ಶೀಘ್ರದಲ್ಲಿ ಒಂಬತ್ತು ಸಾವಿರ ಶಿಕ್ಷಕರ ನೇಮಕ
ಬೆಂಗಳೂರು, ಜು. 4 : ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ವಸತಿ ನಿಲಯಗಳಲ್ಲಿದ್ದು ವಿಧ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಸಲುವಾಗಿ ಸುಮಾರು 9 ಸಾವಿರ ಶಿಕ್ಷಕರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಿ. ಸುಧಾಕರ್ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಈ ವಸತಿ ನಿಲಯದಲ್ಲಿರುವ ವಿದ್ಯಾರ್ಥಿಗಳಿಗೆ ಕಷ್ಟಕರ ಎನ್ನುವ ಗಣಿತ, ವಿಜ್ಞಾನ ಮತ್ತು ಇಂಗ್ಲಿಷ್ ವಿಷಯಗಳ ಬೋಧನೆಗಾಗಿ ಗುತ್ತಿಗೆ ಆಧಾರದ ಮೇಲೆ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು. ಆ ಮೂಲಕ ಅವರ ಶೈಕ್ಷಣಿಕ ಪ್ರಗತಿಯನ್ನು ಉತ್ತಮಗೊಳಿಸುವ ಮಹತ್ವಾಕಾಂಕ್ಷೆ ಸರ್ಕಾರದ್ದಾಗಿದೆ ಎಂದರು.
ಈ ರೀತಿ ನೇಮಕ ಮಾಡಿಕೊಂಡ ಶಿಕ್ಷಕರನ್ನು ಎಲ್ಲ ವಸತಿ ನಿಲಯಗಳಿಗೆ ನಿಯೋಜಿಸಿ ಅಲ್ಲಿರುವ ವಿದ್ಯಾರ್ಥಿಗಳಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸಲಾಗುವುದು. ಜತೆಗೆ ರಾಜ್ಯದಲ್ಲಿರುವ ಮೂರು ಸಾವಿರ ವಸತಿ ನಿಲಯಗಳಲ್ಲಿ ಈ ನಿಯಮವನ್ನು ಜಾರಿಗೆ ತಂದು ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳ ಪರೀಕ್ಷೆ ನಡೆಸಿ ಶೈಕ್ಷಣಿಕವಾಗಿ ಪ್ರಗತಿ ಸಾಧಿಸುವ ಹಾಗೆ ಮಾಡುವುದು ಸರ್ಕಾರ ಉದ್ದೇಶವಾಗಿದೆ ಎಂದು ಹೇಳಿದರು.
ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದ ಕೆಲವಡೆ ಬಾಡಿಗೆ ಕಟ್ಟಡದಲ್ಲಿ ವಸತಿ ನಿಲಯವನ್ನು ನಡೆಸಲಾಗುತ್ತದೆ. ಈ ಸಮಸ್ಯೆಯನ್ನು ನೀಗಿಸಲು ಮುಂದಿನ ನಾಲ್ಕು ವರ್ಷದಲ್ಲಿ ಸುಮಾರು 600 ನೂತನ ವಸತಿ ನಿಲಯಗಳ ಕಟ್ಟಡವನ್ನು ನಿರ್ಮಿಸಲಾಗಿದೆ ಎಂದರು. ಇಲಾಖೆಗೆ ಸಂಬಂಧಿಸಿದ 1.48 ಕೋಟಿ ರುಪಾಯಿಗಳ ಅವ್ಯವಹಾರ ಮಾಡಿರುವ ಅಧಿಕಾರಿ ಪಿ.ಆರ್. ಪಾಂಡುರಂಗಪ್ಪ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಸಚಿವರು ಹೇಳಿದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications