ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ: ಭಾನುವಾರ ಮುಖ್ಯ ಪರೀಕ್ಷೆ, 1 ಸಾವಿರ ಹುದ್ದೆಗೆ 4.8 ಲಕ್ಷ ಅರ್ಜಿಗಳು
ಬೆಂಗಳೂರು, ಅಕ್ಟೋಬರ್ 26: ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಒಟ್ಟು 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳ ಕಡ್ಡಾಯ ಕನ್ನಡ ಪರೀಕ್ಷೆ ಈಗಾಗಲೇ ಮುಕ್ತಾಯವಾಗಿದೆ. ಅಕ್ಟೋಬರ್ 27ರ ಭಾನುವಾರ ಮುಖ್ಯ ಪರೀಕ್ಷೆ ನಡೆಯಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕಟ್ಟಿನಿಟ್ಟಾಗಿ ಪರೀಕ್ಷೆಗಳನ್ನು ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಂಡಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮಾಹಿತಿಯಂತೆ 1000 ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಮುಖ್ಯಪರೀಕ್ಷೆಗೆ 4.8 ಲಕ್ಷ ಅಭ್ಯರ್ಥಿಗಳು ಅರ್ಹರಾಗಿದ್ದಾರೆ. 1,173 ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಹಾಕಲು ಬಿಗಿ ಬಂದೋಬಸ್ತ್ ಮಾಡಲಾಗಿದೆ. ಕೆಇಎ ನಿರ್ದೇಶನಕ್ಕೆ ಕಾಯದೆ ಎಲ್ಲಾ ಪರೀಕ್ಷಾ ಕೊಠಡಿಗಳಲ್ಲಿ ತಪ್ಪದೇ ಸಿಸಿಟಿವಿ ಕ್ಯಾಮರಾ ಅಳವಡಿಸಬೇಕು ಎಂದು ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.

ಅಕ್ಟೋಬರ್ 27ರ ಭಾನುವಾರ ಮುಖ್ಯ ಪರೀಕ್ಷೆಯ ಪತ್ರಿಕೆ-1 ಹಾಗೂ ಪತ್ರಿಕೆ-2ರ ಪರೀಕ್ಷೆಗಳು ನಡೆಯಲಿವೆ. ಅತ್ಯಂತ ಪಾರದರ್ಶಕ, ನಿಷ್ಪಕ್ಷಪಾತ ಹಾಗೂ ಪರಿಣಾಮಕಾರಿಯಾಗಿ ಈ ಪರೀಕ್ಷೆಗಳ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜಿಲ್ಲಾಡಳಿತಗಳು ಸಹ ಸ್ಪರ್ಧಾತ್ಮಕ ಪರೀಕ್ಷೆಯ ಸಿದ್ಧತೆಯ ಕುರಿತು ಸಭೆಗಳನ್ನು ನಡೆಸಿ, ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದೆ.
ಅಭ್ಯರ್ಥಿಗಳಿಗೆ ಮಾರ್ಗಸೂಚಿ: ಪರೀಕ್ಷಾ ಕಾರ್ಯದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೀಡಿರುವ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಬೇಕು ಎಂದು ಸೂಚಿಸಲಾಗಿದೆ. ಪರೀಕ್ಷೆ ಆರಂಭಕ್ಕೂ 2 ಗಂಟೆ ಅವಧಿಗೆ ಮೊದಲು ಖಜಾನೆಯಿಂದ ಪ್ರಶ್ನೆ ಪತ್ರಿಕೆ ಹಾಗೂ ಓಎಂಆರ್‌ಗಳನ್ನು ಮಾರ್ಗಧಿಕಾರಿಗಳಿಗೆ ನೀಡಿ, ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲಾಗುತ್ತದೆ. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಓರ್ವ ಮಹಿಳಾ ಹಾಗೂ ಓರ್ವ ಪುರುಷ ಪೊಲೀಸರನ್ನು ಅಭ್ಯರ್ಥಿಗಳ ತಪಾಸಣೆ ಕಾರ್ಯನಿಯೋಜಿಸಲಾಗುತ್ತದೆ. ಯಾವುದೇ ಲೋಪದೋಷಗಳು ಆಗದಂತೆ ಜವಾಬ್ದಾರಿಯಿಂದ ಪರೀಕ್ಷಾ ಕಾರ್ಯ ನಿರ್ವಹಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ಪರೀಕ್ಷೆಗಳು ಪಾರದರ್ಶಕವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷೆಗಳನ್ನು ಶಾಂತ ವಾತವರಣದಲ್ಲಿ ನಡೆಸಲು ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿ ಪ್ರದೇಶದ ಸುತ್ತಲೂ ನಿಷೇಧಿತ ಪ್ರದೇಶವೆಂದು ಘೋಷಿಸಿ, ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತದೆ. ಪರೀಕ್ಷಾ ಕೇಂದ್ರದ ವ್ಯಾಪ್ತಿಯಲ್ಲಿನ ಜೆರಾಕ್ಸ್ ಅಂಗಡಿ ಹಾಗೂ ಸೈಬರ್ ಕೆಫೆಗಳನ್ನು ಪರೀಕ್ಷಾ ನಡೆಯುವ ದಿನದಂದು ಮುಚ್ಚುವಂತೆ ಮತ್ತು ಪರೀಕ್ಷಾ ಕೇಂದ್ರಕ್ಕೆ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ಮೊಬೈಲ್ ಫೋನ್‌ಗಳನ್ನು ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರದಂತೆ ಮಾರ್ಗಸೂಚಿ ಹೊರಡಿಸಲಾಗಿದೆ.
ಪರೀಕ್ಷಾ ಕೇಂದ್ರಗಳಲ್ಲಿ ಉಪನ್ಯಾಸಕರು, ಕಚೇರಿ ಸಿಬ್ಬಂದಿಯವರು ಪರೀಕ್ಷೆ ನಡೆಯುವ ಅವಧಿಯಲ್ಲಿ ಮೊಬೈಲ್ ಫೋನುಗಳನ್ನು ತರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ. ಯಾವುದೇ ಕಾರಣಕ್ಕೂ ಪೀಠೋಪಕರಣ, ಕುಡಿಯುವ ನೀರು, ಶೌಚಾಲಯದ ವ್ಯವಸ್ಥೆ ಸೇರಿದಂತೆ ಮೂಲಸೌಕರ್ಯಗಳ ಕೊರತೆ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಲಾಗಿದೆ.
ಈ ಹುದ್ದೆಗಳಿಗೆ ಸೆಪ್ಟೆಂಬರ್‌ನಲ್ಲಿ ಕಡ್ಡಾಯ ಕನ್ನಡ ಪರೀಕ್ಷೆಗಳನ್ನು ನಡೆಸಲಾಗಿತ್ತು. ಆದರೆ ಈಗ ಸರ್ಕಾರ ವಯೋಮಿತಿ ಸಡಿಲಿಕೆ ಮಾಡಿದ ನಂತರ ಈ ಹುದ್ದೆಗೆ ಅರ್ಜಿ ಸಲ್ಲಿಸಿದ 63 ಸಾವಿರ ಮಂದಿಗೆ ಅಕ್ಟೋಬರ್ 26ರ ಶನಿವಾರ ಕಡ್ಡಾಯ ಕನ್ನಡ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. 153 ಕೇಂದ್ರಗಳಲ್ಲಿ ಈ ಪರೀಕ್ಷೆಗಳು ನಡೆಯಲಿವೆ.












Click it and Unblock the Notifications