ಸದ್ಯವೇ ಉ.ಕರ್ನಾಟಕದಲ್ಲಿ ಹೂಡಿಕೆದಾರರ ಸಮಾವೇಶ
ಬೆಂಗಳೂರು: ಉತ್ತರ ಕರ್ನಾಟಕ ಪ್ರದೇಶದಲ್ಲಿ ಕೈಗಾರಿಕೆಗಳನ್ನು ಉತ್ತೇಜಿಸಲು ಬಿಜಾಪುರ ಮತ್ತು ಬಾಗಲಕೋಟೆಗಳಲ್ಲಿ ಹೂಡಿಕೆದಾರರ ಸಮಾವೇಶವನ್ನು ಸದ್ಯವೇ ಹಮ್ಮಿಕೊಳ್ಳುವುದಾಗಿ ಭಾರೀ ಕೈಗಾರಿಕಾ ಸಚಿವ ಆರ್. ವಿ. ದೇಶಪಾಂಡೆ ತಿಳಿಸಿದ್ದಾರೆ.
ಉತ್ತರ ಕರ್ನಾಟಕದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಮೂಲಭೂತ ಸೌಕರ್ಯ ಕಲ್ಪಿಸಲು ಸರಕಾರ ಬದ್ಧವಾಗಿದೆ. 175 ತಾಲ್ಲೂಕುಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವ ಯೋಜನೆ ಸರಕಾರದ ಮುಂದಿದೆ. ಯಾವ ಕೈಗಾರಿಕೆಗೆ ಯಾವ ತಾಲ್ಲೂಕು ಪ್ರಶಸ್ತವಾಗಿದೆ ಎಂಬ ಬಗ್ಗೆ ಮಾಹಿತಿ ಸಂಗ್ರಹಿಸಲಾಗುವುದು ಎಂದು ದೇಶಪಾಂಡೆ ಹೇಳಿದರು. ಅವರು ಗುರುವಾರ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ರಾಮದಾಸ್ ಅವರ ಪ್ರಶ್ನೆಗೆ ಉತ್ತರಿಸುತ್ತಿದ್ದರು.
ಮೈಸೂರಿನಲ್ಲಿಯೂ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಕಾರಿಡಾರ್ ಯೋಜನೆ ಪೂರ್ಣಗೊಂಡಾಗ ಕೈಗಾರಿಕೆಗಳ ಸ್ಥಾಪನೆಗೆ ಹೆಚ್ಚಿನ ಅವಕಾಶಗಳು ಬರುವ ಸಾಧ್ಯತೆ ಇದೆ ಎಂಬ ವಿಶ್ವಾಸವನ್ನು ಸಚಿವರು ವ್ಯಕ್ತಪಡಿಸಿದರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...