ರೆಸಾರ್ಟ್ ಮೇಲೆ ದಾಳಿ : ವಿದ್ಯಾರ್ಥಿನಿಯರ ಬಂಧನ, ಬಿಡುಗಡೆ
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲಾ ವಿಶೇಷ ಪೊಲೀಸ್ ತಂಡ ಶುಕ್ರವಾರ ರಾತ್ರಿ ಬನ್ನೇರುಘಟ್ಟ ರಸ್ತೆಯಲ್ಲಿರುವ ರೆಸಾರ್ಟ್ ಒಂದರ ಮೇಲೆ ದಾಳಿ ಮಾಡಿ, ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರನ್ನು ಬಂಧಿಸಿ, ಆನಂತರ ಮುಚ್ಚಳಿಕೆ ಬರೆಸಿಕೊಂಡು ಬಿಡುಗಡೆ ಮಾಡಿದೆ.
ಗೌರವಾನ್ವಿತ ಕುಟುಂಬಕ್ಕೆ ಸೇರಿದ ಈ ವಿದ್ಯಾರ್ಥಿಗಳು, ಟ್ಯೂಷನ್, ಗ್ರೂಪ್ ಸ್ಟಡೀಸ್ ಹೆಸರಿನಲ್ಲಿ ಮನೆಯವರನ್ನು ವಂಚಿಸಿ, ರೆಸಾರ್ಟ್‌ಗೆ ಬಂದು ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದರು ಎಂದು ಪೊಲೀಸರು ಹೇಳಿದ್ದಾರೆ.
ರೆಸಾರ್ಟ್‌ನಲ್ಲಿ ತಂಗಿದ್ದ 10 ವಿದ್ಯಾರ್ಥಿನಿಯರು ಹಾಗೂ 10 ಮಂದಿ ವಿದ್ಯಾರ್ಥಿಗಳನ್ನು ಬಂಧಿಸಿದ ಪೊಲೀಸರು, ವಿದ್ಯಾರ್ಥಿಗಳ ಭವಿಷ್ಯ ಹಾಳಾಗಬಾರದು ಎಂಬ ಉದ್ದೇಶದಿಂದ ‘ಇನ್ನು ಮುಂದೆ ಹೀಗೆ ಮಾಡುವುದಿಲ್ಲ ’ ಎಂಬ ಮುಚ್ಚಳಿಕೆ ಬರೆಸಿಕೊಂಡು ಬಿಡುಗಡೆ ಮಾಡಿದ್ದಾರೆ.
ಈ ಸಂಬಂಧ ಬನ್ನೇರುಘಟ್ಟ ರಸ್ತೆಯಲ್ಲಿರುವ ರೆಸಾರ್ಟ್ ಮಾಲಿಕರಿಗೂ ಎಚ್ಚರಿಕೆ ನೀಡಲಾಗಿದೆ. ಈ ದಾಳಿಯ ನೇತೃತ್ವವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭಾಸ್ಕರ್ ರಾವ್ ವಹಿಸಿದ್ದರು.
(ಇನ್‌ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...












Click it and Unblock the Notifications