Good News : ರಾಜ್ಯ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 1,500 ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್
ಬೆಂಗಳೂರು, ಜನವರಿ 09: ಕರ್ನಾಟಕ ಸರ್ಕಾರದ ರಾಜ್ಯದಲ್ಲಿನ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಿದೆ. ಶೀಘ್ರವೇ ರಾಜ್ಯ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವಂತ 1,500 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಿಳಿಸಿದ್ದಾರೆ.
ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದ ಆರೋಗ್ಯ ಇಲಾಖೆಯಲ್ಲಿ ಒಟ್ಟು 3927 ಎಎನ್‌ಎಂ ಖಾಲಿ ಹುದ್ದೆಗಳ ಪೈಕಿ 1205 ಹಾಗೂ 2990 ಎಚ್‌ಐಒ ಖಾಲಿ ಹುದ್ದೆಗಳ ಪೈಕಿ 300 ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆ ಈಗಾಗಲೇ ಅನುಮೋದನೆ ನೀಡಿದೆ. ಅಗತ್ಯ ಸೇವೆಗಳಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ವಿಳಂಬ ಮಾಡಬಾರದು ಎಂಬುದಾಗಿ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದರು.

ಹೆಣ್ಣು ಭ್ರೂಣ ಹತ್ಯೆ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಎಲ್ಲಾ ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಆಸ್ಪತ್ರೆಗಳಲ್ಲಿ ಸ್ವಚ್ಛತೆ, ಅಗತ್ಯ ಮೂಲಸೌಕರ್ಯಗಳ ನಿರ್ವಹಣೆಗೆ ವ್ಯವಸ್ಥೆ ಮಾಡಬೇಕು. ನಗರ ಪ್ರದೇಶಗಳಲ್ಲಿ 817 ನಮ್ಮ ಕ್ಲಿನಿಕ್‌ಗಳನ್ನು ಮಂಜೂರು ಮಾಡಲಾಗಿದ್ದು, ಪ್ರಸ್ತುತ 512 ಕಾರ್ಯಾಚರಿಸುತ್ತಿವೆ. ಇವುಗಳನ್ನು ಇನ್ನಷ್ಟು ಬಲಪಡಿಸಲು ಕ್ರಮ. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಅಡಿ ಚಿಕಿತ್ಸಾ ಪ್ಯಾಕೇಜ್ ಮೊತ್ತ ಹೆಚ್ಚಳ ಮಾಡುವ ಕುರಿತು ಪರಿಶೀಲನೆ ಮಾಡಬೇಕು ಎಂದರು.
ಪ್ರಸ್ತುತ ಸಾಲಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ರೂ.11182 ಕೋಟಿ ಅನುದಾನ ಒದಗಿಸಲಾಗಿದ್ದು, ಇದುವರೆಗೆ ರೂ.6593 ಕೋಟಿ ವೆಚ್ಚ ಮಾಡಲಾಗಿದೆ. ಅನುದಾನಕ್ಕೆ ಶೇ.58.96 ಪ್ರಗತಿ ಸಾಧಿಸಲಾಗಿದೆ.
ರಾಜ್ಯದಲ್ಲಿ ತಾಯಂದಿರ ಮರಣ ಅನುಪಾತ ದೇಶಕ್ಕೆ ಹೋಲಿಸಿದರೆ ಕಡಿಮೆಯಿದೆ. 2018-20ರ ಅವಧಿಯಲ್ಲಿ ರಾಜ್ಯದಲ್ಲಿ ಒಂದು ಲಕ್ಷಕ್ಕೆ 69 ಮರಣ ಸಂಭವಿಸುತ್ತಿದ್ದು, ದೇಶದ ಅನುಪಾತ 97 ಇದೆ. 2022-24ರ ಅವಧಿಯಲ್ಲಿ ರಾಜ್ಯದಲ್ಲಿ ಇದರ ಪ್ರಮಾಣ 55 ಕ್ಕೆ ಇಳಿದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.












Click it and Unblock the Notifications