ನೆನೆಗುದಿಯಲ್ಲಿದ್ದ ಜೋಗ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಂಪುಟ ಅಸ್ತು
ಬೆಂಗಳೂರು : ಬಹಳ ದಿನಗಳಿಂದ ಮೀನಾಮೇಷ ಎಣಿಸುತ್ತಿದ್ದ ಜೋಗ ಅಭಿವೃದ್ಧಿ ಪ್ರಾಧಿಕಾರದ ರಚನೆಗೆ ಸರ್ಕಾರ ಒಪ್ಪಿಗೆ ನೀಡಿದ್ದು, ಆರಂಭ ಅನುದಾನವಾಗಿ 3.5 ಕೋಟಿ ರುಪಾಯಿಗಳನ್ನು ಬಿಡುಗಡೆ ಮಾಡಲು ಹಣಕಾಸು ಇಲಾಖೆ ಒಪ್ಪಿದೆ.
ಭಾರತದ ನಯಾಗರಾ ಎಂದೇ ಹೆಸರಾದ ಜೋಗ ಜಲಪಾತದ ಸರ್ವಾಂಗೀಣ ಅಭಿವೃದ್ಧಿಗೆ ಜೋಗ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಲು ಶುಕ್ರವಾರ ನಡೆದ ಸಂಪುಟ ಸಭೆ ಒಪ್ಪಿಗೆ ನೀಡಿದ ವಿಷಯವನ್ನು ವಾರ್ತಾ ಸಚಿವ ಎಂ. ಶಿವಣ್ಣ ಸಂಪುಟ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದರು. ಪ್ರವಾಸೋದ್ಯಮ ಸಚಿವರು ಪ್ರಾಧಿಕಾರದ ಅಧ್ಯಕ್ಷರಾಗಿದ್ದು , ಜಿಲ್ಲಾ ಉಸ್ತುವಾರಿ ಸಚಿವ ಕಾಗೋಡು ತಿಮ್ಮಪ್ಪ ಹಾಗೂ ಬೃಹತ್ ಕೈಗಾರಿಕೆ ಸಚಿವ ಆರ್.ವಿ.ದೇಶಪಾಂಡೆ ಪ್ರಾಧಿಕಾರದಲ್ಲಿ ಕಾರ್ಯ ನಿರ್ವಹಿಸುವರು ಎಂದು ಶಿವಣ್ಣ ತಿಳಿಸಿದರು.
ಜೋಗಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳ ಅಭಿವೃದ್ಧಿ ಸೇರಿದಂತೆ ವಿವಿಧ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಲ್ಲಿ ಪ್ರಾಧಿಕಾರ ಕಾರ್ಯ ನಿರ್ವಹಿಸಲಿದೆ. ಪ್ರಾಧಿಕಾರದ ರೂಪು ರೇಷೆ ಹಾಗೂ ಉಳಿದ ಸದಸ್ಯರ ನೇಮಕ ಕುರಿತಂತೆ ನಂತರದಲ್ಲಿ ತೀರ್ಮಾನಿಸಲಾಗುವುದು ಎಂದು ಸಚಿವ ಶಿವಣ್ಣ ತಿಳಿಸಿದರು.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...












Click it and Unblock the Notifications