ಮಾ.31ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಪ್ರಾರಂಭ
ಬೆಂಗಳೂರು, ಮಾ.30: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟಗಳಲ್ಲಿ ಒಂದಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಸೋಮವಾರದಿಂದ(ಮಾ.31) ಕರ್ನಾಟಕ ರಾಜ್ಯದಾದ್ಯಂತ ಪ್ರಾರಂಭವಾಗಲಿವೆ. ಪರೀಕ್ಷೆಯಲ್ಲಿ ಯಾವುದೇ ರೀತಿಯ ನಕಲು ನಡೆಯದಂತೆ ತಡೆಯಲು ಸಿದ್ಧವಾಗಿರುವುದಾಗಿ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ನಿರ್ದೇಶಕ ಡಿ.ಎಸ್.ರಾಜಣ್ಣ ತಿಳಿಸಿದ್ದಾರೆ.
4,57,496 ವಿದ್ಯಾರ್ಥಿಗಳು ಮತ್ತು 3,87,347 ವಿದ್ಯಾರ್ಥಿನಿಯರು ಸೇರಿದಂತೆ ಈ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಸುಮಾರು 8,44,843 ವಿದ್ಯಾರ್ಥಿಗಳು ಬರೆಯಲಿದ್ದಾರೆ. ಒಟ್ಟು 2,545 ಪರೀಕ್ಷಾ ಕೇಂದ್ರಗಳಲ್ಲಿ 110 ಅತಿ ಸೂಕ್ಷ್ಮ, ಹಾಗೂ 308 ಸೂಕ್ಷ್ಮ ಪರೀಕ್ಷಾ ಕೇಂದ್ರಗಳೆಂದು ಗುರುತಿಸಲಾಗಿದೆ. ಅತಿ ಸೂಕ್ಷ್ಮ ಪರೀಕ್ಷಾ ಕೇಂದ್ರಗಳಲ್ಲಿ ನಕಲನ್ನು ತಡೆಯಲು ವಿಡಿಯೋ ಚಿತ್ರೀಕರಣ ಮಾಡಲಾಗುತ್ತದೆ. ಹಾಗೆಯೇ 1506 ಕ್ಲಸ್ಟರ್ ಕೇಂದ್ರಗಳಿರುತ್ತವೆ ಎಂದು ರಾಜಣ್ಣ ತಿಳಿಸಿದರು.
ಎಸ್‌ಎಸ್‌ಎಲ್‍ಸಿ ಪರೀಕ್ಷೆಗಳ ಮೌಲ್ಯಮಾಪನ ಏ.11 ರಿಂದ ಆರಂಭವಾಗಲಿದೆ. 196 ಮೌಲ್ಯಮಾಪನ ಕೇಂದ್ರಗಳಲ್ಲಿ 37,132 ಮೌಲ್ಯಮಾಪಕರು ಮೌಲ್ಯಮಾಪನ ಮಾಡಲಿದ್ದಾರೆ. ಫಲಿತಾಂಶಗಳನ್ನು ಮೇ ತಿಂಗಳ ಮೊದಲ ವಾರದಲ್ಲಿ ಪ್ರಕಟಿಸಲು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರ್ಧರಿಸಿದೆ.
ಪರೀಕ್ಷೆಯಲ್ಲಿ ಅಕ್ರಮವನ್ನು ತಡೆಯಲು ಜಾಗೃತ ದಳಗಳನ್ನು ರಚಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ಪ್ರದೇಶವನ್ನು ನಿರ್ಬಂಧಿತ ಪ್ರದೇಶ ಎಂದು ಘೋಷಿಸಿ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸಲು ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
(ದಟ್ಸ್‌ಕನ್ನಡ ವಾರ್ತೆ)
2008ನೇ ಸಾಲಿನ ಎಸ್ಎಸ್ಎಲ್‌ಸಿ ಪರೀಕ್ಷೆ ವೇಳಾಪಟ್ಟಿ


Click it and Unblock the Notifications
