ಸಿದ್ದು ಬಲೆಗೆ ರೆಡ್ಡಿಸ್ ಮಾರಿಷಸ್ ಗೆ ಪ್ರಯಾಣ
ಬೆಂಗಳೂರು, ಜು. 10 : ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಅವರನ್ನು ಬಿಜೆಪಿಗೆ ಸೆಳೆಯಲು ಶತಾಯ ಗತಾಯ ಪ್ರಯತ್ನ ನಡೆಸಿರುವ ರೆಡ್ಡಿ ಬ್ರದರ್ಸ್ ಶೀಘ್ರದಲ್ಲೇ ಮಾರಿಷಸ್ ಗೆ ತೆರಳಲಿದ್ದಾರೆ. ಮಾರಿಷಸ್ ಪ್ರವಾಸದಲ್ಲಿರುವ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.
ಈ ಬಗ್ಗೆ ಮಾಹಿತಿ ಸಂಗ್ರಹಿಸಲು ರಾಜ್ಯ ಕಾಂಗ್ರೆಸ್ ಮುಖಂಡರಿಗೆ ಸೂಚನೆ ನೀಡಿರುವ ಎಐಸಿಸಿ, ಸಿದ್ದರಾಮಯ್ಯ ಅವರ ನಡೆಯ ಬಗ್ಗೆ ಕಣ್ಣಿಟ್ಟಿರಲು ಹೇಳಿದೆ. ಈ ಮಧ್ಯೆ ಸಿದ್ದರಾಮಯ್ಯ ಬೆಂಬಲಿಗರಾದ ಕಡೂರು ಕೃಷ್ಣಮೂರ್ತಿ, ಸತೀಶ್ ಜಾರಕಿಹೊಳಿ ಮತ್ತು ಕೆ.ವೆಂಕಟೇಶ್ ಬುಧವಾರ ರಹಸ್ಯ ಸ್ಥಳದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿರುವುದು ಈ ಸುದ್ದಿಗೆ ಮತ್ತಷ್ಟು ರೆಕ್ಕೆ ಪುಕ್ಕ ದೊರೆತಿವೆ. ಈ ಮೂವರಿಗೂ ಬಳ್ಳಾರಿ ರೆಡ್ಡಿ ಸಹೋದರರು ಬಿಜೆಪಿ ಸೇರುವಂತೆ ಆಹ್ವಾನ ನೀಡಿರುವ ಹಿನ್ನಲೆಯಲ್ಲಿ ಈ ಮಾತುಕತೆ ನಡೆದಿದೆ ಎನ್ನಲಾಗಿದೆ. ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯ ಸೇರಿ ಅನೇಕ ಶಾಸಕರು ಬಿಜೆಪಿ ಸೇರ್ಪಡೆಗೊಳ್ಳುವ ದಿನಗಳು ದೂರವಿಲ್ಲ ಎನ್ನಲಾಗಿದೆ.
ಸಂಪುಟ ವಿಸ್ತರಣೆ
ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳನ್ನು ತೊರೆದು ಬಿಜೆಪಿ ಸೇರ್ಪಡೆಗೊಂಡಿರುವ ಬಾಲಚಂದ್ರ ಜಾರಕಿಹೊಳಿ, ಆನಂದ ಅಸ್ನೋಟಿಕರ್ ಮತ್ತು ಶಿವನಗೌಡ ನಾಯಕ್ ಅವರಿಗೆ ಸಂಪುಟದಲ್ಲಿ ಸಚಿವ ಸ್ಥಾನ ನೀಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಗುರುವಾರ ತಿಳಿಸಿದ್ದಾರೆ. ಇಂದು ಸಂಜೆ ರಾಜಭವನದಲ್ಲಿ ನಡೆಯಲಿರುವ ಸರಳ ಸಮಾರಂಭದಲ್ಲಿ ರಾಜ್ಯಪಾಲ ರಾಮೇಶ್ವರ ಠಾಕೂರ್ ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಜತೆಗೆ ಬಿಜೆಪಿ ಶಾಸಕರಾದ ಸಿ.ಟಿ.ರವಿ ಮತ್ತು ಆನೇಕಲ್ ನಾರಾಯಣಸ್ವಾಮಿ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಇವರಿಗೆ ಸ್ಥಾನ ಸಿಗಲಿದೆ ಎನ್ನುವ ಬಗ್ಗೆ ಖಚಿತವಾದ ಮಾಹಿತಿ ಲಭ್ಯವಾಗಿಲ್ಲ. ಹಾಗೆಯೇ ತುರುವೇಕೆರೆ ಶಾಸಕ ಜಗ್ಗೇಶ್ ಮತ್ತು ಜೆಡಿಎಸ್ ನ ಉಮೇಶ್ ಕತ್ತಿ ಬಿಜೆಪಿ ಸೇರ್ಪಡೆಗೊಳ್ಳುವ ಸಾಧ್ಯತೆಗಳಿವೆ.
(ದಟ್ಸ್ ಕನ್ನಡ ವಾರ್ತೆ)
ಗುರುವಾರ ಸಚಿವ ಸಂಪುಟ ವಿಸ್ತರಣೆ ಸಂಭವ












Click it and Unblock the Notifications