ದಸರಾ ಉತ್ಸವಕ್ಕೆ ರು.10 ಕೋಟಿ ಅನುದಾನ
ಮೈಸೂರು, ಜು. 14 : ವಿಶ್ವ ವಿಖ್ಯಾತ ಮೈಸೂರು ದಸರಾ ಕಾರ್ಯಕ್ರಮಕ್ಕೆ ರಾಜ್ಯ ಬಜೆಟ್ ನಲ್ಲಿ 10 ಕೋಟಿ ರುಪಾಯಿಗಳನ್ನು ಒದಗಿಸಲಾಗುವುದೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ನಗರದ ಚಾಮುಂಡಿ ಬೆಟ್ಟದ ರಸ್ತೆಯಲ್ಲಿರುವಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಡಳಿತ ಅಭಿವೃದ್ಧಿ ಸಂಸ್ಥೆಯ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಮೈಸೂರು ನಗರ ಅಭಿವೃದ್ಧಿ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡುತ್ತಿದ್ದ ಅವರು, ಈಗಿನಿಂದಲೇ ದಸರಾ ಕಾರ್ಯಕ್ರಮಗಳ ಕೆಲಸ ಕಾರ್ಯಗಳನ್ನು ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಮೈಸೂರಿನ ಪಾರಂಪರಿಕ ಕಟ್ಟಡಗಳಿಗೆ 5 ಕೋಟಿ ರುಪಾಯಿಗಳನ್ನು ನೀಡಲಾಗುವುದೆಂದು ಹೇಳಿದ ಯಡಿಯೂರಪ್ಪ, ನರ್ಮ್ ಯೋಜನೆಯ ಅನುಷ್ಠಾನಕ್ಕೆ ವಿಶೇಷ ಅಧಿಕಾರಿಯೊಬ್ಬರನ್ನು ಶೀಘ್ರದಲ್ಲಿಯೇ ನೇಮಿಸಲಾಗುವುದು ಎಂದು ಹೇಳಿದರು. ಪ್ರವಾಸಿಗರಿಗೆ ಅನುಕೂಲವಾಗಲೆಂದು ಮೋನೊ ರೈಲು ವ್ಯವಸ್ಥೆ ಕಲ್ಪಿಸಲು ಉದ್ದೇಶಿಸಲಾಗಿದೆ . ಈ ಯೋಜನೆಗೆ ಇನ್ನೊಂದು ವರ್ಷದೊಳಗೆ ಅಂತಿಮ ರೂಪ ನೀಡಲಾಗುವುದು ಎಂದು ಭರವಸೆ ನೀಡಿದರು.
ಮೈಸೂರಿನ ಅಭಿವೃದ್ಧಿ ಯೋಜನೆಗಳ ಅನುಷ್ಠಾನ ಕುರಿತು ಪ್ರತಿ ತಿಂಗಳ ಪರಿಶೀಲನೆ ನಡೆಸಲಾಗುತ್ತದೆ. ಮೂರು ತಿಂಗಳಿಗೊಮ್ಮೆ ಸ್ವತಃ ಯೋಜನೆಗಳ ಅನುಷ್ಠಾನದ ಬಗ್ಗೆ ಪ್ರಗತಿ ಪರಿಶೀಲನೆ ಸಭೆ ನಡೆಸಿ ವಿವರಗಳನ್ನು ಜನರ ಮುಂದೆ ಇಡಲಾಗುವುದು ಎಂದು ಯಡಿಯೂರಪ್ಪ ಹೇಳಿದರು.
(ದಟ್ಸ್ ಕನ್ನಡ ವಾರ್ತೆ)


Click it and Unblock the Notifications
