ಬೆಂಗಳೂರಿನಲ್ಲಿ ವೀರ ಸಂಗೊಳ್ಳಿ ರಾಯಣ್ಣನ 171ನೇ ಸಂಸ್ಮರಣೋತ್ಸವ
ಬೆಂಗಳೂರು : ಸ್ವಾರ್ಥ ಹಾಗೂ ಯಾವುದೇ ಫಲಾಪೇಕ್ಷೆಯಿಲ್ಲದೆ ನಾಡಿಗಾಗಿ ಹೋರಾಡಿದ ವೀರ ಸಂಗೊಳ್ಳಿರಾಯಣ್ಣನನ್ನು ಇಂದಿನ ಯುವಜನರು ಆದರ್ಶ ವ್ಯಕ್ತಿ ಎಂದು ಪರಿಗಣಿಸಬೇಕು. ಆತನ ಧ್ಯೇಯೋದ್ದೇಶಗಳನ್ನು ಪಾಲಿಸಬೇಕು. ಇಂಥ ನಿಸ್ವಾರ್ಥ ವೀರಯೋಧರ ಜೀವನ ಚರಿತ್ರೆಯನ್ನು ಓದಬೇಕು ಎಂದು ಮಾಜಿ ಸಚಿವೆ ಲೀಲಾದೇವಿ ಆರ್. ಪ್ರಸಾದ್ ಹೇಳಿದ್ದಾರೆ.
ಮಂಗಳವಾರ ರವೀಂದ್ರ ಕಲಾಕ್ಷೇತ್ರದಲ್ಲಿ ವೀರ ಸಂಗೊಳ್ಳಿ ರಾಯಣ್ಣನ 171ನೇ ಸಂಸ್ಮರಣೋತ್ಸವ ಉದ್ಘಾಟಿಸಿ ಮಾತನಾಡುತ್ತಿದ್ದ ಅವರು, ಸಂಗೊಳ್ಳಿ ರಾಯಣ್ಣ ಕನ್ನಡ ನಾಡಿಗೆ ನೀಡಿದ ಕೊಡುಗೆಯನ್ನು ಸ್ಮರಿಸಿದರು. ಕವಿ ದೊಡ್ಡರಂಗೇಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ, ಬೆಂಗಳೂರು ಮಹಾ ನಗರ ಪಾಲಿಕೆಯ ಉಪ ಮೇಯರ್ ಶಂಕರ್ ಅವರು, ನಗರದ ರೈಲು ನಿಲ್ದಾಣದ ಬಳಿ ಸಂಗೊಳ್ಳಿ ರಾಯಣ್ಣ ನ ಪ್ರತಿಮೆಯನ್ನು ಆದಷ್ಟು ಬೇಗ ಸ್ಥಾಪಿಸುವ ಭರವಸೆ ನೀಡಿದರು.
ಸಂಗೊಳ್ಳಿ ರಾಯಣ್ಣನ ಸಮಾಧಿ ಇರುವ ಬೆಳಗಾವಿ ಜಿಲ್ಲೆ, ಖಾನಾಪುರ ತಾಲೂಕಿನ ನಂದಗಢ ಅಭಿವೃದ್ಧಿಗೆ ಕಾರ್ಯಕ್ರಮ ರೂಪಿಸಬೇಕಾಗಿದೆ. ಬೆಂಗಳೂರು ಸಿಟಿ ರೈಲು ನಿಲ್ದಾಣಕ್ಕೆ ವೀರ ಸಂಗೊಳ್ಳಿ ರಾಯಣ್ಣನ ಹೆಸರು ಇಡುವಂತೆ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಮಹಾನಗರ ಪಾಲಿಕೆಯ ನೌಕರರ ಸಹಕಾರ ಸಂಘದ ಅಧ್ಯಕ್ಷ ಪಿ. ದಯಾನಂದ್ ಹೇಳಿದರು.
ಕಾರ್ಯಕ್ರಮದಲ್ಲಿ ಪಾಲಿಕೆ ಸದಸ್ಯರಾದ ಬಿ.ಎಂ. ನರಸಿಂಹಮೂರ್ತಿ, ಎಚ್. ರವೀಂದ್ರ, ದುಂಡೇಗೌಡ, ಬಿ. ಸೋಮಶೇಖರ್ ಮೊದಲಾದವರು ಪಾಲ್ಗೊಂಡಿದ್ದರು. ಕೊನೆಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಾಟಕ ಪ್ರದರ್ಶನ ನಡೆಯಿತು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...