಹುದ್ದೆಗಳು, ಎಸ್ಇಸಿ ಎಸ್‌ಪಿಎಲ್ 48 ಹುದ್ದೆಗಳು ಸೇರಿ 5,267 ಹುದ್ದೆ.
ಮೇಲ್ಕಂಡ ಹುದ್ದೆಗಳ ನೇಮಕಾತಿಗೆ ಪೂರ್ವ ಪಕ್ರಿಯೆಗಳು ಮುಕ್ತಾಯಗೊಂಡ ನಂತರ ಮತ್ತು ನೇಮಕಾತಿ ಆದೇಶ ನೀಡುವ ಮೊದಲು ಸದರಿ ಹುದ್ದೆಗಳಿಗೆ ತಗಲಬಹುದಾದ ಆರ್ಥಿಕ ಆಯವ್ಯಯವನ್ನು ಅಂದಾಜಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದೆ ಎಂದು ಹೇಳಿದೆ.












Click it and Unblock the Notifications