ಬೆಂಗಳೂರು ಗ್ರಾಮಾಂತರ; ಆಸ್ಪತ್ರೆಗಳಲ್ಲಿನ ಖಾಲಿ ಹುದ್ದೆ ಭರ್ತಿ
ಬೆಂಗಳೂರು, ಫೆಬ್ರವರಿ 25: "ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿಯಿರುವ ಟೆಕ್ನಿಷಿನ್ಸ್, ಡ್ರೈವರ್, ಗ್ರೂಪ್ 'ಡಿ' ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ಸಾರ್ವಜನಿಕರಿಗೆ ಆರೋಗ್ಯ ಸೇವೆಗಳನ್ನು ಒದಗಿಸುವಂತೆ" ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವಿ. ಪ್ರಸಾದ್ ಅಧಿಕಾರಿಗಳಿಗೆ ಸೂಚಿಸಿದರು.
ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
"ಸರ್ಕಾರಿ ಆಸ್ಪತ್ರೆಯಲ್ಲಿ ಹೆಚ್ಚು ಹುದ್ದೆಗಳು ಖಾಲಿ ಇರುವುದರಿಂದ ಸಕಾಲದಲ್ಲಿ ಜನರಿಗೆ ಆರೋಗ್ಯ ಸೇವೆ ನೀಡಲು ಸಾಧ್ಯವಾಗದೆ, ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಶೀಘ್ರವೇ ಅಗತ್ಯವಿರುವ ಸಿಬ್ಬಂದಿಗಳನ್ನು ನೇಮಕಾತಿ ಮಾಡಿಕೊಳ್ಳಿ" ಎಂದರು.

ಜಿಲ್ಲೆಯಲ್ಲಿ ನಡೆದ ಪೊಲಿಯೋ ಲಸಿಕೆ ಅಭಿಯಾನ ಮತ್ತು ದಡಾರ ಚುಚ್ಚುಮದ್ದು ಬಗ್ಗೆ ಸಭೆಯಲ್ಲಿ ಮಾಹಿತಿ ಪಡೆದ ಅವರು, ಆರೋಗ್ಯಾಧಿಕಾರಿಗಳು ಕಚೇರಿಯಲ್ಲೇ ಹೆಚ್ಚು ಸಮಯವನ್ನು ಕಳೆಯದೇ, ವಿವಿಧ ಆಸ್ಪತ್ರೆಗಳಿಗೆ ಭೇಟಿ ನೀಡುವ ಮೂಲಕ ವಾಸ್ತವ ಪರಿಸ್ಥಿತಿ ಮತ್ತು ಸಮಸ್ಯೆಗಳನ್ನು ಆಲಿಸಬೇಕು ಎಂದು ಸೂಚನೆ ನೀಡಿದರು.
ಅಂಗನವಾಡಿಗಳಲ್ಲಿ ಸೂಕ್ತ ರೀತಿಯಲ್ಲಿ ಆರೋಗ್ಯ ಪರೀಕ್ಷೆಗಳು ನಡೆಯುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಿದ್ದು, ತಾಯಿ ಕಾರ್ಡ್‌ಗಳನ್ನು ನೇರವಾಗಿ ಗರ್ಭಿಣಿಯರ ಮನೆಗೆ ತಲುಪಿಸುವ ಕೆಲಸ ಮಾಡಬೇಕು ಎಂದು ನಿರ್ದೇಶನ ನೀಡಲಾಯಿತು.
ಜಿಲ್ಲಾ ವ್ಯಾಪ್ತಿಯಲ್ಲಿರುವ ಕ್ಲಿನಿಕ್ ಗಳು ಪರವಾನಗಿ ಪಡೆಯಲು ಅರ್ಜಿ ಸಲ್ಲಿಸಿದರೆ ನಿಯಮಾನುಸಾರ ಅರ್ಜಿಗಳನ್ನು ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕು, ತಪ್ಪಿದಲ್ಲಿ ಭವಿಷ್ಯದಲ್ಲಾಗುವ ಅನಾಹುತಗಳಿಗೆ ನೇರವಾಗಿ ಆರೋಗ್ಯ ಇಲಾಖೆಯೇ ಕಾರಣವಾಗುತ್ತದೆ ಎಂದರು.












Click it and Unblock the Notifications