ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗಡಿ ವಿಷಯದಲ್ಲಿ ಎಲ್ಲೆ ಮೀರದಂತೆ ಜೋಷಿಗೆ ಕೃಷ್ಣ ಎಚ್ಚರಿಕೆ

By Staff
|
Google Oneindia Kannada News

ಬೆಂಗಳೂರು : ಬೆಳಗಾವಿ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ತಮ್ಮ ಇತಿಮಿತಿ ಅರಿತು ವರ್ತಿಸುವಂತೆ ಹಾಗೂ ಎಲ್ಲೆ ಮೀರಿ ಮಾತನಾಡದಂತೆ ಮುಖ್ಯಮಂತ್ರಿ ಕೃಷ್ಣ ಅವರು, ಕೇಂದ್ರ ಸಚಿವ ಮನೋಹರ ಜೋಷಿ ಅವರಿಗೆ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿಯಲ್ಲಿ ಜೋಷಿ ಅವರು ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಈಚೆಗೆ ನೀಡಿದ ಹೇಳಿಕೆಯನ್ನು ಅವರು ಖಂಡಿಸಿದ್ದಾರೆ.

ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿದ ಭಾಗವಾಗಿದ್ದು, ಕನ್ನಡಿಗರು ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಬಿಟ್ಟುಕೊಡುವಂತೆ ಮಾಡಲು ಶಿವಸೇನೆ ಹೋರಾಟದ ತಂತ್ರವನ್ನು ರೂಪಿಸಲಿದೆ ಎಂದು ಜೋಷಿ ಅವರು ನೀಡಿದ್ದ ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಗಿದೆ. ರಾಜಕೀಯ ಮುಖಂಡರೂ ಸೇರಿದಂತೆ ಹಲವು ಕನ್ನಡ ಪರ ಸಂಘಟನೆಗಳು, ಸಾಹಿತಿ- ಕಲಾವಿದರ ಬಳಗ ಜೋಷಿ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆಯನ್ನೂ ನಡೆಸಿವೆ.

ಈ ಸಂಬಂಧ ಮಂಗಳವಾರ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಅವರು, ಸಚಿವರು ತಮಗೆ ಸಂಬಂಧಪಡದ ವಿಷಯಗಳ ಬಗ್ಗೆ ಅನಗತ್ಯವಾಗಿ ಮೂಗು ತೂರಿಸುವುದು ಸೂಕ್ತವಲ್ಲ ಎಂದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಕೃಷ್ಣ ಇಂತಹ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವ ಮೂಲಕ ರಾಜ್ಯ- ರಾಜ್ಯಗಳ ನಡುವೆ ಸಾಮರಸ್ಯ ಹಾಳು ಮಾಡುವುದು ಕೇಂದ್ರ ಸಚಿವರಿಗೆ ಶೋಭೆ ತರುವುದಿಲ್ಲ ಎಂದು ಹೇಳಿದರು.

ಬೆಳಗಾವಿ ಕನ್ನಡ ನಾಡಿನ ಅವಿಭಾಜ್ಯ ಅಂಗ. ನಾವು ಯಾವುದೇ ಕಾರಣಕ್ಕೂ ಬೆಳಗಾವಿಯನ್ನು ಬಿಟ್ಟುಕೊಡಲು ಸಾಧ್ಯವೇ ಇಲ್ಲ. ಕೇಂದ್ರ ಸಚಿವರು ಬೆಳಗಾವಿಯನ್ನು ಮಹಾರಾಷ್ಟ್ರಕ್ಕೇ ಸೇರಿಸುವ ಬಗ್ಗೆ ಕನಸು ಕಂಡು, ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳುವುದು ಸರ್ವಥಾ ಸಲ್ಲ ಎಂದರು.

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X